Sugarcane Price: ಪ್ರತಿ ಟನ್ ಕಬ್ಬಿಗೆ 3,300 ರೂ. ನೀಡಲು ಸರ್ಕಾರ ನಿರ್ಧಾರ; ರೈತರಿಂದ ಸಂಭ್ರಮಾಚರಣೆ
Sugarcane growers Protest: ಕಬ್ಬು ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ಬೆಳಗಾವಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಕಳೆದ 9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರು ಸಂಭ್ರಮಾಚರಣೆ ನಡೆಸಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರೊಂದಿಗೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಸಭೆ ನಡೆಸಿದರು. -
ಬೆಂಗಳೂರು, ನ.7: ಕಬ್ಬು ಬೆಳೆಗಾರರ ಪ್ರತಿಭಟನೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಪ್ರತಿ ಟನ್ ಕಬ್ಬಿಗೆ 3,300 ರೂ. (Sugarcane Price) ನೀಡಲು ಸರ್ಕಾರ ನಿರ್ಧರಿಸಿದೆ. ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಮಾಹಿತಿ ನೀಡಿದರು. ಶೇ.11.25 ರಿಕವರಿ ಪ್ರಮಾಣದ ಕಬ್ಬಿಗೆ 3250 ರೂ. ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ 50 ರೂ. ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ, ಸಕ್ಕರೆ ಎಂಎಸ್ಪಿ ಹೆಚ್ಚಳ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಕೋರಿ ಪ್ರಧಾನಿಯವರಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ಅವರು ಸಮಯ ನೀಡಿದರೆ ನಾಳೆಯೇ ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಲು ಸಿದ್ಧರಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ರೈತರ ಹಿತದೃಷ್ಟಿಯಿಂದ ಕೈಗೊಳ್ಳುವ ತೀರ್ಮಾನಗಳನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಸಕ್ಕರೆಗೆ ಎಂಎಸ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್‌ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಸರ್ಕಾರ ದಿನಾಂಕ 6-05-2025ರಂದು ಕಬ್ಬಿಗೆ ಎಫ್ಆರ್‌ಪಿ ನಿಗದಿಪಡಿಸಿದೆ. ಈ ಎಫ್ಆರ್‌ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಎಂಎಸ್‌ಪಿ ಹೆಚ್ಚಳ ಮಾಡಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್‌ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.
ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲಾಗುವುದು ಎಂದು ರೈತ ಮುಖಂಡರಿಗೆ ತಿಳಿಸಿದ್ದೇವೆ.
ಕಬ್ಬಿನ 11.25 ರಿಕವರಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ.
ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್‌ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕು ಎಂದು ಕಾರ್ಖಾನೆ ಮಾಲೀಕರು ಮನವಿ ಮಾಡಿದ್ದು, ಇದರ ಮರು ಪರಿಶೀಲನೆ ನಡೆಸಲಾಗುವುದು.
ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಿಎಂ ತಿಳಿಸಿದರು.
ಈ ಸುದ್ದಿಯನ್ನೂ ಓದಿ | Sugarcane Farmers Protest: ಕಬ್ಬು ರಿಕವರಿ ಆಧಾರದಲ್ಲಿ ದರ ಹೆಚ್ಚಳ ಮಾಡಿ; ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಿಎಂ ಸೂಚನೆ
ಪಟಾಕಿ ಸಿಡಿಸಿ ರೈತರ ಸಂಭ್ರಮಾಚರಣೆ

ಕಬ್ಬು ಬೆಲೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಕಳೆದ 9 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ರೈತರು ಹಿಂಪಡೆದಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದ ರೈತರು ಪಟಾಕಿ ಹಚ್ಚಿ ಸಂತಸ ವ್ಯಕ್ತಪಡಿಸಿದ್ದಾರೆ.