ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಅತ್ಯಂತ ಪ್ರಮುಖ: ಲಕ್ಷ್ಮಿ ಹೆಬ್ಬಾಳ್ಕರ್

Laxmi Hebbalkar: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಅತ್ಯಂತ ಪ್ರಮುಖವಾಗಿದೆ. ಉತ್ತಮ ರಸ್ತೆಗಳು ನಿರ್ಮಾಣವಾದರೆ ಸಾರ್ವಜನಿಕರ ದಿನನಿತ್ಯದ ಸಂಚಾರ ಸುಗಮವಾಗುವುದರ ಜತೆಗೆ, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ವಿವಿಧ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಪ್ರಮುಖ: ಹೆಬ್ಬಾಳ್ಕರ್

-

Profile
Siddalinga Swamy Sep 8, 2026 5:28 PM

ಬೆಳಗಾವಿ, ಸೆ.08: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar), ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿದರು. ಚಿಕ್ಕುಬಾಗ್, ಸಹ್ಯಾದ್ರಿ ನಗರ, ಆಶ್ರಯ ಕಾಲೋನಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸುಮಾರು ₹11 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ರಸ್ತೆಗಳ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅವರು ಅಧಿಕೃತವಾಗಿ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಅತ್ಯಂತ ಪ್ರಮುಖವಾಗಿದೆ. ಉತ್ತಮ ರಸ್ತೆಗಳು ನಿರ್ಮಾಣವಾದರೆ ಸಾರ್ವಜನಿಕರ ದಿನನಿತ್ಯದ ಸಂಚಾರ ಸುಗಮವಾಗುವುದರ ಜತೆಗೆ, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ವಿವಿಧ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಗರ ಪ್ರದೇಶಗಳಿಗೆ ಹೊಂದಿಕೊಂಡಿರುವ ಬಡಾವಣೆಗಳು ಹಾಗೂ ಗ್ರಾಮೀಣ ಭಾಗಗಳಲ್ಲೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಹಂತ ಹಂತವಾಗಿ ಅಗತ್ಯವಿರುವ ಕಡೆಗಳಲ್ಲಿ ಹೊಸ ರಸ್ತೆಗಳ ನಿರ್ಮಾಣ, ಹಳೆಯ ರಸ್ತೆಗಳ ಸುಧಾರಣೆ, ಒಳಚರಂಡಿ ಹಾಗೂ ಇತರ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ʼಸಾರ್ವಜನಿಕರ ದಿನನಿತ್ಯದ ಸಂಚಾರ ಸುಗಮಗೊಳಿಸುವುದು ಮತ್ತು ಪ್ರತಿಯೊಂದು ಪ್ರದೇಶಕ್ಕೂ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಜನರ ಬೇಡಿಕೆಗಳನ್ನು ಪರಿಗಣಿಸಿ ಅಗತ್ಯವಿರುವ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆʼ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ರಸ್ತೆ ಕಾಮಗಾರಿಗಳ ಗುಣಮಟ್ಟದ ಬಗ್ಗೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಕಾಮಗಾರಿಯ ಗುಣಮಟ್ಟದಲ್ಲಿ ರಾಜಿಯಾಗಬಾರದು. ಸಾರ್ವಜನಿಕರ ತೆರಿಗೆ ಹಣದಿಂದ ನಡೆಯುವ ಅಭಿವೃದ್ಧಿ ಕಾಮಗಾರಿಗಳು ದೀರ್ಘಕಾಲ ಬಾಳಿಕೆ ಬರುವಂತಿರಬೇಕು. ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ರಸ್ತೆ ಬಳಕೆಗೆ ಮುಕ್ತಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದರು.

ಕಲ್ಯಾಣ ಕರ್ನಾಟಕದ ಬೇಳೆಕಾಳುಗಳಿಂದ ಪೌಷ್ಟಿಕಾಂಶ ತಿಂಡಿಗಳ ಅಭಿವೃದ್ಧಿ ಮಾಡಿದ ರಾಜ್ಯ ಸರ್ಕಾರ; 6 ವಿಧದ ಎನರ್ಜಿ ಬಾರ್‌ ತಯಾರಿಕೆ

ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆಯೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.‌ ಭೂಮಿ ಪೂಜೆ ಹಾಗೂ ಕಾಮಗಾರಿ ಚಾಲನೆ ಕಾರ್ಯಕ್ರಮದ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಪಕ್ಷದ ಪ್ರಮುಖ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಕ್ಕಾಗಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.