Karnataka Budget 2026: ಕಾರವಾರ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಕೋಲಾರ, ವಿಜಯಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು
ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ನೀಡಿದ ಕೊಡುಗೆಗಳನ್ನು ವಿವರಿಸಿದರು. ಪ್ರಮುಖವಾಗಿ ಬಹುಬೇಡಿಕೆಯ ಕಾರವಾರಕ್ಕೆ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕಾರವಾರ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಘೋಷಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ (Karnataka Budget 2026) ಮಾಡಿದ್ದಾರೆ. ಅಲ್ಲದೇ ಕೋಲಾರ ಮತ್ತು ವಿಜಯಪುರ ಮೆಡಿಕಲ್ ಕಾಲೇಜು ಆರಂಭಕ್ಕೆ ಡಿಪಿಆರ್ ಸಿದ್ದಪಡಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ
ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ನೀಡಿದ ಕೊಡುಗೆಗಳನ್ನು ವಿವರಿಸಿದರು. ಪ್ರಮುಖವಾಗಿ ಬಹುಬೇಡಿಕೆಯ ಕಾರವಾರಕ್ಕೆ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಜತೆಗೆ ವಿಜಯನಗರ ಹಾಗೂ ಕೊಪ್ಪಳದಲ್ಲಿ ಕ್ಯಾನ್ಸರ್ ಆರೈಕೆಗೆಗೆ ಮುನಿರಾಬಾದ್ ಟಿಬಿ ಡ್ಯಾಂ ಬಳಿ ಕ್ಯಾನ್ಸರ್ ಆರೈಕೆ ಕೇಂದ್ರ ಸ್ಥಾನಪನೆಗೆ ಸರ್ಕಾರ ಮುಂದಾಗಿದೆ.
Karnataka Budget 2026: ಬೆಂಗಳೂರಿನಲ್ಲಿ 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ: ಸಿಎಂ
ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಹಾಗೂ ಕಲಬುರಗಿಯ ವೈದ್ಯಕೀಯ ಕಾಲೇಜಿನಲ್ಲಿ ಐವಿಎಫ್ ಕೇಂದ್ರ ಸ್ಥಾಪನೆಗೆ ತಲಾ 1 ಕೋಟಿ ರೂಪ ಘೋಷಣೆ ಮಾಡಲಾಗಿದೆ.
- ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಸೌಕರ್ಯವನ್ನು ಇನ್ನಷ್ಟು ಸದೃಢಗೊಳಿಸಲು ಬಜೆಟ್‌ನಲ್ಲಿ ಕೆಳಕಂಡ ಪ್ರಮುಖ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
- ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ 10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ 92 ಕೋಟಿ ರೂ. ವೆಚ್ಚದ ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.
- 236 ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು.
- ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ 1,000 ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಮತ್ತು ಅಂಗಾಂಗ ಕಸಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.
- 2026-27ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನವನ್ನು ಮತ್ತು ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ.
- ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು.
- ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾಗಿರುತ್ತದೆ. ಅಲ್ಲದೆ, ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ. ಸದರಿ ಕಾಲೇಜುಗಳ ಕಾರ್ಯಾಚರಣೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.
- ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು.
- ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.
- ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆಯನ್ನು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಸ್ಥಾಪಿಸಲಾಗುವುದು.
- ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು.
- ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.
- ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು. ಬೆಂಗಳೂರು ವೈದ್ಯಕೀಯ ಕಾಲೇಜಿನ MBBS ಮತ್ತು BDS ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.