Bengaluru-Goa Vande Bharat Express: ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ; ಮಡಗಾಂವ್- ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಂಗಳೂರುವರೆಗೆ ವಿಸ್ತರಣೆ
Bengaluru-Madgaon Vande Bharat Express: ಹೆಚ್ಚುತ್ತಿರುವ ಪ್ರಯಾಣಿಕರ ಸಂದಣಿ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು, ಹಾಸನ, ಮಂಗಳೂರು, ಉಡುಪಿ ಮತ್ತು ಕಾರವಾರದ ಮೂಲಕ ಬೆಂಗಳೂರು ಹಾಗೂ ಮಡಗಾಂವ್‌ಗಳನ್ನು ಸಂಪರ್ಕಿಸುವ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲು ಸಂಪರ್ಕ ಕಲ್ಪಿಸಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದರು. ಇದಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದನೆ ದೊರೆತಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಕರ್ನಾಟಕ ಕರಾವಳಿ ಹಾಗೂ ಗೋವಾಗೆ ತೆರಳುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಸಿಹಿಸುದ್ದಿ ಸಿಕ್ಕಿದೆ. ಕರಾವಳಿ ಮತ್ತು ಬೆಂಗಳೂರು ನಡುವಿನ ರೈಲು ಸಂಪರ್ಕವನ್ನು ಬಲಪಡಿಸುವ ನಿಟ್ಟಿನಲ್ಲಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಪ್ರಸ್ತುತ ಚಾಲನೆಯಲ್ಲಿರುವ ಮಡಗಾಂವ್-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು (Bengaluru-Goa Vande Bharat Express) ಬೆಂಗಳೂರಿಗೆ ವಿಸ್ತರಿಸುವುದಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂದಣಿ ಹಾಗೂ ಪ್ರವಾಸೋದ್ಯಮ, ಧಾರ್ಮಿಕ ಯಾತ್ರೆ, ಶಿಕ್ಷಣ ಮತ್ತು ವಾಣಿಜ್ಯ ಕ್ಷೇತ್ರಗಳಿಗೆ ಈ ಮಾರ್ಗದ (ಕಾರಿಡಾರ್) ಮಹತ್ವವನ್ನು ಗಮನದಲ್ಲಿಟ್ಟುಕೊಂಡು, ಹಾಸನ, ಮಂಗಳೂರು, ಉಡುಪಿ ಮತ್ತು ಕಾರವಾರದ ಮೂಲಕ ಬೆಂಗಳೂರು ಹಾಗೂ ಮಡಗಾಂವ್‌ಗಳನ್ನು ಸಂಪರ್ಕಿಸುವ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲು ಸಂಪರ್ಕ ಕಲ್ಪಿಸಬೇಕೆಂದು ಎಚ್.ಡಿ.ಕುಮಾರಸ್ವಾಮಿ ಅವರು ಮನವಿ ಮಾಡಿದ್ದರು.
ಬೆಂಗಳೂರು-ಕರಾವಳಿ ಕರ್ನಾಟಕ-ಗೋವಾ ಮಾರ್ಗದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸುವುದು ಕುಮಾರಸ್ವಾಮಿ ಅವರ ಮೂಲ ಪ್ರಸ್ತಾವನೆಯ ಉದ್ದೇಶವಾಗಿತ್ತು. ಪ್ರವಾಸಿಗರು, ಯಾತ್ರಿಕರು, ವಿದ್ಯಾರ್ಥಿಗಳು ಮತ್ತು ವೃತ್ತಿಪರರು ಸೇರಿದಂತೆ ವಿವಿಧ ವರ್ಗದ ಪ್ರಯಾಣಿಕರಿಗೆ ಈ ಮಾರ್ಗವು ಉಪಯುಕ್ತವಾಗಿದೆ ಎಂದು ಕುಮಾರಸ್ವಾಮಿ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದರು. ನೈರುತ್ಯ ರೈಲ್ವೆಯ ಸಂಬಂಧಪಟ್ಟ ಅಧಿಕಾರಿಗಳು ಈ ಸೇವೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಿ, ಅಗತ್ಯ ಆಡಳಿತಾತ್ಮಕ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕೆಂದು ಅವರು ಪ್ರಸ್ತಾಪಿಸಿದ್ದರು.
ಸುಧಾರಿತ ರೈಲು ಸಂಪರ್ಕದ ವ್ಯಾಪಕ ಆರ್ಥಿಕ ಮಹತ್ವವನ್ನೂ ಅವರು ಒತ್ತಿಹೇಳಿದ್ದರು; ಇಂತಹ ಸೇವೆಯು ಪ್ರಾದೇಶಿಕ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ, ಪ್ರವಾಸೋದ್ಯಮವನ್ನು ಬಲಪಡಿಸುತ್ತದೆ ಮತ್ತು ಅಂತಾರಾಜ್ಯ ಸಂಪರ್ಕವನ್ನು ಹೆಚ್ಚಿಸುತ್ತದೆ ಎಂದು ಅವರು ತಿಳಿಸಿದ್ದರು.
ಹಾಸನ, ಮಂಗಳೂರು ಜಂಕ್ಷನ್, ಉಡುಪಿ ಮತ್ತು ಕಾರವಾರದ ಮೂಲಕ ಬೆಂಗಳೂರು ಮತ್ತು ಮಡ್ಗಾಂವ್ ಅನ್ನು ಸಂಪರ್ಕಿಸುವ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲನ್ನು ಈ ಪ್ರಸ್ತಾವನೆಯು ನಿರ್ದಿಷ್ಟವಾಗಿ ಕಲ್ಪಿಸಿತ್ತು. ಎಚ್‌ಡಿಕೆ ಅವರ ಮನವಿಗೆ ರೈಲ್ವೆ ಇಲಾಖೆ ಸ್ಪಂದಿಸಿದೆ.
📍ನವದೆಹಲಿ
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 1, 2026
ಹೆಚ್ಚುತ್ತಿರುವ ಪ್ರಯಾಣಿಕರ ಸಂದಣಿ ಹಾಗೂ ಪ್ರವಾಸೋದ್ಯಮ, ಧಾರ್ಮಿಕ ಯಾತ್ರೆ, ಶಿಕ್ಷಣ ಮತ್ತು ವಾಣಿಜ್ಯ ಕ್ಷೇತ್ರಗಳಿಗೆ ಈ ಮಾರ್ಗದ (ಕಾರಿಡಾರ್) ಮಹತ್ವವನ್ನು ಗಮನದಲ್ಲಿಟ್ಟುಕೊಂಡು, ಹಾಸನ, ಮಂಗಳೂರು, ಉಡುಪಿ ಮತ್ತು ಕಾರವಾರದ ಮೂಲಕ ಬೆಂಗಳೂರು ಹಾಗೂ ಮಡಗಾಂವ್‌ಗಳನ್ನು ಸಂಪರ್ಕಿಸುವ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲು ಸಂಪರ್ಕ… pic.twitter.com/YHPadltwQW
ಇನ್ನು ಈ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ, ನನ್ನ ಮನವಿಗೆ ತ್ವರಿತ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸಿದ ನನ್ನ ಸಂಪುಟ ಸಹೋದ್ಯೋಗಿ ಹಾಗೂ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ (Ashwini Vaishnaw) ಅವರಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಪ್ರಸ್ತುತ ಚಾಲನೆಯಲ್ಲಿರುವ ಮಡಗಾಂವ್- ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಈಗ ಹಾಸನ, ಉಡುಪಿ ಮತ್ತು ಕಾರವಾರದ ಮೂಲಕ ಬೆಂಗಳೂರುವರೆಗೆ ವಿಸ್ತರಿಸಲಾಗಿದೆ. ಇದು ಪರಿಷ್ಕೃತ ಸಮಯದೊಂದಿಗೆ 'ರೈಲು ಸಂಖ್ಯೆ 26655/26656 ಯಶವಂತಪುರ-ಮಂಗಳೂರು- ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್' ಆಗಿ ಸಂಚರಿಸಲಿದೆ.
ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಅತ್ಯಾಧುನಿಕ ರೈಲು ಸಂಪರ್ಕವನ್ನು ಬಲಪಡಿಸುವ ಹಾಗೂ ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾವನ್ನು ಪರಸ್ಪರ ಹತ್ತಿರವಾಗಿಸುವ ನಿಟ್ಟಿನಲ್ಲಿ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಈ ಸುಧಾರಿತ ಸಂಪರ್ಕ ವ್ಯವಸ್ಥೆಯು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವುದಲ್ಲದೆ, ಪ್ರವಾಸೋದ್ಯಮ, ಪ್ರಾದೇಶಿಕ ಆರ್ಥಿಕ ಚಟುವಟಿಕೆಗಳು ಮತ್ತು ಅಂತಾರಾಜ್ಯ ಸಂಪರ್ಕವನ್ನು ಮತ್ತಷ್ಟು ಉತ್ತೇಜಿಸಲಿದೆ ಎಂದು ತಿಳಿಸಿದ್ದಾರೆ.
ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲ
ಈ ರೈಲು ಸೇವೆಯು ಬೆಂಗಳೂರು, ಹಾಸನ, ಮಂಗಳೂರು, ಉಡುಪಿ, ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಪ್ರವಾಸೋದ್ಯಮ, ತೀರ್ಥಯಾತ್ರೆ, ಶಿಕ್ಷಣ ಮತ್ತು ವೃತ್ತಿಪರ ಪ್ರಯಾಣಕ್ಕಾಗಿ ಈ ಕಾರಿಡಾರ್ ಹೆಚ್ಚಿನ ಮಹತ್ವ ಹೊಂದಿದೆ. ಈ ಮಾರ್ಗದಲ್ಲಿ ಸಂಪರ್ಕ ಸುಧಾರಿಸುವುದರಿಂದ ಬೆಂಗಳೂರು ಹಾಗೂ ಕರಾವಳಿ ಕರ್ನಾಟಕ ಮತ್ತು ಗೋವಾದ ವಾಣಿಜ್ಯ, ಬಂದರು ಮತ್ತು ಪ್ರವಾಸೋದ್ಯಮ ಕೇಂದ್ರಗಳ ನಡುವಿನ ಬಾಂಧವ್ಯ ಮತ್ತಷ್ಟು ಬಲಗೊಳ್ಳಲಿದೆ.