ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Karnataka SSR-2027: ವೋಟರ್‌ ಲಿಸ್ಟ್‌ಗೆ ಹೆಸರು ಸೇರಿಸಲು ಮತ್ತೊಂದು ಅವಕಾಶ; ಎಸ್‌ಎಸ್‌ಆರ್‌ 2026 ವೇಳಾಪಟ್ಟಿ ಬಿಡುಗಡೆ

Special Summary Revision (SSR)-2027: ಈ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಇತ್ತೀಚೆಗೆ ಮುಗಿದ ಎಸ್‌ಐಆರ್ ಪ್ರಕ್ರಿಯೆಯ ವೇಳೆ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟು ಹೋಗಿರುವ ಅರ್ಹ ಮತದಾರರನ್ನು ಮತ್ತೆ ಸೇರ್ಪಡೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ನಿಗದಿತ ದಾಖಲೆಗಳೊಂದಿಗೆ ಫಾರ್ಮ್ 6 ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದು.

ಎಸ್‌ಎಸ್‌ಆರ್‌ 2026; ವೋಟರ್‌ ಲಿಸ್ಟ್‌ಗೆ ಹೆಸರು ಸೇರಿಸಲು ಮತ್ತೊಂದು ಅವಕಾಶ

-

Prabhakara R
Prabhakara R Nov 17, 2026 5:56 PM

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾನದ ಹಕ್ಕು ಕಳೆದುಕೊಂಡವರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ವೋಟರ್‌ ಲಿಸ್ಟ್‌ಗೆ ಹೆಸರು ಸೇರ್ಪಡೆ ಮಾಡಲು ಮತ್ತೊಂದು ಅವಕಾಶ ಸಿಕ್ಕಿದ್ದು, ಇದಕ್ಕೆ ಸಂಬಂಧಿಸಿ ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (Karnataka SSR-2027) ನಡೆಸಲು ಮಂಗಳವಾರ ವೇಳಾಪಟ್ಟಿ ಪ್ರಕಟಿಸಿದೆ.

2027ರ ಜನವರಿ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಈ ಪರಿಷ್ಕರಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಆಯೋಗವು ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, 2026ರ ನವೆಂಬರ್ 23ರೊಳಗೆ ಮತಗಟ್ಟೆಗಳ ಮರು ಹೊಂದಾಣಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ನಂತರ ಡಿಸೆಂಬರ್ 1ರಂದು ಸಂಯೋಜಿತ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಡಿಸೆಂಬರ್ 1ರಿಂದ ಡಿಸೆಂಬರ್ 31ರವರೆಗೆ ಸಾರ್ವಜನಿಕರಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, 2027ರ ಜನವರಿ 14ರೊಳಗೆ ಅವುಗಳ ವಿಲೇವಾರಿ ನಡೆಯಲಿದೆ. ಅಂತಿಮವಾಗಿ ಜನವರಿ 20ರಂದು ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಈ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಇತ್ತೀಚೆಗೆ ಮುಗಿದ ಎಸ್‌ಐಆರ್ ಪ್ರಕ್ರಿಯೆಯ ವೇಳೆ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟು ಹೋಗಿರುವ ಅರ್ಹ ಮತದಾರರನ್ನು ಮತ್ತೆ ಸೇರ್ಪಡೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ 1ರಿಂದ 31ರ ನಡುವೆ ನಾಗರಿಕರು ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸಲು ಫಾರ್ಮ್ 6, ಪಟ್ಟಿಯಿಂದ ಹೆಸರು ತೆಗೆದುಹಾಕಲು ಫಾರ್ಮ್ 7 ಹಾಗೂ ಹೆಸರು ಅಥವಾ ವಿಳಾಸದಂತಹ ವಿವರಗಳನ್ನು ತಿದ್ದುಪಡಿ ಮಾಡಲು ಫಾರ್ಮ್ 8ರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಯುವ ಮತದಾರರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, 2027ರ ಜನವರಿ 1ಕ್ಕೆ 18 ವರ್ಷ ಪೂರೈಸುವವರು ಮಾತ್ರವಲ್ಲದೆ, ಅದೇ ವರ್ಷದ ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1ರಂದು 18 ವರ್ಷ ತುಂಬುವ ಯುವಜನರು ಸಹ ಮುಂಗಡವಾಗಿ ಅರ್ಜಿ ಸಲ್ಲಿಸಲು ಆಯೋಗ ಅವಕಾಶ ನೀಡಿದೆ. ಆಯಾಯ ತ್ರೈಮಾಸಿಕದಲ್ಲಿ ಈ ಅರ್ಜಿಗಳನ್ನು ಪರಿಶೀಲಿಸಿ, ಅರ್ಹರನ್ನು ಪೂರಕ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುತ್ತದೆ.

ಈಗಾಗಲೇ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ ಒಂದು ವೇಳೆ ಹೆಸರು ಇಲ್ಲದಿದ್ದರೆ, ನಿಗದಿತ ದಾಖಲೆಗಳೊಂದಿಗೆ ಫಾರ್ಮ್ 6 ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಗೆ ಸೇರ್ಪಡೆಯಾಗುವಂತೆ ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

Karnataka SIR: ಎಸ್ಐಆರ್ ಅಂತಿಮ ಮತದಾರರ ಪಟ್ಟಿ ಪ್ರಕಟ; ರಾಜ್ಯದಲ್ಲಿ 99.32 ಲಕ್ಷ ಮತದಾರರು ಡಿಲೀಟ್!

ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ವೇಳಾಪಟ್ಟಿ:

  • ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ /ಮರುಹೊಂದಾಣಿಕೆ: 23-11-2026 ರೊಳಗೆ
  • ಸಂಯೋಜಿತ ಕರಡು ಮತದಾರರ ಪಟ್ಟಿಯ ಪ್ರಕಟಣೆ: 01-12-2026
  • ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ: 2026ರ ಡಿಸೆಂಬರ್ 01 ರಿಂದ‌ 31ರವರೆಗೆ
  • ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ: 14-01-2027 ರೊಳಗೆ
  • ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ: 20-01-2027