ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ESIC Hospital Doddaballapur: ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ಉದ್ಘಾಟಿಸಿದ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಯೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಳ್ಳಾರಿಯ ಸುಮಾರು 1.5 ಲಕ್ಷ ಜವಳಿ ಕಾರ್ಮಿಕರಿಗಾಗಿ ₹150 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಇಎಸ್‌ಐಸಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ಉದ್ಘಾಟನೆ

ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆಯನ್ನು ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ ಉದ್ಘಾಟಿಸಿದರು. -

Prabhakara R
Prabhakara R May 3, 2026 4:57 PM

ಬೆಂ.ಗ್ರಾಮಾಂತರ: ದೊಡ್ಡಬಳ್ಳಾಪುರದಲ್ಲಿ ನಿರ್ಮಿಸಲಾದ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆಯನ್ನು ಕೇಂದ್ರ ಕಾರ್ಮಿಕ, ಉದ್ಯೋಗ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ ಅವರು ಭಾನುವಾರ ಉದ್ಘಾಟಿಸಿದರು. ಇದೇ ವೇಳೆ ಬಳ್ಳಾರಿಯಲ್ಲಿ ನಿರ್ಮಾಣಗೊಳ್ಳಲಿರುವ 100 ಹಾಸಿಗೆಗಳ ಇ.ಎಸ್.ಐ.ಸಿ. ಆಸ್ಪತ್ರೆಗೆ ವರ್ಚುವಲ್ ಆಗಿ ಶಂಕುಸ್ಥಾಪನೆ ನೆರವೇರಿಸಿದರು‌.

ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಉದ್ಘಾಟನಾ ಫಲಕ ಅನಾವರಣಗೊಳಿಸಿ, ದೊಡ್ಡಬಳ್ಳಾಪುರ ಆಸ್ಪತ್ರೆಯ ಆವರಣ ವೀಕ್ಷಿಸಿದರು. ಇದು ವಿಮಾದಾರರು ಮತ್ತು ಅವರ ಕುಟುಂಬದವರಿಗೆ ಸುಲಭವಾಗಿ ಲಭ್ಯವಿರುವ, ಸದೃಢ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಖಚಿತಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ಸಮಾರಂಭದಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಎಂಎಸ್ಎಂಇ ರಾಜ್ಯ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ, ಚಿಕ್ಕಬಳ್ಳಾಪುರ ಸಂಸದರಾದ ಡಾ. ಕೆ. ಸುಧಾಕರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಉದ್ಘಾಟನೆ ಬಳಿಕ ಮಾತನಾಡಿದ ಕೇಂದ್ರ ಸಚಿವರಾದ ಮನ್ಸುಖ್ ಮಾಂಡವೀಯ ಅವರು, ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಯೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಳ್ಳಾರಿಯ ಸುಮಾರು 1.5 ಲಕ್ಷ ಜವಳಿ ಕಾರ್ಮಿಕರಿಗಾಗಿ ₹150 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಇಎಸ್‌ಐಸಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕಾರ್ಮಿಕರ ಘನತೆ ಮತ್ತು ಅವರಿಗೆ ಸಿಗಬೇಕಾದ ಹಕ್ಕುಗಳ ಬಗ್ಗೆ ಅಚಲ ಬದ್ಧತೆಯನ್ನು ಹೊಂದಿದೆ ಎಂದರು.

ಕಾರ್ಮಿಕರ ಹಿತದೃಷ್ಟಿಯಿಂದ ಇಎಸ್‌ಐಸಿ ವ್ಯಾಪ್ತಿಯನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಫಲಾನುಭವಿಗಳ ಸಂಖ್ಯೆ 7 ಕೋಟಿಯಿಂದ 19.94 ಕೋಟಿಗೆ ಏರಿಕೆಯಾಗಿದೆ. ದೇಶಾದ್ಯಂತ 20 ಇಎಸ್‌ಐಸಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಮೂಲಕ ಕಾರ್ಮಿಕರ ಕುಟುಂಬಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಚಿಕಿತ್ಸೆಯ ಭರವಸೆ ನೀಡಲಾಗಿದೆ. ವಿಶೇಷವಾಗಿ, ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಮೀಸಲಾತಿಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ESIC Hospital Doddaballapur  (1)

ಜಾರಿಗೆ ತರಲಾಗಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಖಾಸಗಿ ವಲಯದ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಮತ್ತು ನೇಮಕಾತಿ ಪತ್ರದ ಖಾತರಿ ಒದಗಿಸುತ್ತವೆ. ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ, 40 ವರ್ಷ ದಾಟಿದ ಪ್ರತಿಯೊಬ್ಬ ಕಾರ್ಮಿಕನಿಗೂ ವಾರ್ಷಿಕ ಉಚಿತ ಆರೋಗ್ಯ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ರೋಗಗಳನ್ನು ಮೊದಲೇ ಪತ್ತೆಹಚ್ಚುವ ಮೂಲಕ ಕಾರ್ಮಿಕರ ಜೀವ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಸಚಿವರು ಹೇಳಿದರು.

ಕಾರ್ಮಿಕರ ಆರ್ಥಿಕ ಹೊರೆಯನ್ನು ತಗ್ಗಿಸಲು ಸರ್ಕಾರವು 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸುತ್ತಿದೆ. ಇದರಿಂದ ಉಳಿತಾಯವಾಗುವ ಹಣವನ್ನು ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣ ಮತ್ತು ಇತರ ಜೀವನಾವಶ್ಯಕ ಅಗತ್ಯಗಳಿಗಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತಿದೆ. ಕಾರ್ಮಿಕರ ಸುರಕ್ಷತೆ, ಶಿಕ್ಷಣ ಮತ್ತು ಆರೋಗ್ಯದ ರಕ್ಷಣೆ ಮಾಡುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಅವರ ಪಾಲುದಾರಿಕೆಯನ್ನು ಸರ್ಕಾರ ಬಲಪಡಿಸುತ್ತಿದೆ ಎಂದು ಹೇಳಿದರು.

ಇತ್ತೀಚೆಗೆ ಪರಿಚಯಿಸಲಾದ 4 ನೂತನ ಕಾರ್ಮಿಕ ಕಾನೂನುಗಳ ಮೂಲಕ ಶ್ರಮಿಕ ವರ್ಗಕ್ಕೆ ರಕ್ಷಣೆ ನೀಡಲಾಗುತ್ತಿದೆ. ಈ ಮೊದಲು ಶ್ರಮಿಕರು ನೇಮಕಗೊಂಡಾಗ ಅವರಿಗೆ ನೇಮಕಾತಿ‌ ಪತ್ರ ನೀಡುತ್ತಿರಲಿಲ್ಲ. ಇದರಿಂದ ಅವರು ಅನೇಕ ಸೌಲಭ್ಯಗಳಿಂದ ವಂಚಿತರಾಗಿ,‌‌ ಉದ್ಯೋಗದಾತರು ತಮ್ಮ ಕರ್ತವ್ಯವನ್ನು ನಿರ್ಲಕ್ಷಿಸುತ್ತಿದ್ದರು. ನಮ್ಮ ಸರ್ಕಾರ ಬಂದಮೇಲೆ ಎಲ್ಲರಿಗೂ ಕಡ್ಡಾಯವಾಗಿ ನೇಮಕಾತಿ ಪತ್ರ ವಿತರಿಸುತ್ತಿದ್ದೇವೆ. ಲಿಂಗ ತಾರತಮ್ಯವಿಲ್ಲದೇ ಸಮಾನ ಕೆಲಸಕ್ಕೆ ಸಮಾನ ವೇತನ ಸಹ‌ ನೀಡುತ್ತಿದ್ದೇವೆ.‌ ಮನೆಯಿಂದ ಕಾರ್ಯನಿರ್ವಹಿಸುವವರನ್ನೂ ಸಹ‌ ನೂತನ‌ ಕಾರ್ಮಿಕ ಕಾನೂನಿನಡಿ ತರಲಾಗಿದ್ದು, ಅವರಿಗೂ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಸರ್ಕಾರ ಕಾರ್ಮಿಕರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಹೇಳಿದರು.

ಇದಕ್ಕೂ ‌ಪೂರ್ವದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಮಾತನಾಡಿ, ದೊಡ್ಡಬಳ್ಳಾಪುರದಲ್ಲಿ ಸುಮಾರು ₹101 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಇಎಸ್ಐಸಿ ಆಸ್ಪತ್ರೆ ನಿರ್ಮಿಸಲಾಗಿದೆ. ಈ ಭಾಗದಲ್ಲಿ ಕಾರ್ಮಿಕರ ಸಂಖ್ಯೆ ಹೆಚ್ಚಿದ್ದು, ಈ ಹಿಂದೆ ಉತ್ತಮ ಚಿಕಿತ್ಸೆಗಾಗಿ ಅವರು ಬೆಂಗಳೂರಿಗೆ ಹೋಗಬೇಕಾದ ಪರಿಸ್ಥಿತಿ ಇತ್ತು. ಇದನ್ನು ಮನಗಂಡ ಕೇಂದ್ರ ಸರ್ಕಾರ ಮತ್ತು ಕೇಂದ್ರ ಸಚಿವರಾದ ಮನ್ಸುಖ್ ಮಾಂಡವೀಯ ಅವರ ನೇತೃತ್ವದಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಿದೆ. ಪ್ರಸ್ತುತ ಈ ಆಸ್ಪತ್ರೆಗೆ 9 ಜನ ತಜ್ಞ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಸದ್ಯಕ್ಕೆ ಇದು ರಾಜಾಜಿನಗರ ಆಸ್ಪತ್ರೆಯ ಮೇಲ್ವಿಚಾರಣೆಯಲ್ಲಿದ್ದು, ಮುಂದಿನ ದಿನಗಳಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿದೆ ಎಂದರು.

ಇನ್ನುಮುಂದೆ ಆಸ್ತಿ ದಾಖಲೆಗಳು ನೇರ ಮೊಬೈಲ್‌ಗೆ ಬರಲಿವೆ: ಸಚಿವ ಕೃಷ್ಣ ಬೈರೇಗೌಡ

ದೇಶಾದ್ಯಂತ ಇರುವ 15 ಕೋಟಿ ಕಾರ್ಮಿಕರು ಮತ್ತು ಅವರ ಕುಟುಂಬದವರಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಮೂಲಕ ಪ್ರಧಾನಮಂತ್ರಿ ಶ್ರೀ ಮೋದಿ ನೇತೃತ್ವದ ಸರ್ಕಾರವು ಕಾರ್ಮಿಕರ ಸಾಮಾಜಿಕ ಭದ್ರತೆಗೆ ವಿಶೇಷ ಒತ್ತು ನೀಡಿದೆ. ಕಳೆದ 10 ವರ್ಷಗಳ ಹಿಂದೆ ದೇಶದಲ್ಲಿ ಕೇವಲ 4 ಇಎಸ್ಐಸಿ ವೈದ್ಯಕೀಯ ಕಾಲೇಜುಗಳಿದ್ದವು, ಆದರೆ, ಶ್ರೀ ನರೇಂದ್ರ ಮೋದಿ ಸರ್ಕಾರ ಬಂದ ನಂತರ ಅವುಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಪ್ರಸ್ತುತ 1,550 ವಿದ್ಯಾರ್ಥಿಗಳು ಈ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಅದರಲ್ಲಿ ವಿಶೇಷವಾಗಿ ಕಾರ್ಮಿಕರ ಮಕ್ಕಳಿಗಾಗಿ 702 ಸೀಟುಗಳನ್ನು ಮೀಸಲಿಡಲಾಗಿದೆ. ಇದು ನಮ್ಮ ಸರ್ಕಾರದ ಸಾಧನೆಗೆ ಸಾಕ್ಷಿಯಾಗಿದೆ. ಮುಂಬರುವ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ ನಿರ್ವಹಿಸಲ್ಪಡುವ ಇಂತಹ ಆಸ್ಪತ್ರೆಗಳ ಸಂಖ್ಯೆ ಹೆಚ್ಚಾಗಲಿದ್ದು, ಒಟ್ಟು ಸಂಖ್ಯೆ 27ಕ್ಕೆ ಏರಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಇ.ಎಸ್.ಐ.ಸಿ. ಯೋಜನೆಯಡಿ ಹಲವು ಫಲಾನುಭವಿಗಳಿಗೆ ನಗದು ಸೌಲಭ್ಯಗಳನ್ನು ವಿತರಿಸಲಾಯಿತು.