Chinnaswamy Stadium: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತು ಪರಿಶೀಲನೆಗೆ ಸಮಿತಿ ರಚನೆ
ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಜಿಬಿಎ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳಿರುವ ಸಮಿತಿ ರಚಿಸಲಾಗಿದ್ದು, ಈ ಸಮಿತಿಯು ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ವಿಧಾನಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್ ಸಭೆ ನಡೆಸಿದರು. -
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕ್ರಿಕೆಟ್ ಪಂದ್ಯಗಳನ್ನು ನಡೆಸಬಹುದೇ ಅಥವಾ ಬೇಡವೇ ಎಂಬ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಬೆಂಗಳೂರು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವಿಧಾನಸೌಧದಲ್ಲಿ ಕೆಎಸ್‌ಸಿಎ ಪದಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಸೋಮವಾರ ಸಭೆ ನಡೆಸಿದ್ದು, ಈ ವೇಳೆ ಸಮಿತಿ ರಚಿಸಲಾಗಿದೆ.
ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಡಿ.24ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್‌ಸಿಎ ಕೋರಿದೆ. ಪ್ರೇಕ್ಷಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್‌ಸಿಎ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪರಿಶೀಲಿಸಲು ಬೆಂಗಳೂರು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಜಿಬಿಎ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳಿರುವ ಸಮಿತಿ ರಚಿಸಲಾಗಿದ್ದು, ಮಧ್ಯಾಹ್ನ 3 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸಮಿತಿ ನೀಡುವ ವರದಿ ಆಧರಿಸಿ, ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರು 17 ಅಂಶಗಳ ಸಲಹೆ ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿರುತ್ತದೆ ಎಂದು ಸೂಚಿಸಿ ಪತ್ರ ಬರೆದಿದ್ದರು. ಅದರಲ್ಲಿ ಏನೆಲ್ಲ ಪೂರ್ಣಗೊಳಿಸಿದ್ದಾರೆ ಎಂಬುದನ್ನು ಪರಿಶೀಲಿಸಿ, ಇಂದು ಸಂಜೆ 5 ಗಂಟೆಯೊಳಗೆ ಸಮಿತಿಯು ಸರ್ಕಾರಕ್ಕೆ ವರದಿ ನೀಡಲಿದೆ ಎಂದು ತಿಳಿಸಿದರು.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲು ವೆಂಕಟೇಶ್ ಪ್ರಸಾದ್ ಮನವಿ
ಸಭೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ. ಶರತ್ ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್.ಹಿತೇಂದ್ರ ಹಾಗೂ ಕೆಎಸ್‌ಸಿಎ ಪದಾಧಿಕಾರಿಗಳು ಉಪಸ್ಥಿತರಿದ್ದರು.