ಖಾಸಗಿ ಶಾಲೆ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡಲು ಸರ್ಕಾರ ಚಿಂತನೆ: ಸಚಿವ ಮಧು ಬಂಗಾರಪ್ಪ
Madhu Bangarappa: ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
-
ಬೆಂಗಳೂರು, ಸೆ,12: ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.
ಆನೇಕಲ್ ತಾಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ನೇತೃತ್ವದ ಸಮಿತಿ ಮಧ್ಯಂತರ ವರದಿ ನೀಡಿದ್ದು, ಈ ವರದಿಯಲ್ಲಿನ ಶಿಫಾರಸುಗಳ ಕುರಿತು ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ರಾಮೋಜಿಗೌಡ, ಶಾಸಕ ಬಿ. ಶಿವಣ್ಣ, ಕಾಮ್ಸ್ ಕಾರ್ಯದರ್ಶಿ ಶಶಿಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲೆಯ ಡಿಡಿಪಿಐ ಜಯಪ್ರಕಾಶ್ ಹಾಗೂ ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ರಾಹುಲ್ ಗಾಂಧಿ ಜತೆ ಸಲಹೆ ಹಂಚಿಕೊಳ್ಳಿ
ಬೆಂಗಳೂರು: ನಮ್ಮ ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರಾದ ರಾಹುಲ್ ಗಾಂಧಿ ಯವರು ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆಗಾಗಿ 'ಛಾತ್ರೋಂ ಕಿ ಗೂಂಜ್' ಎಂಬ ರಾಷ್ಟ್ರೀಯ ಮಟ್ಟದ ಚಳವಳಿ ನಡೆಸುತ್ತಿರುವುದು ನಿಮಗೆ ಗೊತ್ತೇ ಇದೆ. ಪ್ರಶ್ನೆಪತ್ರಿಕೆ ಸೋರಿಕೆ, ಸರಿಯಾಗಿ ನಡೆಯದ ಪರೀಕ್ಷೆಗಳು, ಕೋಚಿಂಗ್ ಸೆಂಟರ್‌ಗಳ ದುಬಾರಿ ಶುಲ್ಕ ಮತ್ತಿತರ ಕಾರಣಗಳಿಂದ ಪ್ರಾಮಾಣಿಕವಾಗಿ ಈ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಮಾನ್ಯ ರಾಹುಲ್ ಗಾಂಧಿಯವರ ನೇತೃತ್ವದ ಅಭಿಯಾನ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ವ್ಯವಸ್ಥೆಯನ್ನು ಹೇಗೆ ಸರಿಪಡಿಸಬಹುದು ಎಂಬ ಬಗ್ಗೆ ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳಿಂದ, ಪೋಷಕರಿಂದ, ಶಿಕ್ಷಕರಿಂದ ಮಾಹಿತಿ, ಸಲಹೆ- ಸೂಚನೆಗಳನ್ನು ಕೇಳುತ್ತಿದ್ದಾರೆ. ನೀವೂ ನಿಮ್ಮ ಅನುಭವ, ಅಭಿಪ್ರಾಯ, ಸಲಹೆ-ಸೂಚನೆ ಮತ್ತು ಚಿಂತನೆಗಳನ್ನು ರಾಹುಲ್ ಗಾಂಧಿಯವರೊಂದಿಗೆ ಹಂಚಿಕೊಳ್ಳಬಹುದು. ನಾವೆಲ್ಲರೂ ಸೇರಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ತರೋಣ. ನಿಮ್ಮ ಅಭಿಪ್ರಾಯವನ್ನು ಈ ಲಿಂಕ್‌ನಲ್ಲಿ ಹಂಚಿಕೊಳ್ಳಿ: https://rahulgandhi.in/awaazbharatki/chattronkigoonj?lang=en ಎಂದು ಸಚಿವರು ಮನವಿ ಮಾಡಿದ್ದಾರೆ.