ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಭರವಸೆ ನೀಡಿದ ರಾಜ್ಯ ಸರ್ಕಾರ; ಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

CM DK Shivakumar: ಆಶಾ ಕಾರ್ಯಕರ್ತೆಯರು ಒಟ್ಟು ಎಂಟರಿಂದ ಒಂಬತ್ತು ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಎಲ್ಲ ಬೇಡಿಕೆಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು. ಗೃಹ ಸಚಿವರೂ ಈ ವಿಚಾರವಾಗಿ ಮಾತನಾಡಲಿದ್ದಾರೆ. ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಚರ್ಚೆ

ಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy Nov 19, 2026 8:15 PM

ಬೆಂಗಳೂರು, ನ. 19: ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ನಂಬಿಕೆ ಮತ್ತು ಸಹಾನುಭೂತಿ ಇದೆ. ನೀವು ಜನರ ಸೇವೆ ಮಾಡುತ್ತಿದ್ದೀರಿ. ಆದರೆ ಬೇಡಿಕೆಗಳ ಬಗ್ಗೆ ಒಂದೇ ದಿನಕ್ಕೆ ತೀರ್ಮಾನ ಮಾಡಲಾಗುವುದಿಲ್ಲ. ಸಂಬಂಧಪಟ್ಟ ಸಚಿವರು, ಸಚಿವ ಸಂಪುಟ ಸಭೆ ಹಾಗೂ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ (CM DK Shivakumar) ಆಶಾ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪ್ರತಿನಿಧಿಗಳ ಜತೆ ಗುರುವಾರ ಸಭೆ ನಡೆಸಿ ಮಾತನಾಡಿದರು. ನಂತರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ಎಸ್‌ಐಆರ್ ಹಾಗೂ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆಯ ಕೆಲಸ ಮಾಡಿದ್ದಕ್ಕೆ ಯಾವುದೇ ಗೌರವಧನ ಬಂದಿಲ್ಲ ಎಂದು ಆಶಾ ಕಾರ್ಯಕರ್ತೆಯರು ತಿಳಿಸಿದಾಗ ಸಮೀಕ್ಷಾ ಕಾರ್ಯಗಳಿಗೆ ಬಳಸಿಕೊಂಡ ಮೇಲೆ ಗೌರವಧನ ಕೊಡಬೇಕು. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಆಶ್ವಾಸನೆ ನೀಡುವುದರ ಜತೆಗೆ ಸರ್ಕಾರದೊಂದಿಗೆ ಸಹಕರಿಸಿ ಪ್ರತಿಭಟನೆ ನಿಲ್ಲಿಸಿ ಎಂದು ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯ ಧರಣಿ ಬಗ್ಗೆ ಡಿ.ಕೆ. ಶಿವಕುಮಾರ್‌ ಮಾತು:



ನಿಮಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ

ಗೃಹಲಕ್ಷ್ಮಿ ಯೋಜನೆಯಡಿ ಆಶಾ ಕಾರ್ಯಕರ್ತೆಯರನ್ನು ಸೇರಿಸಬಾರದು ಎಂದಾಗ ಅದನ್ನು ನಾವು ಒಪ್ಪದೆ ಯೋಜನೆ ಕೊಟ್ಟಿದ್ದೇವೆ. ಉಚಿತ ಬಸ್ಸು, ವಿದ್ಯುತ್ ನೀಡಿದ್ದೇವೆ. ನಿಮ್ಮ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡೇ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ನನ್ನ ಮೇಲೆ ವಿಶ್ವಾಸವಿರಲಿ. ನಿಮಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಹೇಳಿದರು

ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಪಿಂಚಣಿ ಯೋಜನೆ ಜಾರಿ ಮಾಡಿದ್ದು ನಮ್ಮ ಸರ್ಕಾರ. ನೀವು ಕೇಂದ್ರ ಸರ್ಕಾರವನ್ನೂ ಕೇಳಬೇಕು. ಕೇಂದ್ರ ಸರ್ಕಾರ ತನ್ನ ಪಾಲಿನ ಹಣವನ್ನು ಹೆಚ್ಚಳ ಮಾಡಿಲ್ಲ ಎಂದರು.

ಮಾಧ್ಯಮ ಪ್ರತಿಕ್ರಿಯೆ

ರಾಜ್ಯದ ಸುಮಾರು 41 ಸಾವಿರ ಆಶಾ ಕಾರ್ಯಕರ್ತೆಯರ ಸೇವೆ ಹಾಗೂ ಅವರ ಆರ್ಥಿಕ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಸಹಾನುಭೂತಿ ಇದೆ. ಅವರ ಗೌರವಧನ ಹೆಚ್ಚಳದ ಬೇಡಿಕೆಯನ್ನು ತಳ್ಳಿಹಾಕುವುದಿಲ್ಲ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರು ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಅವರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಶಾ ಕಾರ್ಯಕರ್ತೆಯರ ಯೋಜನೆ ಆರಂಭವಾಯಿತು. ಆಗ ಅವರಿಗೆ ₹200 ನೀಡಲಾಗುತ್ತಿತ್ತು. ಪ್ರಸ್ತುತ ಕೇಂದ್ರ ಸರ್ಕಾರ ₹2 ಸಾವಿರ ನೀಡುತ್ತಿದ್ದರೆ, ರಾಜ್ಯ ಸರ್ಕಾರ ₹5 ಸಾವಿರ ನೀಡುತ್ತಿದೆ. ಇದರ ಜತೆಗೆ ರಾಜ್ಯದಿಂದ ₹1 ಸಾವಿರ ಪ್ರೋತ್ಸಾಹಧನವನ್ನೂ ನೀಡಲಾಗುತ್ತಿದೆ. ಕೆಲಸದ ಆಧಾರದ ಮೇಲೆ ಇತರ ಪ್ರೋತ್ಸಾಹಧನ ಸೇರಿ ಒಟ್ಟಾರೆ ಸುಮಾರು 8 ಸಾವಿರ ರೂಪಾಯಿವರೆಗೆ ದೊರೆಯುತ್ತಿದೆ ಎಂದು ವಿವರಿಸಿದರು.

ಆಶಾ ಕಾರ್ಯಕರ್ತೆಯರು ತಮ್ಮ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಗೆ ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆಯ ವಾಸ್ತವಿಕತೆ ಹಾಗೂ ಸರ್ಕಾರದ ಆರ್ಥಿಕ ಇತಿಮಿತಿಗಳನ್ನು ಅವರಿಗೆ ವಿವರಿಸಲಾಗಿದೆ. ಇದು ಆಶಾ ಕಾರ್ಯಕರ್ತೆಯರ ಬೇಡಿಕೆಯೊಂದೇ ಅಲ್ಲ, ವಿವಿಧ ವರ್ಗಗಳಿಂದಲೂ ಹಲವು ಬೇಡಿಕೆಗಳಿವೆ ಎಂದು ತಿಳಿಸಿದರು.

ಪ್ರತಿಭಟನೆ ಹಿಂಪಡೆಯುವ ವಿಶ್ವಾಸವಿದೆ

ಆಶಾ ಕಾರ್ಯಕರ್ತೆಯರು ಕಷ್ಟಪಟ್ಟು ದುಡಿಯುತ್ತಿದ್ದಾರೆ. ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸರ್ಕಾರದಿಂದ ಯಾವ ರೀತಿಯಲ್ಲಿ ನೆರವು ನೀಡಲು ಸಾಧ್ಯವಿದೆಯೋ ಅದನ್ನು ಮಾಡುತ್ತೇವೆ. ದಯವಿಟ್ಟು ನಿಮ್ಮ ಮನೆಗಳಿಗೆ ತೆರಳಿ ಎಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.‌

ಏರ್‌ಪೋರ್ಟ್‌ಗೆ ಹೆಬ್ಬಾಳ ಮಾದರಿಯಲ್ಲಿ ಹೊಸ ಫ್ಲೈಓವರ್ ಚಿಂತನೆ: ಸಿಎಂ ಡಿ.ಕೆ. ಶಿವಕುಮಾರ್

ಆಶಾ ಕಾರ್ಯಕರ್ತೆಯರು ಇತರ ಯಾವ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂಬ ಪ್ರಶ್ನೆಗೆ, ಅವರು ಒಟ್ಟು ಎಂಟರಿಂದ ಒಂಬತ್ತು ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಎಲ್ಲ ಬೇಡಿಕೆಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು. ಗೃಹ ಸಚಿವರೂ ಈ ವಿಚಾರವಾಗಿ ಮಾತನಾಡಲಿದ್ದಾರೆ. ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.