ಬಂಡೀಪುರದಲ್ಲಿ ಹುಲಿ ಸಾವು, ಕಾಡಾನೆ ದಂತ ನಾಪತ್ತೆ ಕುರಿತು ಸಮಗ್ರ ತನಿಖೆಗೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸೂಚನೆ
Bandipur tiger death, elephant tusk theft: ಹುಲಿ ಉರುಳಿಗೆ ಸಿಲುಕಿ ಸಾವನ್ನಪ್ಪಿದ ಘಟನೆಯ ಹಿಂದಿನ ನೈಜ ಕಾರಣಗಳು, ಅರಣ್ಯ ಪ್ರದೇಶದಲ್ಲಿ ಉರುಳು ಇಟ್ಟವರು ಯಾರು, ಕಾಡಾನೆಯ ದಂತಗಳು ಹೇಗೆ ನಾಪತ್ತೆಯಾದವು ಹಾಗೂ ಇದರಲ್ಲಿ ಕಳ್ಳಬೇಟೆಗಾರರ ಕೈವಾಡವಿದೆಯೇ ಎಂಬ ಬಗ್ಗೆ ಸಾಕ್ಷ್ಯಾಧಾರಿತ ಹಾಗೂ ವೈಜ್ಞಾನಿಕ ತನಿಖೆ ನಡೆಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚಿಸಿದ್ದಾರೆ.
-
ಬೆಂಗಳೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಉರುಳಿಗೆ ಸಿಲುಕಿ ಹುಲಿ ಮೃತಪಟ್ಟಿರುವುದು (Bandipur tiger death) ಹಾಗೂ ಕರಡಿಕಲ್ಲು ಗುಡ್ಡ ಪ್ರದೇಶದಲ್ಲಿ ಮೃತಪಟ್ಟ ಕಾಡಾನೆಯ ದಂತಗಳು ನಾಪತ್ತೆಯಾಗಿರುವ (elephant tusk theft) ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ, ಒಂದು ವಾರದೊಳಗೆ ವಿವರವಾದ ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ (Ramalinga reddy) ಅವರು ನಿರ್ದೇಶನ ನೀಡಿದ್ದಾರೆ .
ಅರಣ್ಯದ ಒಳಭಾಗದಲ್ಲೇ ಇಂತಹ ಕೃತ್ಯಗಳು ನಡೆದಿರುವುದು ಅರಣ್ಯ ಇಲಾಖೆಯ ಗಸ್ತು ವ್ಯವಸ್ಥೆ, ಮೇಲ್ವಿಚಾರಣೆ ಹಾಗೂ ಕರ್ತವ್ಯ ನಿರ್ವಹಣೆಯ ಬಗ್ಗೆ ತೀವ್ರ ಆತಂಕ ಮತ್ತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವನ್ಯಜೀವಿಗಳ ಸಂರಕ್ಷಣೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿರುವ ಸಚಿವರು, ಕೆಲ ಪ್ರಮುಖ ಅಂಶಗಳ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ:
ಹುಲಿ ಉರುಳಿಗೆ ಸಿಲುಕಿ ಸಾವನ್ನಪ್ಪಿದ ಘಟನೆಯ ಹಿಂದಿನ ನೈಜ ಕಾರಣಗಳು, ಅರಣ್ಯ ಪ್ರದೇಶದಲ್ಲಿ ಉರುಳು ಇಟ್ಟವರು ಯಾರು, ಕಾಡಾನೆಯ ದಂತಗಳು ಹೇಗೆ ನಾಪತ್ತೆಯಾದವು ಹಾಗೂ ಇದರಲ್ಲಿ ಕಳ್ಳಬೇಟೆಗಾರರ ಕೈವಾಡವಿದೆಯೇ ಎಂಬ ಬಗ್ಗೆ ಸಾಕ್ಷ್ಯಾಧಾರಿತ ಹಾಗೂ ವೈಜ್ಞಾನಿಕ ತನಿಖೆ ನಡೆಸಬೇಕು. ಎರಡೂ ಘಟನೆಗಳ ನಡುವೆ ಪರಸ್ಪರ ನಂಟಿದೆಯೇ ಎಂಬುದನ್ನೂ ಪರಿಶೀಲಿಸಬೇಕು. ಮೃತದೇಹಗಳು ಕೊಳೆತ ಸ್ಥಿತಿಯಲ್ಲಿರುವುದರಿಂದ ಮರಣೋತ್ತರ ಪರೀಕ್ಷೆ, ಪ್ರಯೋಗಾಲಯದ ವರದಿಗಳು, ಸ್ಥಳ ಪರಿಶೀಲನೆ, ಭೌತಿಕ ಸಾಕ್ಷ್ಯಗಳು, ಸಿಬ್ಬಂದಿಯ ಹೇಳಿಕೆಗಳು ಹಾಗೂ ಗಸ್ತು ಪುಸ್ತಕಗಳನ್ನು ಪರಿಶೀಲಿಸಿ ಯಾವುದೇ ಸಾಕ್ಷ್ಯ ನಾಶವಾಗದಂತೆ ತನಿಖೆ ನಡೆಸಲು ಸೂಚಿಸಲಾಗಿದೆ.
ಸಂಬಂಧಪಟ್ಟ ವಲಯ ಅರಣ್ಯಾಧಿಕಾರಿಗಳು (RFO), ಉಪ ವಲಯ ಅರಣ್ಯಾಧಿಕಾರಿಗಳು (DRFO) ಹಾಗೂ ಬೀಟ್ ಸಿಬ್ಬಂದಿ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದ್ದಾರೆಯೇ ಎಂಬುದನ್ನು ತಪಾಸಣೆ ನಡೆಸಬೇಕು. ಘಟನೆ ನಡೆದ ಜಾಗದಲ್ಲಿ ಕೊನೆಯ ಬಾರಿ ಗಸ್ತು ತಿರುಗಿದ ದಿನಾಂಕ, ಸಮಯ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಕರ್ತವ್ಯದಲ್ಲಿ ಲೋಪ ಅಥವಾ ಮೇಲ್ವಿಚಾರಣೆಯ ಕೊರತೆ ಕಂಡುಬಂದರೆ ಅಂತಹ ಅಧಿಕಾರಿ-ಸಿಬ್ಬಂದಿ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಬೇಕು ಎಂದು ಆದೇಶಿಸಲಾಗಿದೆ.
ರಾಜ್ಯದ ಎಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (DCF) ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು (ACF) ಕೇವಲ ಕಚೇರಿಗಳಲ್ಲಿ ಕುಳಿತು ವರದಿ ಪಡೆಯುವುದಕ್ಕೆ ಸೀಮಿತವಾಗದೆ, ಇಂದಿನಿಂದಲೇ ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಅರಣ್ಯ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಕ್ಷೇತ್ರ ಪರಿಶೀಲನೆ ನಡೆಸಬೇಕು. ವಿಶೇಷವಾಗಿ ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ಸೂಕ್ಷ್ಮ ವಲಯಗಳಲ್ಲಿ ಸಿಬ್ಬಂದಿಯ ಗಸ್ತು ಮತ್ತು ಭದ್ರತಾ ವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿ ಲೋಪಗಳನ್ನು ತಕ್ಷಣವೇ ಸರಿಪಡಿಸಬೇಕು ಎಂದು ತಾಕೀತು ಮಾಡಿದ್ದಾರೆ.
ರಾಜಕಾರಣಿಗಳಿಗೆ ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರೇರಣೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಶೇಷ ತನಿಖಾ ತಂಡ (SIT) ರಚನೆಯಾಗಿರುವುದು ಗಮನಕ್ಕೆ ಬಂದಿದ್ದು, ತನಿಖೆಯ ಪ್ರಗತಿ, ಸಂಗ್ರಹಿಸಿದ ಸಾಕ್ಷ್ಯಗಳು, ಕರ್ತವ್ಯಲೋಪ ಹಾಗೂ ಭದ್ರತೆಗೆ ಕೈಗೊಂಡಿರುವ ಕ್ರಮಗಳ ಸಮಗ್ರ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ಪಿಸಿಸಿಎಫ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.