ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Dharwad Protest: ಧಾರವಾಡ ಯುವಜನತೆ ಪ್ರತಿಭಟನೆ ಬೆನ್ನಲ್ಲೇ ಉದ್ಯೋಗಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿ

ರಾಜ್ಯದಲ್ಲಿ ಉದ್ಯೋಗಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ನಿರುದ್ಯೋಗಿಗಳ ಮುಖದಲ್ಲಿ ಮಂದಹಾಸ ಮೂಡುವಂಥ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿದ್ದು, ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಈ ಹಿಂದೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದರು.

ಧಾರವಾಡ ಪ್ರತಿಭಟನೆ ಬೆನ್ನಲ್ಲೇ ಉದ್ಯೋಗಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿ

ವಿಧಾನಸೌಧ -

ಹರೀಶ್‌ ಕೇರ
ಹರೀಶ್‌ ಕೇರ Feb 25, 2026 7:52 AM

ಬೆಂಗಳೂರು, ಫೆ. 24: ಕರ್ನಾಟಕದಲ್ಲಿ (Karnataka) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ (Dharwad Protest) ಉದ್ಯೋಗಾಕಾಂಕ್ಷಿಗಳು ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಯುವಕರ ರೊಚ್ಚು ಜೋರಾಗುತ್ತಿದ್ದಂತೆಯೇ ಇತ್ತ ಕರ್ನಾಟಕ ಆರ್ಥಿಕ ಇಲಾಖೆ (Karnataka finance department) 24 ಸಾವಿರ ಹುದ್ದೆಗಳ ನೇಮಕಾತಿಗೆ ಮಂಜೂರಾತಿ ನೀಡಿದೆ.

ಕರ್ನಾಟಕದ ವಿವಿಧ 32 ಇಲಾಖೆಗಳಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ. ಎ ದರ್ಜೆಯ 542 ಹುದ್ದೆ, ಬಿ ದರ್ಜೆಯ 619 ಹುದ್ದೆ ಹಾಗೂ ಎಫ್‌ಡಿಸಿ ದರ್ಜೆಯ 23119 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಕ್ಲಿಯರೆನ್ಸ್ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಉದ್ಯೋಗಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ನಿರುದ್ಯೋಗಿಗಳ ಮುಖದಲ್ಲಿ ಮಂದಹಾಸ ಮೂಡುವಂಥ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ.

ರಾಜ್ಯದ ವಿವಿಧ ಇಲಾಖೆಗಳಲ್ಲಿ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿದ್ದು, ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಈ ಹಿಂದೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದರು. ಇನ್ನು ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು, 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಇದು ಅನ್ವಯವಾಗಲಿದೆ.

Dharwad Protest: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ; ಧಾರವಾಡದಲ್ಲಿ ಭುಗಿಲೆದ್ದ ಉದ್ಯೋಗಾಕಾಂಕ್ಷಿಗಳ ಆಕ್ರೋಶ

ಧಾರವಾಡದ ಬೃಹತ್ ಪ್ರತಿಭಟನೆಗೆ ಸಿಎಂ ಪ್ರತಿಕ್ರಿಯೆ

ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸಾವಿರಾರು ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆಸುತ್ತಿರುವ ಬೃಹತ್ ಉಗ್ರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಸುದೀರ್ಘ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕುಟುಂಬದ ಭರವಸೆ ಮತ್ತು ವರ್ಷಗಳ ಪರಿಶ್ರಮವಿರುತ್ತದೆ ಎಂಬುದು ನನಗೆ ತಿಳಿದಿದೆ. ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ ಮತ್ತು ಹತಾಶೆಯನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ನಿಮ್ಮ ಭವಿಷ್ಯ ನಮಗೆ ಅತ್ಯಂತ ಮುಖ್ಯವಾಗಿದೆ ಎಂದಿದ್ದಾರೆ.

Infosys Jobs: ಇನ್ಫೋಸಿಸ್‌ನಿಂದ ಗುಡ್‌ ನ್ಯೂಸ್‌; ಈ ವರ್ಷ 20,000 ಹುದ್ದೆ ನೇಮಕಾತಿ

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಬೃಹತ್ ಪ್ರಮಾಣದಲ್ಲಿ ಖಾಲಿ ಇರುವುದಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ಸಿದ್ದರಾಮಯ್ಯ ನೇರ ವಾಗ್ದಾಳಿ ನಡೆಸಿದ್ದಾರೆ. ‘ನಾವು ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ 2.64 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದವು. ಇದು ಹಿಂದಿನ ಸರ್ಕಾರದ ನಿಷ್ಕ್ರಿಯತೆಯ ಫಲ. 2019 ರಿಂದ 2023ರ ನಡುವೆ ನಡೆದ ನೇಮಕಾತಿ ಅಕ್ರಮಗಳು ಮತ್ತು ಭ್ರಷ್ಟಾಚಾರದ ಹಗರಣಗಳು ಇಡೀ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಕುಂದಿಸಿದವು. ಈಗ ವಿರೋಧ ಪಕ್ಷದ ನಾಯಕರು ರಾಜಕೀಯ ಹಿತಾಸಕ್ತಿಗಾಗಿ ಮುಗ್ಧ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ’ ಎಂದು ಕಿಡಿಕಾರಿದ್ದಾರೆ.