ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Ring Road Shubha Case: ರಿಂಗ್‌ ರೋಡ್‌ ಶುಭಾ ಕ್ಷಮಾದಾನದ ಅರ್ಜಿ ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ತೀರ್ಮಾನ

Ring road Shubha's Mercy Petition: 2003ರಲ್ಲಿ ಬೆಂಗಳೂರಿನ ರಿಂಗ್ ರೋಡ್‌ನಲ್ಲಿ ನಡೆದ ಗಿರೀಶ್ ಕೊಲೆ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಭಾವಿ ಪತಿ ಗಿರೀಶ್ ಅವರನ್ನು ಕೊಲೆ ಮಾಡಿದ ಕೇಸ್‌ನಲ್ಲಿ ಶುಭಾ ಮತ್ತು ಆಕೆಯ ಗೆಳೆಯ ಅರುಣ್‌ಗೆ ಜೀವಾವಧಿ ಶಿಕ್ಷೆಯಾಗಿತ್ತು. ಹೀಗಾಗಿ ಅಪರಾಧಿಗಳು ರಾಜ್ಯಪಾಲರಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದರು.

ರಿಂಗ್‌ ರೋಡ್‌ ಶುಭಾ ಕ್ಷಮಾದಾನದ ಅರ್ಜಿ ತಿರಸ್ಕರಿಸಿದ ಸಚಿವ ಸಂಪುಟ

-

Prabhakara R
Prabhakara R Oct 15, 2026 3:32 PM

ಬೆಂಗಳೂರು: ರಿಂಗ್‌ ರೋಡ್‌ ಶುಭಾ ಕ್ಷಮಾದಾನದ ಅರ್ಜಿಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಕರ್ನಾಟಕ ಸಚಿವ ಸಂಪುಟ ಗುರುವಾರ ತೀರ್ಮಾನಿಸಿದೆ. ಕೊಲೆ ಕೇಸ್‌ನಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಶುಭಾ (Ring Road Shubha Case) ಮತ್ತು ಆಕೆಯ ಗೆಳೆಯ ಅರುಣ್‌, ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ರಾಜ್ಯಪಾಲರು ಸಂಪುಟದ ಅಭಿಪ್ರಾಯ ಕೇಳಿದ್ದರು. ಆದರೆ, ಇದೀಗ ಕ್ಷಮಾದಾನ ಮನವಿಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಂಪುಟ ಸಭೆ ನಿರ್ಣಯ ಕೈಗೊಂಡಿದೆ.

ಕ್ಷಮಾದಾನ ಅರ್ಜಿಗಳ ಪರಿಶೀಲನೆಯಲ್ಲಿ ರಾಜ್ಯ ಸರ್ಕಾರದ ಶಿಫಾರಸು ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷೆಗೆ ಸಂಬಂಧಿಸಿದ ದಾಖಲೆಗಳು, ಜೈಲು ಅಧಿಕಾರಿಗಳ ವರದಿ ಹಾಗೂ ಇತರ ಕಾನೂನು ಅಂಶಗಳನ್ನು ಪರಿಶೀಲಿಸಿದ ಬಳಿಕ ಸಚಿವ ಸಂಪುಟ ತನ್ನ ಶಿಫಾರಸನ್ನು ರಾಜ್ಯಪಾಲರಿಗೆ ಕಳುಹಿಸಬಹುದು.

ಸಂವಿಧಾನದ 161ನೇ ವಿಧಿಯಡಿ ರಾಜ್ಯಪಾಲರಿಗೆ ನಿರ್ದಿಷ್ಟ ಪ್ರಕರಣಗಳಲ್ಲಿ ಕ್ಷಮಾದಾನ, ಶಿಕ್ಷೆ ಕಡಿತ ಅಥವಾ ಶಿಕ್ಷೆಯ ಸ್ವರೂಪ ಬದಲಿಸುವ ಅಧಿಕಾರವಿದೆ. ಈ ಅಧಿಕಾರವನ್ನು ಸಂವಿಧಾನಾತ್ಮಕ ನಿಯಮಗಳ ಪ್ರಕಾರ ಸಚಿವ ಸಂಪುಟದ ಸಲಹೆಯ ಮೇರೆಗೆ ಚಲಾಯಿಸಲಾಗುತ್ತದೆ.

ಗಿರೀಶ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶುಭಾ ಶಂಕರನಾರಾಯಣ ಹಾಗೂ ಡಿ. ಅರುಣ್ ವರ್ಮಾ ಸಲ್ಲಿಸಿರುವ ಕ್ಷಮಾದಾನ ಅರ್ಜಿಗಳು ರಾಜ್ಯ ಸರ್ಕಾರದ ಪರಿಶೀಲನೆಯ ಹಂತಕ್ಕೆ ಬಂದಿದ್ದವು. ಈ ಅರ್ಜಿಗಳ ಬಗ್ಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಸರ್ಕಾರವು ಕ್ಷಮಾದಾನ ನೀಡದಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ತೀರ್ಮಾನಿಸಿದೆ.

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪ್ರತಿಕ್ರಿಯಿಸಿ, ಕುಮಾರಿ ಶುಭಾ ಶಂಕರ್ ಮತ್ತು ಡಿ. ಅರುಣ್ ವರ್ಮಾ ಅವರು ಸಲ್ಲಿಸಿರುವ ಕ್ಷಮಾದಾನ ಮನವಿಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಕರ್ನಾಟಕ ಸಚಿವ ಸಂಪುಟ ಇಂದು ತೀರ್ಮಾನಿಸಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನ 17ನೇ ತ್ವರಿತ ವಿಚಾರಣಾ ನ್ಯಾಯಾಲಯದಲ್ಲಿ ದಾಖಲಾಗಿದ್ದ ಎಸ್.ಸಿ. ಸಂಖ್ಯೆ 314/2004ರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ 2025ರ ಜುಲೈ 14ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರಿಗೆ ಭಾರತದ ಸಂವಿಧಾನದ 161ನೇ ವಿಧಿಯಡಿ ರಾಜ್ಯಪಾಲರ ಮುಂದೆ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಲು ಎಂಟು ವಾರಗಳ ಕಾಲಾವಕಾಶ ನೀಡಿತ್ತು. ಅರ್ಜಿಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳುವವರೆಗೆ ಅವರನ್ನು ಬಂಧಿಸಬಾರದು ಹಾಗೂ ಶಿಕ್ಷೆಯನ್ನು ಅಮಾನತಿನಲ್ಲಿಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿತ್ತು.

ಈ ಹಿನ್ನೆಲೆಯಲ್ಲಿ, ಕ್ಷಮಾದಾನ ಮನವಿಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಏನಿದು ಪ್ರಕರಣ?

2003ರಲ್ಲಿ ಬೆಂಗಳೂರಿನ ರಿಂಗ್ ರೋಡ್‌ನಲ್ಲಿ ನಡೆದ ಗಿರೀಶ್ ಕೊಲೆ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಗಿರೀಶ್ ಮತ್ತು ಶುಭಾ ಶಂಕರನಾರಾಯಣ ಅವರ ವಿವಾಹ ನಿಶ್ಚಯವಾಗಿ, 2003ರ ನವೆಂಬರ್ 30ರಂದು ನಿಶ್ಚಿತಾರ್ಥ ನಡೆದಿತ್ತು. ಗಿರೀಶ್ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಶುಭಾ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದರು.

ಆದರೆ ಶುಭಾ ತನ್ನ ಕಾಲೇಜಿನ ಜೂನಿಯರ್ ವಿದ್ಯಾರ್ಥಿಯಾಗಿದ್ದ ಅರುಣ್ ವರ್ಮಾನನ್ನು ಪ್ರೀತಿಸುತ್ತಿದ್ದಳು. ಅರುಣ್‌ನ ಮದುವೆಯಾಗುವ ಉದ್ದೇಶದಿಂದ ಗಿರೀಶ್ ಕೊಲೆಗೆ ಸಂಚು ರೂಪಿಸಿದ್ದಳು. 2003ರ ಡಿಸೆಂಬರ್ 3ರ ರಾತ್ರಿ ಗಿರೀಶ್ ತಮ್ಮ ಭಾವಿ ಪತ್ನಿ ಶುಭಾಳನ್ನು ಊಟಕ್ಕೆ ಕರೆದುಕೊಂಡು ಹೋಗಿದ್ದರು. ಬಳಿಕ ಎಚ್‌ಎಎಲ್ ವಿಮಾನ ನಿಲ್ದಾಣದ ಬಳಿ ವಿಮಾನಗಳ ಹಾರಾಟ ವೀಕ್ಷಿಸುವ ಆಸೆಯನ್ನು ಶುಭಾ ವ್ಯಕ್ತಪಡಿಸಿದ್ದರಿಂದ, ಗಿರೀಶ್ ಅವರನ್ನು ರಿಂಗ್ ರೋಡ್‌ನ ವೀಕ್ಷಣಾ ಸ್ಥಳಕ್ಕೆ ಕರೆದೊಯ್ದಿದ್ದರು ಎನ್ನಲಾಗಿದೆ.

ಇಬ್ಬರೂ ವಿಮಾನಗಳ ಹಾರಾಟ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಗಿರೀಶ್ ಮೇಲೆ ದಾಳಿ ನಡೆದಿತ್ತು. ಆರೋಪಿಗಳು ಬೈಕ್‌ನ ಶಾಕ್ ಅಬ್ಸಾರ್ಬರ್‌ನಿಂದ ಅವರ ತಲೆಗೆ ಹೊಡೆದಿದ್ದರು ಎಂಬುದು ಪ್ರಕರಣದ ವಿವರಗಳಲ್ಲಿ ಉಲ್ಲೇಖವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮರುದಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದರು.

ಅಂದಿನ ವಿವೇಕನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಕೆ.ಎ. ನಾನಯ್ಯ ಪ್ರಕರಣದ ತನಿಖೆ ನಡೆಸಿದ್ದರು. ಮೊಬೈಲ್ ಕರೆಗಳ ವಿವರಗಳನ್ನು ಪರಿಶೀಲಿಸಿದಾಗ ಪೊಲೀಸರಿಗೆ ಪ್ರಮುಖ ಸುಳಿವುಗಳು ಲಭಿಸಿದ್ದವು. ಆ ಕಾಲದಲ್ಲಿ ಕರೆಗಳ ದಾಖಲೆಗಳನ್ನು ಆಧರಿಸಿ ತನಿಖೆ ನಡೆಸಲಾಗಿತ್ತು.

ಜುಲೈ 2010 ರಲ್ಲಿ ಸ್ಥಳೀಯ ನ್ಯಾಯಾಲಯವು ನಾಲ್ವರನ್ನೂ ದೋಷಿಗಳು ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಅಪರಾಧಿಗಳು ಕರ್ನಾಟಕ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ವಿಚಾರಣಾ ನ್ಯಾಯಾಲಯದ ಜೀವಾವಧಿ ಶಿಕ್ಷೆಯ ಆದೇಶವನ್ನು ಎತ್ತಿಹಿಡಿದಿತ್ತು. 2012ರಲ್ಲಿ, ಶುಭಾ ಶಿಕ್ಷೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಳು ಮತ್ತು ಜಾಮೀನು ಪಡೆದಿದ್ದಳು. ನಂತರ, ಇತರರೂ ಜಾಮೀನಿನ ಮೇಲೆ ಹೊರಬಂದಿದ್ದರು. ಆದರೆ, 2025ರ ಜುಲೈ 14ರಂದು ಸುಪ್ರೀಂಕೋರ್ಟ್ ನಾಲ್ವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿತ್ತು.