ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shakti scheme: ಶಕ್ತಿ ಯೋಜನೆಯಡಿ ಮೇ ಅಂತ್ಯದವರೆಗೆ ಮಹಿಳೆಯರಿಂದ 763 ಕೋಟಿ ಉಚಿತ ಪ್ರಯಾಣ

ಬೆಂಗಳೂರಿನ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. 2026-27ನೇ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಲ್ಲರನ್ನೂ ಸೇರಿಸಿ 10 ಲಕ್ಷ ಉಚಿತ ಬಸ್ ಪಾಸ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲು ಅಂದಾಜಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಶಕ್ತಿ ಯೋಜನೆಯಡಿ ಮಹಿಳೆಯರಿಂದ 763 ಕೋಟಿ ಉಚಿತ ಪ್ರಯಾಣ

ಸಿಎಂ ಡಿ.ಕೆ. ಶಿವಕುಮಾರ್‌ -

Prabhakara R
Prabhakara R Jun 19, 2026 9:09 PM

ಬೆಂಗಳೂರು: ಶಕ್ತಿ ಯೋಜನೆಯಲ್ಲಿ (Shakti scheme) ಮಹಿಳಾ ಪ್ರಯಾಣಿಕರು ಮೇ ಅಂತ್ಯದವರೆಗೆ 763 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿದ್ದು, ಅವರಿಗೆ ವಿನಿಯೋಗಿಸಲಾದ ಟಿಕೆಟ್ ಮೌಲ್ಯ 20047.69 ಕೋಟಿ ರೂಪಾಯಿ ಆಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಮಾತನಾಡಿದ್ದು, 2026-27ನೇ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಲ್ಲರನ್ನೂ ಸೇರಿಸಿ 10 ಲಕ್ಷ ಉಚಿತ ಬಸ್ ಪಾಸ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲು ಅಂದಾಜಿಸಲಾಗಿದೆ.

ಗೃಹ ಜ್ಯೋತಿ ಯೋಜನೆಯಡಿ ಮೇ ಅಂತ್ಯದವರೆಗೆ 1.65 ಕೋಟಿ ಫಲಾನುಭವಿಗಳು ಯೋಜನೆಯ ಲಾಭ ಪಡೆದಿರುತ್ತಾರೆ. ಹೊರ ರಾಜ್ಯದಿಂದ ಇಲ್ಲಿಗೆ ಬಂದು ನೆಲೆಸಿ ಗೃಹ ಜ್ಯೋತಿ ಲಾಭ ಪಡೆಯುತ್ತಿರುವವರ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿರುವ ಸಿಎಂ, ಮತಪಟ್ಟಿಯಲ್ಲಿ ಹೆಸರಿರುವ ಮತದಾರರು ಮಾತ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿರುತ್ತಾರೆ. ಆದ್ದರಿಂದ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಫಲಾನುವಿಗಳು ತಮ್ಮ ಹೆಸರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು.

ಅನ್ನಭಾಗ್ಯ ಯೋಜನೆಯಡಿ 11561 ಕೋಟಿ ರೂ.ಗಳನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. ಜುಲೈ-2023 ಯಿಂದ ಡಿಸೆಂಬರ್-2024ರ ವರೆಗೆ ಒಟ್ಟು 72,02,33,970 ಫಲಾನುಭವಿಗಳಿಗೆ ಒಟ್ಟು ರೂ. 11561.05 ಕೋಟಿಗಳನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿರುತ್ತದೆ.

ತದನಂತರ 2025ನೇ ಫೆಬ್ರವರಿ ತಿಂಗಳಿನಿಂದ ಇಲ್ಲಿಯವರೆಗೆ ಪ್ರಸ್ತುತರಾಜ್ಯದಲ್ಲಿರುವ ಒಟ್ಟು 4,44,67,942 ಫಲಾನುಭವಿಗಳಿಗೆ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತಿದೆ.

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟವಾಗುತ್ತಿರುವುದನ್ನು ನಿಗ್ರಹಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.