Karnataka Police: ಹೊಸ ಲುಕ್‌ನಲ್ಲಿ ರಾಜ್ಯ ಪೊಲೀಸ್ ಸಿಬ್ಬಂದಿ; ಸ್ಲೋಚ್ ಟೋಪಿ ಬದಲಿಗೆ ಪೀಕ್ ಕ್ಯಾಪ್ ವಿತರಣೆ
Peak caps: ಪ್ರಸ್ತುತ ಬಳಸುತ್ತಿದ್ದ ಸ್ಲೋಚ್ ಕ್ಯಾಪ್‌ನಿಂದ ಪೊಲೀಸ್ ಸಿಬ್ಬಂದಿಗೆ ಉಪಯೋಗಕ್ಕಿಂತ ಸಮಸ್ಯೆ ಜಾಸ್ತಿ ಆಗಿತ್ತು. ಪ್ರತಿಭಟನೆ ಅಥವಾ ಲಾಠಿ ಚಾರ್ಜ್ ಸಂದರ್ಭಗಳಲ್ಲಿ ಸ್ವಲ್ಪ ಜೋರಾಗಿ ಓಡಿದರೂ ಈ ಟೋಪಿಗಳು ತಲೆಯ ಮೇಲೆ ನಿಲ್ಲಲ್ಲ. ಅಪರಾಧಿಗಳನ್ನು ಬೆನ್ನಟ್ಟುವ ಸಮಯದಲ್ಲಿ ಈ ಟೋಪಿಗಳನ್ನು ಹಾಕಿಕೊಂಡು ಸಾಗುವುದು ಕಷ್ಟ. ಹೀಗಾಗಿ ಸ್ಲೋಚ್ ಕ್ಯಾಪ್‌ಗಳ ಬದಲಿಗೆ ನೀಲಿ ಬಣ್ಣದ ಪಿ ಕ್ಯಾಪ್ ವಿತರಣೆ ಮಾಡಲಾಗಿದೆ.
ರಾಜ್ಯ ಸರ್ಕಾರದಿಂದ ಹೊಸದಾಗಿ ವಿತರಿಸಿದ ಪೀಕ್ ಕ್ಯಾಪ್‌ನೊಂದಿಗೆ ಮಹಿಳಾ ಪೊಲೀಸ್ ಸಿಬ್ಬಂದಿ. -
Prabhakara R
Oct 28, 2025 4:19 PM
ಬೆಂಗಳೂರು, ಅ.28: ರಾಜ್ಯ ಪೊಲೀಸ್ (Karnataka Police) ಸಿಬ್ಬಂದಿಯ ಹಲವು ವರ್ಷಗಳ ಬೇಡಿಕೆ ಇದೀಗ ಈಡೇರಿದೆ. ಪೊಲೀಸ್ ಸಿಬ್ಬಂದಿ ತಲೆ ಮೇಲೆ ಕಾಣುವ ಬ್ರಿಟಿಷರ ಕಾಲದ ಟೋಪಿ ಮಾಯವಾಗಿ ʼಪೀಕ್ ಕ್ಯಾಪ್ʼ (Peak caps) ಬಂದಿದೆ. ಸ್ಲೋಚ್ ಹ್ಯಾಟ್ ಬದಲಿಗೆ ರಾಜ್ಯ ಸರ್ಕಾರದಿಂದ ನೂತನ ಪೀಕ್ ಕ್ಯಾಪ್ ವಿತರಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿಗೆ ಪೀಕ್ ಕ್ಯಾಪ್ ವಿತರಿಸಿದರು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಡಿ.ಕೆ. ಶಿವಕುಮಾರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ ಮತ್ತಿತರರು ಉಪಸ್ಥಿತರಿದ್ದರು.
ಪೀಕ್ ಕ್ಯಾಪ್ ಮಾದರಿ ಆಯ್ಕೆ ಮಾಡಿದ್ದು ನಾನೆ: ಸಿಎಂ
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇಂದು ನಾನು ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನು ಆಯ್ಕೆ ಮಾಡಿದ್ದು ಕೂಡ ನಾನೇ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು, ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ. ಕೇವಲ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ ಎಂದು ಕರೆ ನೀಡಿದರು.

ಈ ಸುದ್ದಿಯನ್ನೂ ಓದಿ | CM Siddaramaiah: ಕಾಲಮಿತಿಯಲ್ಲಿ ಅನುಮೋದನೆ ನೀಡದಿದ್ರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ
ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ, ಇದು ಪೊಲೀಸ್ ಇಲಾಖೆಯ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ. ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸುವ ಛಲ ಬೇಕಷ್ಟೆ.

ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಮನಸ್ಸು ಮಾಡಿದರೆ ಕರ್ನಾಟಕ ಪೊಲೀಸರ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ. ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜತೆ, ಡ್ರಗ್ ಜಾಲದ ಜತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ಪೊಲೀಸರಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ಆತ್ಮಸಾಕ್ಷಿಯನ್ನು ಕೇಳಿಕೊಳ್ಳಬೇಕು ಎಂದು ತಿಳಿಸಿದರು.
ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ಪೊಲೀಸರಿಗೆ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, "ಡ್ರಗ್ ಮುಕ್ತ ಕರ್ನಾಟಕ" ಆಗಲಿ, ಇದನ್ನು ಮಾಡಿ ತೋರಿಸಿ ಎಂದು ಕರೆ ನೀಡಿದರು.
ಈ ಸುದ್ದಿಯನ್ನೂ ಓದಿ | DK Shivakumar: ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿ.ಕೆ. ಶಿವಕುಮಾರ್ ಘೋಷಣೆ
ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.