ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಡಿ.ಕೆ. ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಹಿನ್ನೆಲೆ ಸಿಎಂ ಅಭಿನಂದನೆ

ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ಧತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ: ಸಿಎಂ

ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌. -

Prabhakara R
Prabhakara R Mar 10, 2026 7:44 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಡಿಸಿಎಂ ಅವರ ಸಂಘಟನಾ ಚಾತುರ್ಯವನ್ನು ಪ್ರಶಂಸಿರುವ ಸಿಎಂ (CM Siddaramaiah) ಅವರು, ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ಧತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು.

ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್‌ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ ಶಿವಕುಮಾರ್ ಅವರು ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ. ಇದು ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಫೂರ್ತಿದಾಯಕ ನಡವಳಿಕೆ ಆಗಿದೆ.

ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲಾಗಿ ನಿಂತಿದ್ದಾರೆ.

ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡಾ ಜೊತೆಯಿರುತ್ತೇನೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ‌ ಎಕ್ಸ್‌ ಪೋಸ್ಟ್



ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಹಿನ್ನೆಲೆ ಎಲ್‌ಪಿಜಿ ಸಮಸ್ಯೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಮಾ.10: ಅನಿಲ ಸಿಲಿಂಡರ್‌ಗಳು (LPG Cylinder) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದರು. ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ದೇಶದ ವಿದೇಶಾಂಗ ನೀತಿ ಹಳ್ಳಹಿಡಿದಿದೆ. ಸರ್ಕಾರ ಇದರ ಬಗ್ಗೆ ತನ್ನ ನಿಲುವನ್ನು ವ್ಯಕ್ತಪಡಿಸಬೇಕು. ಸಂಸದರು ಸಹ ಇದರ ಬಗ್ಗೆ ಮಾತನಾಡಬೇಕು. ಕರ್ನಾಟಕ ಹೋಟೆಲ್ ಅಸೋಸಿಯೇಷನ್ ಅವರು ಹೋಟೆಲ್‌ಗಳನ್ನು ಮುಚ್ಚಲು ತೀರ್ಮಾನ ಮಾಡಿದ್ದಾರೆ. ಇದರಿಂದ ಆಸ್ಪತ್ರೆಗಳಿಗೂ ಹೊಡೆತ ಬೀಳಲಿದೆ. ಸರ್ಕಾರ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಪರ್ಯಾಯ ಹಾಗೂ ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕೇಂದ್ರ

ಮನೆ ಬಳಕೆಗೆ, ಉದ್ದಿಮೆಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಪರ್ಯಾಯ ವ್ಯವಸ್ಥೆಯನ್ನು ಮಾಡಬೇಕು. ಕಳೆದ 15 ದಿನಗಳಿಂದಲೂ ಈ ವಿಚಾರವಾಗಿ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಿಲ್ಲ ಎಂದು ಆರೋಪಿಸಿದರು.

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಬಗ್ಗೆ ಕೇಳಿದಾಗ, ʼಸೋನಿಯಾ ಗಾಂಧಿ ಅವರು ನನ್ನನ್ನು ಅಂದು ಆಯ್ಕೆ ಮಾಡಿದರು. ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ವಿಧಾನಸಭೆ ಕಲಾಪ ನಡೆಯುತ್ತಿರುವ ಕಾರಣಕ್ಕೆ ದೊಡ್ಡ ಸಮಾರಂಭ ಮಾಡುವುದನ್ನು ಮುಂದೂಡಲಾಯಿತು. ಇಂದು ಸಂಜೆ ಎಲ್ಲಾ ಶಾಸಕರಿಗೆ ಔತಣಕೂಟ ಏರ್ಪಡಿಸಲಾಗಿದೆʼ ಎಂದು ಹೇಳಿದರು. ‌

ದೇವೇಗೌಡರ ಮನಸ್ಸು ನೋಯಿಸಲು ಇಷ್ಟವಿಲ್ಲ: ಡಿ.ಕೆ. ಶಿವಕುಮಾರ್ ಹೀಗ್ಯಾಕೆ ಅಂದ್ರು?

ನೀವು ಮುಖ್ಯಮಂತ್ರಿ ಆಗಬೇಕು ಎನ್ನುವ ಒತ್ತಾಯದ ಬಗ್ಗೆ ಕೇಳಿದಾಗ, ʼಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಪಕ್ಷ ನೀಡಿದ ಕರ್ತವ್ಯ, ಜವಾಬ್ದಾರಿಯನ್ನು ನಾನು ನಿಭಾಯಿಸುತ್ತಿದ್ದೇ‌ನೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.