SC-ST Reservation: ರಾಜ್ಯದ ಎಸ್‌ಸಿ, ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಳ ರದ್ದು ಮಾಡಿದ ಹೈಕೋರ್ಟ್
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ಪ್ರಕಟಿಸಿದೆ. ಹೈಕೋರ್ಟ್‌ನ ಈ ದಿಢೀರ್ ತೀರ್ಪಿನಿಂದಾಗಿ ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಹಲವು ನೇಮಕಾತಿ ಪರೀಕ್ಷೆಗಳು ಹಾಗೂ ಉನ್ನತ ಶಿಕ್ಷಣದ ಸೀಟು ಹಂಚಿಕೆ ಪ್ರಕ್ರಿಯೆಗಳ ಮೇಲೆ ನೇರ ಪರಿಣಾಮ ಬೀರಲಿದೆ.
-
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಿ (SC-ST Reservation) ಜಾರಿಗೆ ತರಲಾಗಿದ್ದ ಮಹತ್ವದ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್‌ನ ಶೇ. 50 ಸಾಂವಿಧಾನಿಕ ಮಿತಿ ತೀರ್ಪನ್ನು ಮೀರಿ ಒಟ್ಟು ಮೀಸಲಾತಿಯನ್ನು ಶೇ. 56ಕ್ಕೇರಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಇದರಿಂದ ಆಡಳಿತ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ಪ್ರಕಟಿಸಿದೆ.
ರಾಜ್ಯದ ಶಿಕ್ಷಣ ಸಂಸ್ಥೆಗಳ ಪ್ರವೇಶ ಹಾಗೂ ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಎಸ್‌ಸಿ ಮೀಸಲಾತಿಯನ್ನು ಶೇ. 15ರಿಂದ ಶೇ. 17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ. 3ರಿಂದ ಶೇ. 7ಕ್ಕೆ ಹೆಚ್ಚಿಸಲಾಗಿತ್ತು. ಈ ಮೂಲಕ ರಾಜ್ಯದಲ್ಲಿದ್ದ ಒಟ್ಟು ಮೀಸಲಾತಿ ಪ್ರಮಾಣ ಶೇ. 50ರಿಂದ ಶೇ. 56ಕ್ಕೆ ಏರಿಕೆಯಾಗಿತ್ತು. ಸರ್ಕಾರದ ಈ ನಡೆ ಸಂವಿಧಾನಬಾಹಿರ ಮತ್ತು ಸುಪ್ರೀಂ ಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆ ಎಂದು ಆಕ್ಷೇಪಿಸಿ ಮಹೇಂದ್ರ ಕುಮಾರ್ ಮಿಶ್ರಾ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.
ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ವಿಭಾಗೀಯ ಪೀಠ, 'ಇಂದಿರಾ ಸಹಾನಿ' ಪ್ರಕರಣದ ಐತಿಹಾಸಿಕ ತೀರ್ಪನ್ನು ಉಲ್ಲೇಖಿಸಿತು. ಸಂವಿಧಾನ ನಿಗದಿಪಡಿಸಿದ ಶೇ. 50ರ ಗಡಿಯನ್ನು ಮೀರುವುದಕ್ಕೆ ಬಲವಾದ ಸಾಂವಿಧಾನಿಕ ಸಮರ್ಥನೆ ಮತ್ತು ಅಸಾಧಾರಣ ಸನ್ನಿವೇಶಗಳ ಅಗತ್ಯವಿದೆ. ಸೂಕ್ತ ಕಾನೂನಾತ್ಮಕ ನೆಲೆಗಟ್ಟಿಲ್ಲದೆ ಮೀಸಲಾತಿ ಮಿತಿಯನ್ನು ವಿಸ್ತರಿಸಿರುವುದು ಸಮಂಜಸವಲ್ಲ ಎಂದು ಸ್ಪಷ್ಟಪಡಿಸಿದ ಪೀಠ, ಮೀಸಲಾತಿ ಹೆಚ್ಚಳದ ಕಾಯ್ದೆಯನ್ನು ಅನೂರ್ಜಿತಗೊಳಿಸಿದೆ.
ಹೈಕೋರ್ಟ್‌ನ ಈ ದಿಢೀರ್ ತೀರ್ಪಿನಿಂದಾಗಿ ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಹಲವು ನೇಮಕಾತಿ ಪರೀಕ್ಷೆಗಳು ಹಾಗೂ ಉನ್ನತ ಶಿಕ್ಷಣದ ಸೀಟು ಹಂಚಿಕೆ ಪ್ರಕ್ರಿಯೆಗಳ ಮೇಲೆ ನೇರ ಪರಿಣಾಮ ಬೀರಲಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.