Murder Case: ಪಾರ್ಟಿ ಮಾಡುತ್ತಿದ್ದ ಮಾಜಿ ಗ್ರಾ.ಪಂ ಅಧ್ಯಕ್ಷನ ಮೇಲೆ ಡೆಡ್ಲಿ ಅಟ್ಯಾಕ್; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ 45 ವರ್ಷದ ನಂಜೇಶ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.


ಕನಕಪುರ: ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಗುಂಪೊಂದು ಮಾರಕಾಸ್ತ್ರಗಳಿಂದ (Murder Case) ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ 45 ವರ್ಷದ ನಂಜೇಶ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ರಾತ್ರಿ ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಾ ಕುಳಿತಿದ್ದಾಗಲೇ ಈ ದಾಳಿ ನಡೆಸಲಾಗಿದೆ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಂಜೇಶ್ ಅವರು ಅಚ್ಚಲು ಗ್ರಾಮದ ಮಾಜಿ ಪಂಚಾಯತ್ ಅಧ್ಯಕ್ಷರಾಗಿದ್ದರು. ಸಾತನೂರು ಗ್ರಾಮದ ಡಾಬವೊಂದರಲ್ಲಿ ಪಾರ್ಟಿ ನಡೆಯುತ್ತಿತ್ತು.
ನಂಜೇಶ್ ತಮ್ಮ ಸ್ನೇಹಿತರ ಜೊತೆಗೆ ಡಾಬದಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ, ನಾಲ್ಕೈದು ಜನರ ತಂಡವೊಂದು ದಾಳಿ ನಡೆಸಿದೆ. ದಾಳಿಕೋರರು ಮಾರಕಾಸ್ತ್ರಗಳಿಂದ ನಂಜೇಶ್‌ರನ್ನು ಕೊಚ್ಚಿ ಹತ್ಯೆ ಮಾಡಲಾಗಿದೆ. ಈ ದಾಳಿಯ ಹಿನ್ನೆಲೆಯಲ್ಲಿ ಜಮೀನು ವಿವಾದವೇ ಮುಖ್ಯ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ಘಟನೆಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಮತ್ತು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಾತನೂರು ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಹತ್ಯೆ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ದಾಳಿಕೋರರ ಗುರುತನ್ನು ಪತ್ತೆಹಚ್ಚಲು ಪೊಲೀಸರು ಸ್ಥಳೀಯರಿಂದ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.
ದಾಳಿಯ ಸಂದರ್ಭದಲ್ಲಿ ಡಾಬದಲ್ಲಿ ಇದ್ದ ಜನರಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಕಲೆಹಾಕಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಸ್ಥಳೀಯ ರಾಜಕೀಯ ವೈಷಮ್ಯಗಳೂ ಇರಬಹುದೆಂದು ಶಂಕಿಸಲಾಗಿದೆ. ಈ ಘಟನೆಯಿಂದ ಸಾತನೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕೊಲೆ ಮಾಡಿದವರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Murder Case: ಸಹೋದರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ತಮ್ಮ
ಪ್ರತ್ಯೇಕ ಘಟನೆಯಲ್ಲಿ ಜೂ. 24ರಂದು ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ಲೋಕೇಶ್ (45) ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಕುರಿತು ಪತ್ನಿ ಚಂದ್ರಕಲಾ ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ತಾನೇ ಸುದ್ದಿಗೋಷ್ಠಿ ನಡೆಸಿ ಪತಿಯ ಸಾವಿನ ತನಿಖೆ ನಡೆಸುವಂತೆ ಒತ್ತಾಯ ಕೂಡ ಮಾಡಿದ್ದರು. ಈ ಸಂಬಂಧ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಗ್ಗೆ ವಿಶೇಷ ಕಾಳಜಿ ವಹಿಸಿದ ಪೊಲೀಸರು, ತನಿಖೆ ನಡೆಸಿದಾಗ ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಅಲ್ಲದೇ ಪತ್ನಿ ಚಂದ್ರಕಲಾಳೇ ಪತಿ ಲೋಕೇಶನ ಕೊಲೆಗೆ ಸುಪಾರಿ ನೀಡಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು. ಚಂದ್ರಕಲಾ ತನ್ನ ಪತಿಯನ್ನು ಕೊಲೆ ಮಾಡಿರುವುದು ತಿಳಿದು ಬಂದಿದೆ.