KSRTC Strike: ನಾಳೆ ರಾಜ್ಯಾದ್ಯಂತ KSRTC ಸೇರಿ 4 ನಿಗಮದ ಸಾರಿಗೆ ನೌಕರರ ಪ್ರತಿಭಟನೆ; ಬಸ್ ಸಂಚಾರ ಇರುತ್ತಾ?
ಸಾರಿಗೆ ನೌಕರರು ನಾಳೆ (ಫೆ.19) ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋಗೆ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಬೆಂಗಳೂರು ಚಲೋಗೆ ಕರೆ ನೀಡಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಸಾರಿಗೆ ನೌಕರರು ನಾಳೆ (ಫೆ.19) ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ (KSRTC Strike) ಆಗ್ರಹಿಸಿ ಬೆಂಗಳೂರು ಚಲೋಗೆ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಬೆಂಗಳೂರು ಚಲೋಗೆ ಕರೆ ನೀಡಿದೆ. ಕಳೆದ ಬಾರಿ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಅವರ ನಿಧನದ ಹಿನ್ನೆಲೆಯಲ್ಲಿ ‘ಬೆಂಗಳೂರು ಚಲೋ’ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.
ಈಗ ಫೆಬ್ರವರಿ 19ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ನೌಕರರು ಜಮಾಯಿಸಿ ಬೃಹತ್ ಮೆರವಣಿಗೆ ನಡೆಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ಮುಖಂಡರು ಸುದ್ದಿಗೋಷ್ಠಿ ನಡೆಸಲಿದ್ದು, ಮುಂದಿನ ಹೋರಾಟದ ಹಾದಿಯನ್ನು ಘೋಷಿಸಲಿದ್ದಾರೆ. ಪ್ರತಿಭಟನೆಯ ಬೆನ್ನಲ್ಲೇ, ಫೆಬ್ರವರಿ 20ರಿಂದ ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ ನಾಲ್ಕೂ ನಿಗಮಗಳ ನೌಕರರು ಕೆಲಸಕ್ಕೆ ಗೈರಾಗುವ ಸಾಧ್ಯತೆ ಹೆಚ್ಚಿದೆ. ನೌಕರರು ಕೆಲಸಕ್ಕೆ ಹಾಜರಾಗದಿದ್ದರೆ ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.
ಸಾರಿಗೆ ಮುಷ್ಕರವನ್ನು ಹತ್ತಿಕ್ಕಲು ಸರ್ಕಾರ ಈಗಾಗಲೇ ಸಿದ್ಧತೆ ನಡೆಸಿದ್ದು, ಪ್ರತಿಭಟನಾ ನಿರತ ನೌಕರರ ವಿರುದ್ಧ 'ಎಸ್ಮಾ' ಜಾರಿ ಮಾಡುವ ಅಥವಾ ವೇತನ ಕಡಿತದಂತಹ ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸಾರಿಗೆ ನೌಕರರ ಬೇಡಿಕೆಗಳೇನು?
- ವೇತನ ಬಾಕಿ ಪಾವತಿ: ಕಳೆದ 38 ತಿಂಗಳ ವೇತನದ ಹಿಂಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು
- ವೇತನ ಪರಿಷ್ಕರಣೆ: 1-1-2024ಕ್ಕೆ ಅನ್ವಯವಾಗುವಂತೆ ನೂತನ ವೇತನ ಶ್ರೇಣಿ ಜಾರಿಗೊಳಿಸಬೇಕು.
- ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ನೀಡಬೇಕು.
- ಕೆಲಸದ ಅವಧಿಯಲ್ಲಿ ಅಧಿಕಾರಿಗಳಿಂದ ಕಾರ್ಮಿಕರಿಗೆ ನೀಡಲಾಗುವ ಕಿರುಕುಳವನ್ನು ಕೂಡಲೇ ನಿಲ್ಲಿಸಬೇಕು.
ನೌಕರರ ವಿರುದ್ಧ ಶಿಸ್ತುಕ್ರಮ:
ಇನ್ನು, ಫೆ.19 ರಂದು ಬೆಂಗಳೂರು ಚಲೋ ಹೋರಾಟದಲ್ಲಿ ಭಾಗಿಯಾಗುವ ನೌಕರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ ಪಾಷ ಆದೇಶ ಹೊರಡಿಸಿದ್ದಾರೆ. ನಾಡಿದ್ದು (ಫೆ.19) ನೌಕರರು ತಮ್ಮ ದೈನಂದಿನ ಕರ್ತವ್ಯಕ್ಕೆ ಗೈರು ಹಾಜರಾದರೆ ಕೆಲಸ ಮಾಡದಿದ್ದಾಗ ವೇತನವಿಲ್ಲ ಎಂಬ ಸಾಮಾನ್ಯ ತತ್ವದನ್ವಯ ದಿನದ ವೇತನವನ್ನು ಕಡಿತಗೊಳಿಸುವುದರ ಜತೆಗೆ ಆಡಳಿತವರ್ಗವು ಅನಧಿಕೃತವಾಗಿ ಗೈರು ಹಾಜರಾದ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ನೌಕರರಿಗೆ ಎಚ್ಚರಿಕೆ ನೀಡಿದ್ದಾರೆ.