ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chinnaswamy Stadium: ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳಿಗೆ ಸರ್ಕಾರ ಅನುಮತಿ

IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ ನಂತರ ಈ ಮೈದಾನದಲ್ಲಿ ಯಾವುದೇ ಕ್ರಿಕೆಟ್‌ ಪಂದ್ಯಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ, ಇದೀಗ ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಐಪಿಎಲ್‌ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಗಳಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌

ಚಿನ್ನಸ್ವಾಮಿ ಕ್ರೀಡಾಂಗಣ (ಸಂಗ್ರಹ ಚಿತ್ರ) -

Prabhakara R
Prabhakara R Jan 17, 2026 9:01 PM

ಬೆಂಗಳೂರು: ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಐಪಿಎಲ್‌ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಚಿನ್ನಸ್ವಾಮಿ ಮೈದಾನದಲ್ಲಿ ಕ್ರಿಕೆಟ್‌ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ)ಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದೆ.

ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ನಿರ್ದಿಷ್ಟ ಷರತ್ತುಗಳು, ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ ನೀಡಲಾಗಿದೆ.

ರಾಜ್ಯ ಸರ್ಕಾರದ ಎಲ್ಲಾ ನಿಗದಿತ ಕ್ರಮಗಳನ್ನು ಜಾರಿಗೆ ತರಲು ಕೆಎಸ್‌ಸಿಎ ಸಿದ್ಧವಾಗಿದೆ ಎಂದು ಕೆಎಸ್‌ಸಿಎ ಅಧಿಕೃತ ವಕ್ತಾರ ವಿನಯ್ ಮೃತ್ಯುಂಜಯ ದೃಢಪಡಿಸಿದ್ದಾರೆ. ಈ ಬಗ್ಗೆ ಕೆಎಸ್‌ಸಿಎ ಅಧ್ಯಕ್ಷ ಬಿ. ಕೆ. ವೆಂಕಟೇಶ್ ಪ್ರಸಾದ್ ಶೀಘ್ರದಲ್ಲೇ ಪತ್ರಿಕಾಗೋಷ್ಠಿ ನಡೆಸಿ ವಿವರಗಳನ್ನು ಹಂಚಿಕೊಳ್ಳುವ ಸಾಧ್ಯತೆ ಇದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿದ ಹಿನ್ನೆಲೆಯಲ್ಲಿ ಕ್ರಿಕೆಟ್‌ ಪಂದ್ಯಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಹೀಗಾಗಿ ಇತ್ತೀಚೆಗೆ ವಿಜಯ್ ಹಜಾರೆ ಟೂರ್ನಿಯ ಪಂದ್ಯಗಳನ್ನು ಬೆಂಗಳೂರಿನ (Bengaluru) ಹೊರವಲಯದಲ್ಲಿ ಬಿಸಿಸಿಐ ನಿರ್ಮಾಣ ಮಾಡಿರುವ ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ (Centre of Excellence) ಮೈದಾನದಲ್ಲಿ ನಡೆಸಲಾಗಿತ್ತು. ಬೆಂಗಳೂರು ಪೊಲೀಸರು ಅನುಮತಿ ನಿರಾಕರಿಸಿದ ಕಾರಣ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯಗಳು ನಡೆದಿರಲಿಲ್ಲ.

ಜನಸಂದಣಿ ನಿರ್ವಹಣೆಗೆ ಚಿನ್ನಸ್ವಾಮಿಯಲ್ಲಿ ಎಐ ಕ್ಯಾಮೆರಾ ಅಳವಡಿಸಲು ಆರ್‌ಸಿಬಿ ಸಜ್ಜು

ಪಂದ್ಯ ನಡೆಸುವ ಸಂಬಂಧ ಬೆಂಗಳೂರು ಆಯುಕ್ತ ಸೀಮಂತ್‌ ಕುಮಾರ್‌, ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಅಗ್ನಿಶಾಮಕ ದಳದ ಅಧಿಕಾರಿಗಳು ಕ್ರೀಡಾಂಗಣದಲ್ಲಿ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದ್ದರು. ಪರಿಶೀಲನೆಯ ಬಳಿಕ ಈ ತಂಡ ಸರ್ಕಾರಕ್ಕೆ ವರದಿ ನೀಡಿತ್ತು. ಅಂತಿಮವಾಗಿ ಬೆಂಗಳೂರು ಪೊಲೀಸರು ಅನುಮತಿ ನಿರಾಕರಣೆ ಮಾಡಿದ್ದರು. ಆದರೆ, ಇದೀಗ ಇಲ್ಲಿ ಪಂದ್ಯಗಳನ್ನು ನಡೆಸಲು ಸರ್ಕಾರ ಅನುಮತಿ ನೀಡಿದೆ.