CM Siddaramaiah: ಕಾಗಿನೆಲೆ ಅಭಿವೃದ್ಧಿಗೆ 34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿದ ಸಿಎಂ ಸಿದ್ದರಾಮಯ್ಯ
ಕಾಗಿನೆಲೆಯಲ್ಲಿ ಪ್ರತಿ ವರ್ಷ ʼಕನಕ ಉತ್ಸವʼ ವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
-
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ (CM Siddaramaiah) ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ ʼಕನಕ ಉತ್ಸವʼ ವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ಸೂಚನೆ ನೀಡಿದರು.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ವಿವಿಧ ಯೋಜನೆಗಳ ಕ್ರಿಯಾ ಯೋಜನೆ ಅನುಮೋದನೆಗೆ ಸಲ್ಲಿಸಲಾಯಿತು.
ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಲಾಭವನ ನಿರ್ಮಾಣ, ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.
ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಹಾಗೂ ಕನಕ ಪರಿಸರ ಉದ್ಯಾನದಲ್ಲಿ ಖಾಲಿ ಇರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು ನಿರ್ಧರಿಸಲಾಯಿತು. ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳಲು ಚರ್ಚಿಸಲಾಯಿತು.
ಈ ಸುದ್ದಿಯನ್ನೂ ಓದಿ | Bengaluru Tunnel Road: ತೇಜಸ್ವಿ ಸೂರ್ಯ ತಮ್ಮ ಕ್ಷೇತ್ರದ ಜನಕ್ಕೆ ಸಾರ್ವಜನಿಕ ಸಾರಿಗೆ ಬಳಸುವಂತೆ ಹೇಳಲಿ: ಡಿಕೆಶಿ
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಸಚಿವ ಶಿವಾನಂದ ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.