Bomb Threat: ಬೆಂಗಳೂರಿನ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ, ತೀವ್ರ ಪರಿಶೀಲನೆ
Bomb Threat: ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಶಾಲೆಗೆ ವರ್ತೂರು ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ.


ಬೆಂಗಳೂರು: ಬೆಂಗಳೂರಿನ (Bengaluru) ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕ್ರಿಸಲಿಸ್ ಹೈ ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಹಾಕಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಶಾಲೆಗೆ ವರ್ತೂರು ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ.
ಜುಲೈ 18ರಂದು ಆರ್.ಆರ್ ನಗರ, ಕೆಂಗೇರಿಯ ಶಾಲೆಗಳೂ ಸೇರಿದಂತೆ ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಆಯಾ ಶಾಲೆಗಳಿಗೆ ಭೇಟಿ ನೀಡಿದ್ದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿ ಮಕ್ಕಳನ್ನು ಹೊರಗೆ ಕಳುಹಿಸಿ ತಪಾಸಣೆ ಮಾಡಿದ್ದರು. ಬಳಿಕ ಅವುಗಳೆಲ್ಲ ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಎಂಬುದು ಬೆಳಕಿಗೆ ಬಂದಿತ್ತು.
ತಿಂಗಳ ಹಿಂದಷ್ಟೇ ಹಾಸನದ ಮೂರು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದವು. ನಂತರ ಅವು ಹುಸಿ ಬೆದರಿಕೆ ಸಂದೇಶಗಳೆಂಬುದು ದೃಢಪಟ್ಟಿತ್ತು. ಇತ್ತೀಚೆಗೆ ಇಂಥ ಹುಸಿ ಬೆದರಿಕೆ ಸಂದೇಶಗಳು ಸಾಮಾನ್ಯವಾಗುತ್ತಿದ್ದು, ಶಾಲೆಗಳ ನಿತ್ಯದ ಕಾರ್ಯಾಚರಣೆಗೆ ಭಾರಿ ಅಡಚಣೆಯಾಗಿ ಮಾರ್ಪಟ್ಟಿವೆ.
ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಕೂಡ ಮಂಗಳವಾರ ಬಾಂಬ್ ಬೆದರಿಕೆ ಕರೆ ಬಂದಿದೆ. ಇದರಿಂದಾಗಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಜತೆಗೆ, ಸೂರತ್ ಶಾಲೆಗಳಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಬಾಂಬ್ ಬೆದರಿಕೆ ಸಂದೇಶ ಬಂದ ನಂತರ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಅಪರಾಧ ವಿಭಾಗ ಸೇರಿದಂತೆ ತಂಡಗಳು ತಕ್ಷಣ ತಪಾಸಣೆ ನಡೆಸಿದವು. ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ.
ಇದನ್ನೂ ಓದಿ: Bomb Threat: ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್ ಬೆದರಿಕೆ