Sugarcane Farmers Protest: ಬೆಳಗಾವಿಯಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ; ಕಲ್ಲುತೂರಾಟ ಹಿನ್ನೆಲೆ ಪೊಲೀಸರಿಂದ ಲಾಠಿಚಾರ್ಜ್
Belagavi News: ಬೆಳಗಾವಿಯ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ರೈತರು ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು. -
ಬೆಳಗಾವಿ, ನ.7: ಪ್ರತಿ ಟನ್ ಕಬ್ಬಿಗೆ 3,500 ರೂ. ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಶುಕ್ರವಾರ ತೀವ್ರ ಸ್ವರೂಪ ಪಡೆದಿದೆ. ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ (Sugarcane Farmers Protest) ನಡೆಸಿದ್ದಾರೆ.
ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್ಗಳ ಸಮೇತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದರು. ಈ ವೇಳೆ ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ರೈತರು ಆಕ್ರೋಶ ಹೊರಹಾಕಿದ್ದಾರೆ.
ಕೆಲ ಪ್ರತಿಭಟನಾಕಾರರು ಪ್ರತಿಭಟನಾ ಸ್ಥಳದಿಂದ ಸುಮಾರು ಮೂರು ಕಿಲೋಮೀಟರ್‌ವರೆಗೆ ಪೊಲೀಸರನ್ನು ಬೆನ್ನಟ್ಟಿ ಕಲ್ಲು ತೂರಾಟ ಮಾಡಿರುವುದು ಕಂಡುಬಂದಿದೆ.

ಕಲ್ಲು ತೂರಾಟ ನಡೆಸಿದವರು ರೈತರಲ್ಲ
ಹತ್ತರಗಿ ಟೋಲ್ ಬಳಿ ಕಲ್ಲು ತೂರಾಟ ನಡೆಸಿದವರು ರೈತರಲ್ಲ ಎಂದು ರೈತ ಮುಖಂಡ ಇಂಚಿಗೇರಿ ಶಶಿಕಾಂತ ಗುರೂಜಿ ಹೇಳಿದ್ದಾರೆ. ಗುರ್ಲಾಪುರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಳೆದ 7 ದಿನಗಳಿಂದ ನಾವು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದೇವೆ. ನಮ್ಮ ಹೋರಾಟವನ್ನು ನಿಲ್ಲಿಸಲು ಕಲ್ಲು ತೂರಾಟದ ಷಡ್ಯಂತ್ರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನಾವು ಇಲ್ಲಿಯವರೆಗೆ ಶಾಂತಿಯುತ ಹೋರಾಟ ನಡೆಸುತ್ತಿದ್ದೇವೆ. ಯಾವುದೇ ಆಸ್ತಿಪಾಸ್ತಿಗಳನ್ನು ನಾವು ನಷ್ಟ ಮಾಡಿಲ್ಲ. ನಾವು ಶಾಂತಯುತವಾಗಿ ಪ್ರತಿಭಟಿಸುತ್ತೇವೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | Sugarcane Farmers Protest: ಪ್ರಸ್ತುತ ಎಫ್ಆರ್‌ಪಿ ದರದಂತೆ ರೈತರಿಂದ ಕಬ್ಬು ಖರೀದಿಸುತ್ತೇವೆ: ಸಿಎಂಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸ್ಪಷ್ಟನೆ
ಬಾಗಲಕೋಟೆ ಮತ್ತು ವಿಜಯಪುರದಲ್ಲೂ ಪ್ರತಿಭಟನೆ
ಕಬ್ಬಿಗೆ 3500 ರೂ. ಬೆಲೆ ನಿಗದಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬಾಗಲಕೋಟೆಯ ಗದ್ದನಕೇರಿ ಕ್ರಾಸ್‌ನಲ್ಲಿ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಕಳೆದ 9 ದಿನಗಳಿಂದ ಕಬ್ಬು ಬೆಲೆಯ ಕುರಿತು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂದು ಪ್ರತಿಭಟನಾನಿರತ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಮಾಲೀಕರೊಂದಿಗೆ ರೈತರ ಸಂಧಾನ ಏರ್ಪಡಿಸಿ ಸಮಸ್ಯೆ ಬಗೆಹರಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದಾರೆ.
ಇನ್ನು ವಿಜಯಪುರ ಜಿಲ್ಲೆಯಲ್ಲಿಯೂ ರೈತರು ಸಹ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ಪಟ್ಟು ಸಡಿಲಿಸುತ್ತಿಲ್ಲ. ಇಂಡಿ ತಾಲೂಕು ಬಂದ್‌ಗೆ ರೈತರು ಕರೆ ನೀಡಿದ್ದರಿಂದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಬಂದ್ ಮಾಡಲಾಗಿದ್ದು, ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಜಯಪುರ ನಗರದಲ್ಲಿ ರೈತರು ಈಗಾಗಲೇ ಗಗನ್ ಮಹಲ್ ಬಳಿ ರಾತ್ರಿಯಿಡೀ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇದಕ್ಕೆ ವಿವಿಧ ಪ್ರಗತಿಪರ, ರೈತ ಪರ ಮತ್ತು ದಲಿತ ಪರ ಸಂಘಟನೆಗಳು ಬೆಂಬಲ ನೀಡಿವೆ.