ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಭಾರತದ ಆರ್ಥಿಕತೆ, ನಿರುದ್ಯೋಗದ ಬಗ್ಗೆ ಅಮೆರಿಕದಲ್ಲಿ ರಾಹುಲ್ ಗಾಂಧಿ ಟೀಕೆ: 'ದೇಶ ವಿರೋಧಿ' ಎಂದ ಬಿಜೆಪಿ

Rahul Gandhi US Visit: ಅಮೆರಿಕ ಪ್ರವಾಸದಲ್ಲಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾರತದ ಆರ್ಥಿಕ ಬಿಕ್ಕಟ್ಟು ಹಾಗೂ ನಿರುದ್ಯೋಗ ಸಮಸ್ಯೆಗಳ ಕುರಿತು ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿದೇಶದಲ್ಲಿ ಭಾರತದ ಪ್ರಗತಿಯನ್ನು ಮತ್ತು ಪ್ರಜಾಪ್ರಭುತ್ವವನ್ನು ಕೆಟ್ಟದಾಗಿ ಬಿಂಬಿಸುವುದು ಅವರಿಗೆ ಅಭ್ಯಾಸವಾಗಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ವಿದೇಶದಲ್ಲಿ ಭಾರತದ ಆರ್ಥಿಕತೆ ಬಗ್ಗೆ ರಾಹುಲ್ ಗಾಂಧಿ ಟೀಕೆ: ಬಿಜೆಪಿ ಆಕ್ರೋಶ

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ರಾಹುಲ್ ಗಾಂಧಿ -

Profile
Jyoti S Nov 18, 2026 2:31 PM

ವಾಷಿಂಗ್ಟನ್‌, ನ. 18: ಭಾರತದ ಆರ್ಥಿಕ ಪರಿಸ್ಥಿತಿ ಮತ್ತು ನಿರುದ್ಯೋಗ ಸಮಸ್ಯೆ ಕುರಿತು ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ (Rahul Gandhi) ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅಮೆರಿಕಾದ ನ್ಯೂಯಾರ್ಕ್‌ನಲ್ಲಿರುವ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ (Columbia University) ಮಾತನಾಡಿದ ರಾಹುಲ್‌ ಗಾಂಧಿ, ಭಾರತದ ಆರ್ಥಿಕತೆ ವಿಪತ್ತಿನತ್ತ ಸಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜತೆಗೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಿದ್ದು ಶಿಕ್ಷಣ ವ್ಯವಸ್ಥೆಯಲ್ಲೂ ಗಂಭೀರ ಸಮಸ್ಯೆಗಳಿವೆ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಆಡಳಿತರೂಢ ಬಿಜೆಪಿ, ರಾಹುಲ್‌ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ದೇಶದ ಪ್ರಗತಿ ಮತ್ತು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಾರೆ, ಅವರಿಗೆ ಅದು ಅಭ್ಯಾಸವಾಗಿದೆ ಎಂದು ಕಿಡಿಕಾರಿದೆ. ಪ್ರಧಾನಿ ಮೋದಿ ವಿದೇಶದಲ್ಲಿ ಭಾರತದ ಹಿತಾಸಕ್ತಿ ಮತ್ತು ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಾರೆ, ಆದರೆ ರಾಹುಲ್‌ ಗಾಂಧಿ ದೇಶಕ್ಕೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ.

ವಿಡಿಯೊ ನೋಡಿ:



ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ

ಕೊಲಂಬಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಮತ್ತು ಅಧ್ಯಾಪಕರನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್‌ ಗಾಂಧಿ, ದೇಶದಲ್ಲಿ ಉದ್ಯೋಗ ಸೃಷ್ಟಿ ಕುಂಠಿತಗೊಂಡಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ದೇಶವು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ವಾದಿಸಿದ್ದರು. ಕೆಲವೇ ಕೆಲವು ಕಾರ್ಪೊರೇಟ್ ಕಂಪನಿಗಳ ಕಡೆಗೆ ಸಂಪತ್ತು ಕೇಂದ್ರೀಕೃತವಾಗುತ್ತಿದ್ದು, ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಿಚ್ಚು ಹಚ್ಚಿದ ರಾಹುಲ್‌ ಗಾಂಧಿಯ 'ಅಪ್ಪನ ತೊಡೆ ಮೇಲೆ ಅಮ್ಮ ಕೂರುತ್ತಿದ್ದರು' ಹೇಳಿಕೆ

ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ

ಈ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ವಕ್ತಾರ ಪ್ರದೀಪ್‌ ಭಂಡಾರಿ, "ರಾಹುಲ್ ಗಾಂಧಿಗೆ ದೇಶದ ಪ್ರಗತಿಯನ್ನು ಸಹಿಸಲು ಆಗುತ್ತಿಲ್ಲ. ಭಾರತದ ಆರ್ಥಿಕತೆಯು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವುದನ್ನು ಜಗತ್ತು ಮೆಚ್ಚಿಕೊಳ್ಳುತ್ತಿದ್ದರೆ, ರಾಹುಲ್ ಗಾಂಧಿ ಮಾತ್ರ ವಿದೇಶಗಳಿಗೆ ತೆರಳಿ ದೇಶದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಅವರು ಭಾರತದ ವಿರೋಧಿಯಂತೆ ವರ್ತಿಸುತ್ತಿದ್ದಾರೆ" ಎಂದು ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ಅವರನ್ನು ಹೊಗಳಿರುವ ಪ್ರದೀಪ್‌ ಭಂಡಾರಿ, ಪ್ರಧಾನಿ ಮೋದಿ ಅವರು ವಿದೇಶ ಪ್ರವಾಸಕ್ಕೆ ಹೋದಾಗ ದೇಶದ ಹಿತಾಸಕ್ತಿ ಮತ್ತು ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಾರೆ. ಆದರೆ ರಾಹುಲ್‌ ಗಾಂಧಿ ಮಾತ್ರ ಭಾರತದ ಪ್ರಜಾಪ್ರಭುತ್ವ ಮತ್ತು ಆರ್ಥಿಕ ಪ್ರಗತಿಯ ವಿರುದ್ಧ ಮಾತನಾಡುವ ಮೂಲಕ ರಾಷ್ಟ್ರಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಎರಡು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಕೊಲಂಬಿಯಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ಬಳಿಕ ನವೆಂಬರ್ 18ರಂದು ಚಿಕಾಗೋ ವಿಶ್ವವಿದ್ಯಾಲಯದಲ್ಲೂ ಸಂವಾದ ನಡೆಸುವ ಕಾರ್ಯಕ್ರಮವಿದೆ. ಜಾಗತಿಕ ರಾಜಕೀಯ, ಭೌಗೋಳಿಕ ರಾಜತಾಂತ್ರಿಕತೆ ಮತ್ತು ಭಾರತದ ವಿದೇಶಾಂಗ ನೀತಿಯ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.