ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಕ್ಲೀನ್ ಚಿಟ್
ಕಲ್ಲಿದ್ದಲು ನಿಕ್ಷೇಪ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದೆ. ಈ ಮೂಲಕ ಅವರ ವಿರುದ್ಧ ಹೊರಡಿಸಲಾಗಿದ್ದ ಸಮನ್ಸ್ ಆದೇಶವನ್ನು ರದ್ದುಗೊಳಿಸಿದೆ. 2024ರಲ್ಲಿ ನಿಧನರಾಗಿರುವ ಮನಮೋಹನ್ ಸಿಂಗ್ ಅವರ ವಿರುದ್ಧ ತನಿಖೆ ನಡೆಸಲು ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಹೇಳಿದೆ.
ಸಂಗ್ರಹ ಚಿತ್ರ -
ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಪ್ರಕರಣಕ್ಕೆ (Coal block allocation case) ಸಂಬಂಧಿಸಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Ex-PM Manmohan Singh) ಅವರ ವಿರುದ್ಧದ ಪ್ರಕರಣವನ್ನು ಸುಪ್ರೀಂ ಕೋರ್ಟ್ (Supreme Court) ಮುಕ್ತಾಯಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ (Chief Justice Surya Kant) ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ, ವಿ. ಮೋಹನ ಅವರನ್ನೊಳಗೊಂಡ ಪೀಠವು ಈ ಪ್ರಕರಣದಲ್ಲಿ ಮನಮೋಹನ್ ಸಿಂಗ್ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಇದಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನೀಡಿರುವ ಮುಕ್ತಾಯ ವರದಿಯನ್ನು ಸಿಬಿಐ ಸ್ವೀಕರಿಸಿದೆ.
ಕಾಂಗ್ರೆಸ್ ಆಡಳಿತದಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮನಮೋಹನ್ ಸಿಂಗ್ ಅವರ ವಿರುದ್ಧ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಈ ಕುರಿತು ಅವರಿಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ಆದೇಶವನ್ನು ಜಾರಿಗೊಳಿಸಲಾಗಿತ್ತು. ಆದರೆ ಬುಧವಾರ ಸುಪ್ರೀಂ ಕೋರ್ಟ್ ಈ ಕುರಿತಾದ ವಿಚಾರಣೆಯನ್ನು ಕೊನೆಗೊಳಿಸಿದ್ದು, ಮನಮೋಹನ್ ಸಿಂಗ್ ವಿರುದ್ಧ ಹೊರಡಿಸಲಾದ ಸಮನ್ಸ್ ಆದೇಶವನ್ನು ರದ್ದುಗೊಳಿಸಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಸರ್ಕಾರದ ವಿರುದ್ಧ ದಾಖಲಾಗಿರುವ ಅತ್ಯಂತ ಪ್ರಮುಖ ಕ್ರಿಮಿನಲ್ ಪ್ರಕರಣ ಇದಾಗಿದೆ. ಇದೀಗ ಮನಮೋಹನ್ ಸಿಂಗ್ ಅವರು ಇದರಿಂದ ಔಪಚಾರಿಕವಾಗಿ ದೋಷಮುಕ್ತರಾಗಿದ್ದಾರೆ ಎಂದು ಉನ್ನತ ನ್ಯಾಯಾಲಯ ಹೇಳಿದೆ.
ಕಕ್ಷಿಗಳ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರ ತಂಡವು ಸಿಬಿಐ ಸಲ್ಲಿಸಿರುವ ಎರಡು ಮುಕ್ತಾಯ ವರದಿಗಳನ್ನು ನಾವು ಪರಿಶೀಲಿಸಿದ್ದೇವೆ. ಇದರಲ್ಲಿ ಪ್ರಕರಣದ ತನಿಖೆ ಮುಂದುವರಿಸಲು ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಉಲ್ಲೇಖಿಸಲಾಗಿದೆ. ಇದನ್ನು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಹೇಳಿದೆ.
ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ
ಏನು ಈ ಪ್ರಕರಣ?
ಒಡಿಶಾದಲ್ಲಿ 2005ರಲ್ಲಿ ತಲಬಿರಾ-II ಕಲ್ಲಿದ್ದಲು ನಿಕ್ಷೇಪ ಹಂಚಿಕೆಗೆ ಸಂಬಂಧಿಸಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕೈಗಾರಿಕೋದ್ಯಮಿ ಕುಮಾರ್ ಮಂಗಲಂ ಬಿರ್ಲಾ, ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಪಿ.ಸಿ. ಪಾರಖ್ ಮತ್ತು ಇತರ ಮೂವರನ್ನು ವಿಶೇಷ ನ್ಯಾಯಾಲಯವು ಆರೋಪಿಗಳಾಗಿ ಗುರುತಿಸಿ ಸಮನ್ಸ್ ಜಾರಿಗೊಳಿಸಿತ್ತು. ಈ ಕುರಿತು 2015ರ ಏಪ್ರಿಲ್ 1ರಂದುವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮನಮೋಹನ್ ಸಿಂಗ್ ಅವರಿಗೆ ವಿಶೇಷ ನ್ಯಾಯಾಲಯವು ಹೊರಡಿಸಿದ್ದ ಸಮನ್ಸ್‌ಗೆ ಮಧ್ಯಂತರ ತಡೆ ನೀಡಿತ್ತು.