ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿದಾಯ ಭಾಷಣದಲ್ಲಿ ಮೇರು ನಟ ಡಾ. ರಾಜ್‌ಕುಮಾರ್ ಸ್ಮರಿಸಿದ ಸಿದ್ದರಾಮಯ್ಯ; ಹೇಳಿದ್ದೇನು?

Siddaramaiah Resigns: ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಲವು ವಿಚಾರಗಳಲ್ಲು ಹಂಚಿಕೊಂಡಿದ್ದಾರೆ. ʼʼಮೇರು ನಟ ಡಾ.ರಾಜ್ ಕುಮಾರ್ ಅಭಿಮಾನಿಗಳನ್ನು ʼಅಭಿಮಾನಿ ದೇವರು’ʼ ಎಂದು ಕರೆಯುತ್ತಿದ್ದರು. ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ʼಮತದಾರರೇ ದೇವರುʼʼ ಎಂದಿದ್ದಾರೆ.

ಮೇರು ನಟ ಡಾ. ರಾಜ್‌ಕುಮಾರ್ ಸ್ಮರಿಸಿದ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ -

Ramesh Ballamoole
Ramesh Ballamoole May 28, 2026 5:46 PM

ಬೆಂಗಳೂರು, ಮೇ 28: ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ ಯುಗಾಂತ್ಯವಾಗಿದೆ (Siddaramaiah Resigns). ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಗುರುವಾರ (ಮೇ 28) ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಲವು ವಿಚಾರಗಳಲ್ಲು ಹಂಚಿಕೊಂಡಿದ್ದಾರೆ. ಅದರಲ್ಲೂ ತಮ್ಮ ಭಾಷಣದಲ್ಲಿ ಮೇರು ನಟ ಡಾ. ರಾಜ್‌ಕುಮಾರ್ (Dr. Rajkumar) ಅವರನ್ನು ಸ್ಮರಿಸಿಕೊಂಡರು.

ʼʼಮೇರು ನಟ ಡಾ.ರಾಜ್ ಕುಮಾರ್ ಅಭಿಮಾನಿಗಳನ್ನು ʼಅಭಿಮಾನಿ ದೇವರು’ʼ ಎಂದು ಕರೆಯುತ್ತಿದ್ದರು. ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ʼಮತದಾರರೇ ದೇವರುʼ. ಆ ದೇವರ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆʼʼ ಎಂದು ಮಾತು ಆರಂಭಿಸಿದ್ದಾರೆ.

ಸಂವಿಧಾನಕ್ಕೆ ತಲೆಬಾಗಿದ ಸಿದ್ದರಾಮಯ್ಯ

ʼʼದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆʼʼ ಎಂದಿದ್ದಾರೆ.

ʼʼಹೆಚ್ಚುಕಡಿಮೆ ನಾಲ್ಜೂವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರಿಗೆ ನಾನು ಆಭಾರಿಯಾಗಿದ್ದೇನೆ. ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್‌ ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸದಾ ಆಭಾರಿಯಾಗಿರುತ್ತೇನೆʼʼ ಎಂದು ವಿವರಿಸಿದ್ದಾರೆ.

ʼರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲʼʼ: ಸಿದ್ದರಾಮಯ್ಯ ಸ್ಪಷ್ಟನೆ

ತೆರೆದ ಪುಸ್ತಕ

ʼʼನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ಮರಳಿನ ಮೇಲಿನ ಅಕ್ಷರಾಭ್ಯಾಸದ ಮೂಲಕ ವೀರ ಕುಣಿತವನ್ನು ಕಲಿಯುತ್ತ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್‌. ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ದಾಂತಿಕ ಬದ್ದತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ. ನಂಜುಂಡಸ್ವಾಮಿ. ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ. ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸ ಬಯಸುತ್ತೇನೆʼʼ ಎಂದು ಭಾವುಕರಾಗಿದ್ದಾರೆ.

“ನಾನು ನಿಮಗೆ ರೇಗಿದ್ದರೆ ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ”: ಸಚಿವರಿಗೆ ಸಿದ್ದರಾಮಯ್ಯ ಭಾವುಕ ವಿದಾಯ

ʼʼರಾಜಕೀಯ ಪಯಣದ ನನ್ನಹಾದಿಯಲ್ಲಿ ಹೆಜ್ಜೆಹೆಜ್ಜೆಗೂ ನಾನು ಪಟ್ಟಭದ್ರರ ದ್ವೇಷ ಅಸೂಯೆಗೆ ಈಡಾಗಿ‍ದ್ದೇನೆ. ಹೊರಗಿನವರ ಮತ್ತು ಒಳಗಿನವರ ಮೋಸ-ವಂಚನೆ-ಪಿತೂರಿಗೆ ಒಳಗಾಗಿದ್ದೇನೆ. ಇದರಿಂದಾಗಿ ಹಲವಾರು ಬಾರಿ ಬಿದ್ದಿದ್ದೇನೆ, ಬಿದ್ದಲ್ಲಿಂದಲೇ ಎದ್ದಿದ್ದೇನೆ. ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ, ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಇವೆಲ್ಲವನ್ನೂ ಅನುಭವಿಸಿದಾಗ ರಾಜಕೀಯ ಸನ್ಯಾಸ ತೆಗೆದುಕೊಂಡು ಬಿಡುವ ಎನ್ನುವಷ್ಟು ಮನಸ್ಸು ನೊಂದಿತ್ತು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ, ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ದ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆʼʼ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.