Karnataka New CM: ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿ.ಕೆ.ಶಿವಕುಮಾರ್; ಜೂನ್ 3ಕ್ಕೆ ನೂತನ ಸಿಎಂ ಆಗಿ ಪದಗ್ರಹಣ
ಲೋಕಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಡಿ.ಕೆ.ಶಿವಕುಮಾರ್ ಅವರು ಭೇಟಿಯಾಗಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಈ ವೇಳೆ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ, ಕೆ.ಸಿ.ವೇಣುಗೋಪಾಲ್ ಉಪಸ್ಥಿತರಿದ್ದರು.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮತ್ತು ಡಿ.ಕೆ.ಶಿವಕುಮಾರ್. -
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾದ ಬಳಿಕ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರೊಂದಿಗೆ ಲೋಕಭವನಕ್ಕೆ ಶನಿವಾರ ರಾತ್ರಿ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಬಳಿ ಸರ್ಕಾರ ರಚನೆಗೆ (Karnataka New CM) ಹಕ್ಕು ಮಂಡಿಸಿದ್ದಾರೆ.
ರಾಜ್ಯಪಾಲರಿಗೆ ಡಿ.ಕೆ.ಶಿವಕುಮಾರ್ ಅವರು ಪತ್ರ ಸಲ್ಲಿಕೆ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಈ ವೇಳೆ ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ, ಕೆ.ಸಿ.ವೇಣುಗೋಪಾಲ್, ಕೆಜೆ ಜಾರ್ಜ್, ಎನ್‌ಎ ಹ್ಯಾರಿಸ್ ಮತ್ತಿತರರು ಉಪಸ್ಥಿತರಿದ್ದರು.
ಸರ್ಕಾರ ರಚನೆ ಹಕ್ಕು ಮಂಡನೆ ಪತ್ರ ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲರು ಆಹ್ವಾನಿಸಿದ್ದಾರೆ. ಜೂನ್ 3ರಂದು ಸಂಜೆ 4.05 ಗಂಟೆಗೆ ಲೋಕಭವನದಲ್ಲಿ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.
ಸಿಎಲ್‌ಪಿ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವಿರೋಧ ಆಯ್ಕೆ: ಕೆ.ಸಿ. ವೇಣುಗೋಪಾಲ್
ಕಾಂಗ್ರೆಸ್ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರನ್ನು ಸಿಎಲ್‌ಪಿ ನಾಯಕರಾಗಿ ಅಂತಿಮ ಮಾಡಿತ್ತು. ಇಂದು ನಡೆದ ಸಿಎಲ್‌ಪಿ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅವಿರೋಧವಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು.
ವಿಧಾನಸೌಧದಲ್ಲಿ ಸಿಎಲ್‌ಪಿ ಸಭೆ ಬಳಿಕ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಿದ್ದರು. ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಈಗ ಸಿಎಲ್‌ಪಿ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ನಿರ್ಣಯ ಘೋಷಣೆ ಮಾಡಿದರು. ಇದಕ್ಕೆ ಪರಮೇಶ್ವರ್ ಅನುಮೋದಿಸಿದರು. ಮತ್ತೊಮ್ಮೆ ಶಾಸಕಾಂಗ ಪಕ್ಷದ ನಾಯರನ್ನು ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರ ಬೆಂಬಲದೊಂದಿಗೆ 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಅಧಿಕಾರ ಹಂಚಿಕೆ ವಿಚಾರ ಬಂದಾಗ ರಾಜ್ಯದಲ್ಲಿ ದೊಡ್ಡ ಕೋಲಾಹಲ ನಡೆಯುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ನಾವೆಲ್ಲಾ ಒಂದು ಕುಟುಂಬದಂತೆ ಇದ್ದೇವೆ, ಇದು ಕಾಂಗ್ರೆಸ್ ಪಕ್ಷವಾಗಿದೆ ಎಂದು ಹೇಳಿದರು.