ರಾಜ್ಯ ಸರ್ಕಾರದ ಪರಿಷ್ಕೃತ ಬರ ಪರಿಹಾರದ ಮನವಿಗೆ ತಕ್ಷಣ ಅನುಮೋದನೆ ನೀಡಿ: ಕೇಂದ್ರಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್ ಪತ್ರ
Drought Relief: ಕರ್ನಾಟಕ ಸರ್ಕಾರ ಸಲ್ಲಿಸಿರುವ ಪರಿಷ್ಕೃತ ಬರ ಪರಿಹಾರದ ಮನವಿಗೆ ತಕ್ಷಣ ಅನುಮೋದನೆ ನೀಡಿ, ಅಗತ್ಯ ಆರ್ಥಿಕ ನೆರವನ್ನು ವಿಳಂಬ ಮಾಡದೆ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಮತ್ತೊಮ್ಮೆ ಒತ್ತಾಯಿಸುತ್ತೇನೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಡಿಸಿಎಂ ಡಾ.ಜಿ. ಪರಮೇಶ್ವರ್ (ಸಂಗ್ರಹ ಚಿತ್ರ) -
ಬೆಂಗಳೂರು, ನ.23: ಕರ್ನಾಟಕವು ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ. ರಾಜ್ಯದ 226 ತಾಲೂಕುಗಳು ಬರದಿಂದ ಬಾಧಿತವಾಗಿದ್ದು, 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಒಟ್ಟು 62,481.88 ಕೋಟಿ ರೂ. ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಇದರಿಂದ ಲಕ್ಷಾಂತರ ರೈತ ಕುಟುಂಬಗಳು ತಮ್ಮ ಜೀವನೋಪಾಯಕ್ಕಾಗಿ ತೀವ್ರ ಸಂಕಷ್ಟ ಎದುರಿಸುತ್ತಿವೆ. ಈ ಗಂಭೀರ ಪರಿಸ್ಥಿತಿಗೆ ತಕ್ಷಣ ಸ್ಪಂದಿಸುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮತ್ತೊಮ್ಮೆ ಡಿಸಿಎಂ ಡಾ.ಜಿ. ಪರಮೇಶ್ವರ್ (DCM Dr G Parameshwar) ಪತ್ರ ಬರೆದಿದ್ದಾರೆ.
ರಾಜ್ಯದ ಬರ ಪರಿಸ್ಥಿತಿಯನ್ನು ಖುದ್ದಾಗಿ ವಿವರಿಸಲು ಮೂವರ ಭೇಟಿಗೂ ಪತ್ರದ ಮೂಲಕ ಸಮಯ ಡಿಸಿಎಂ ಕೋರಿದ್ದಾರೆ. ನಮ್ಮ ಸರ್ಕಾರವು ತನ್ನ ಸ್ವಂತ ಸಂಪನ್ಮೂಲಗಳಿಂದ ಈಗಾಗಲೇ ಮೊದಲ ಕಂತಿನ ಬರ ಪರಿಹಾರ ಬಿಡುಗಡೆ ಮಾಡಿದೆ. ಪ್ರತಿಯೊಬ್ಬ ಅರ್ಹ ರೈತರಿಗೆ ಕನಿಷ್ಠ 5,000 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದೇವೆ. ಕೇಂದ್ರ ಸರ್ಕಾರದ ನೆರವಿಗಾಗಿ ಕಾಯದೆ, ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಗಿದ್ದೇವೆ.
ಆದರೆ ರಾಜ್ಯದಲ್ಲಿ ಉಂಟಾಗಿರುವ ಬರದ ತೀವ್ರತೆ ಹಾಗೂ ನಷ್ಟದ ಪ್ರಮಾಣವನ್ನು ಗಮನಿಸಿದರೆ, ರಾಜ್ಯ ಸರ್ಕಾರದ ಸಂಪನ್ಮೂಲಗಳಿಂದ ಮಾತ್ರ ಈ ಸಂಕಷ್ಟವನ್ನು ನಿಭಾಯಿಸುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ₹22,400.58 ಕೋಟಿ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪರಿಷ್ಕೃತ ಮನವಿ ಸಲ್ಲಿಸಿದ್ದೇವೆ.
ಬರ ಪರಿಹಾರದ ವಿಚಾರದಲ್ಲಿ ರಾಜಕೀಯ ಬೇಡ
ನವೆಂಬರ್ 2ರಂದು ಸಲ್ಲಿಸಿದ್ದ ಮನವಿ ಸೇರಿದಂತೆ ಹಲವು ಬಾರಿ ರೈತರ ಸಂಕಷ್ಟವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದೇವೆ. ಆದರೂ ಲಕ್ಷಾಂತರ ರೈತ ಕುಟುಂಬಗಳು ಎದುರಿಸುತ್ತಿರುವ ಇಂತಹ ಗಂಭೀರ ಪರಿಸ್ಥಿತಿಗೆ ಕೇಂದ್ರ ಸರ್ಕಾರ ಇದುವರೆಗೂ ಅಗತ್ಯ ತುರ್ತು ಸ್ಪಂದನೆ ನೀಡದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ. ನೈಸರ್ಗಿಕ ವಿಕೋಪಗಳಿಗೆ ರಾಜಕೀಯ ಗಡಿಗಳಾಗಲಿ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಾಗಲಿ ಇರುವುದಿಲ್ಲ. ರೈತರ ಬದುಕು ಹಾಗೂ ಜೀವನೋಪಾಯವನ್ನು ರಕ್ಷಿಸುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಇನ್ನಷ್ಟು ವಿಳಂಬ ಮಾಡಬಾರದು
ಕರ್ನಾಟಕ ಸರ್ಕಾರ ಸಲ್ಲಿಸಿರುವ ಪರಿಷ್ಕೃತ ಬರ ಪರಿಹಾರದ ಮನವಿಗೆ ತಕ್ಷಣ ಅನುಮೋದನೆ ನೀಡಿ, ಅಗತ್ಯ ಆರ್ಥಿಕ ನೆರವನ್ನು ವಿಳಂಬ ಮಾಡದೆ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಮತ್ತೊಮ್ಮೆ ಒತ್ತಾಯಿಸುತ್ತೇನೆ. ನಮ್ಮ ರೈತರು ದೇಶದ ಅಭಿವೃದ್ಧಿ ಹಾಗೂ ಆಹಾರ ಭದ್ರತೆಗೆ ಅಪಾರ ಕೊಡುಗೆ ನೀಡಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಪೂರ್ಣ ಬೆಂಬಲ ದೊರೆಯಬೇಕು. ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಅವರ ಸಂಕಷ್ಟಗಳಿಗೆ ಪರಿಹಾರ ಕಲ್ಪಿಸಲು ಅನಗತ್ಯವಾಗಿ ವಿಳಂಬ ಮಾಡಬಾರದು. ತಮ್ಮ ಸಮಸ್ಯೆಗಳಿಗೆ ಸ್ಪಂದನೆ ದೊರೆಯುವುದಕ್ಕಾಗಿ ರೈತರು ಅನಿರ್ದಿಷ್ಟಾವಧಿಯವರೆಗೆ ಕಾಯುವ ಪರಿಸ್ಥಿತಿ ಬರಬಾರದು ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.