Bengaluru Stampede: ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ದಿಢೀರ್ ವರ್ಗಾವಣೆ
ADGP Hemant Nimbalkar: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ ಗುಪ್ತಚರ ಇಲಾಖೆ ವೈಫಲ್ಯವೇ ಕಾರಣ ಎಂದು ವಿಪಕ್ಷಗಳು ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ಕ್ರಮ ತೆಗೆದುಕೊಂಡಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ 5 ಅಧಿಕಾರಿಗಳ ಅಮಾನತು ಬೆನ್ನಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ಇದೀಗ ವರ್ಗಾವಣೆ ಮಾಡಲಾಗಿದೆ.


ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ ದುರಂತಕ್ಕೆ (Bengaluru Stampede) ಸಂಬಂಧಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ 5 ಅಧಿಕಾರಿಗಳ ಅಮಾನತು ಬೆನ್ನಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ (Hemant Nimbalkar) ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ ಗುಪ್ತಚರ ಇಲಾಖೆ ವೈಫಲ್ಯವೇ ಕಾರಣ ಎಂದು ವಿಪಕ್ಷಗಳು ಆರೋಪಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ಕ್ರಮ ತೆಗೆದುಕೊಂಡಿದೆ. ಕಾಲ್ತುಳಿತ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ನೀಡಿದ್ದರು. ಇಂಟಲಿಜೆನ್ಸ್ ವೈಫಲ್ಯವಾದರೂ ಕ್ರಮ ಯಾಕೆ ತೆಗೆದುಕೊಂಡಿಲ್ಲ ಎಂದು ಗೃಹಸಚಿವರಿಗೆ ದೂರು ನೀಡಲಾಗಿತ್ತು. ಇದೀಗ ಗುಪ್ತಚರ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಲಾಗಿದೆ.
11 ಜನರ ಸಾವಿಗೆ ನೇರವಾಗಿ ಗುಪ್ತಚರ ಇಲಾಖೆಯೂ ಕಾರಣ, ಆದ್ರೂ ನಿಂಬಾಳ್ಕರ್ ವಿರುದ್ದ ಯಾವುದೇ ಕ್ರಮ ಇಲ್ಲ. ಎಡಿಜಿಪಿ ಪತ್ನಿ ಕಾಂಗ್ರೆಸ್ ಮುಖಂಡರು ಅನ್ನೋ ಕಾರಣಕ್ಕೆ ಕ್ರಮ ಇಲ್ವಾ? ಎಂದು ಪ್ರಶ್ನೆ ಮಾಡಿ ಟಿಜೆ ಅಬ್ರಹಾಂ ದೂರು ನೀಡಿದ್ದರು. ಈ ಬೆನ್ನಲ್ಲೇ ಗುಪ್ತಚರ ಇಲಾಖೆಯ ಎಡಿಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.
ಈ ಸುದ್ದಿಯನ್ನೂ ಓದಿ | Bengaluru Stampede: ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಕೆಎಸ್ಸಿಎ
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ವಜಾ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟ (Bengaluru stampede) ಬೆನ್ನಲ್ಲೇ ಸರ್ಕಾರ ಈಗಾಗಲೇ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ. ಈ ಬಗ್ಗೆ ನಿನ್ನೆಯ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆಂಡಾಮಂಡಲವಾಗಿದ್ದರು.
ತರಾತುರಿಯಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ಮಾಡಿದ್ದಕ್ಕೆ ಅಧಿಕಾರಿಗಳು, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೇಲೂ ಸಿಟ್ಟಾಗಿದ್ದರು. ಸಭೆಯಲ್ಲಿ ಸಚಿವರು ಗೋವಿಂದ ರಾಜು ಅವರ ಮೇಲೆ ಆರೋಪ ಮಾಡಿದ್ದರು. ಗೋವಿಂದರಾಜು ಅವರೇ ತರಾತುರಿಯಲ್ಲಿ ಸಂಭ್ರಮಾಚರಣೆ ನಡೆಸಲು ಅನುಮತಿ ಕೋರಿದ್ದಾರೆ ಎಂಬ ಆರೋಪ ನಿನ್ನೆ ಕೇಳಿ ಬಂದಿತ್ತು. ಇದೀಗ ಅವರನ್ನು ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ತಿಳಿದುಬಂದಿದೆ.