ಶೀಘ್ರದಲ್ಲೇ ಸಂಪುಟ ವಿಸ್ತರಣೆ ಸುಳಿವು ನೀಡಿದ ಸಿಎಂ; ಸಚಿವ ಸ್ಥಾನಕ್ಕೆ ಹೆಚ್ಚಿದ ಲಾಭಿ
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರನ್ನು ಶೀಘ್ರದಲ್ಲೇ ದೆಹಲಿಗೆ ಕರೆಯುವ ಸಾಧ್ಯತೆ ಇದೆ.
ಸಂಗ್ರಹ ಚಿತ್ರ -
ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ (Cm D.K Shivakumar)ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರನ್ನು ಶೀಘ್ರದಲ್ಲೇ ದೆಹಲಿಗೆ ಕರೆಯುವ ಸಾಧ್ಯತೆ ಇದ್ದು, ಮುಂದಿನ ಎರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವ ಸಂಪುಟ ವಿಸ್ತರಣೆ ಪದೇ ಪದೇ ತಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಈಗಾಗಲೇ ಅವರು ದೆಹಲಿಗೆ ತೆರಳುವ ಬಗ್ಗೆಯೂ ಮಾಹಿತಿಯನ್ನು ನೀಡಿದ್ದಾರೆ. ರಾಹುಲ್ ಗಾಂಧಿ ದೆಹಲಿಗೆ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆದು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೂಡ ಕೇರಳದಿಂದ ದೆಹಲಿಗೆ ತೆರಳುತ್ತಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ದೆಹಲಿಗೆ ತೆರಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್ ಗಾಂಧಿ ವಾಪಸಾದ ಬಳಿಕ ಅವರೊಂದಿಗೆ ಈ ವಿಷಯವಾಗಿ ಚರ್ಚೆ ನಡೆಸುತ್ತೇವೆ. ಸಾಧ್ಯವಾದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.
ತಿರುಪತಿ ತಿಮ್ಮಪ್ಪನ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿಕೆಶಿ
ಇನ್ನು ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ಕಳೆದ ಕೆಲವು ದಿನಗಳಿಂದಲೇ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಎಐಸಿಸಿ ನಾಯಕರ ಭೇಟಿ, ಹೈಕಮಾಂಡ್ ಮಟ್ಟದಲ್ಲಿ ಮನವಿ, ಪ್ರಾದೇಶಿಕ ಮತ್ತು ಜಾತಿ ಸಮೀಕರಣಗಳ ಲೆಕ್ಕಾಚಾರ, ಸಚಿವ ಸ್ಥಾನಕ್ಕಾಗಿ ತೀವ್ರ ಒತ್ತಡ, ಹೀಗೆ ಹಲವು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ.