ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಕೇಸ್: ಪ್ರಮುಖ ಆರೋಪಿ ದೆಹಲಿ ಮೂಲದ ರಿತೇಶ್ ಪಾಂಡೆ ಅರೆಸ್ಟ್
ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೊದಲ ಬಂಧನವಾಗಿದೆ. ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ (Siddaramaiah Sting Video Case) ಮೊದಲ ಬಂಧನವಾಗಿದೆ. ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ದೆಹಲಿಯಲ್ಲಿ (Delhi) ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ರಹಸ್ಯ ಸ್ಥಳದಲ್ಲಿ ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.
ಬೆಳಿಗ್ಗೆ ಕಾಂಗ್ರೆಸ್ ನಾಯಕಿಯೊಬ್ಬರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಈಗಾಗಲೇ ಖಾಸಗಿ ವಾಹಿನಿಯ ಮುಖ್ಯಸ್ಥರೊಬ್ಬರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಮಾಹಿತಿಯನ್ನು ಪಡೆದುಕೊಂಡಿದ್ದು, ಮತ್ತೆ ಕರೆದಾಗ ವಿಚಾರಣೆಗೆ ಬರುವಂತೆ ಸೂಚಿಸಿ ನೋಟಿಸ್ ನೀಡಿದ್ದಾರೆ.ಕಳೆದ ಎರಡು ವಾರಗಳಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ಪೊಲೀಸರು 15 ಜನರಿಗೂ ಹೆಚ್ಚು ಮಂದಿಯನ್ನು ಕರೆತಂದು ವಿಚಾರಣೆಯನ್ನು ಮಾಡಿ ವಿಡಿಯೋವನ್ನು ಯಾರು? ಎಲ್ಲಿಂದ ಅಪ್‌ಲೋಡ್ ಮಾಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಸ್ಟಿಂಗ್ ಆಪರೇಷನ್ ಕುರಿತಂತೆ ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಸ್ಟಿಂಗ್ ಅಪರೇಷನ್ ಒಂದು ಸುಳ್ಳಿನ ಕೇಸು. ಸತ್ಯ ಹೊರಗಡೆ ಬರಲಿ ಎಂದು ನಾನೇ ದೂರು ಕೊಟ್ಟಿದ್ದೇನೆ. ಹೆಚ್ಚಿನ ಪ್ರಸಾರ ಬೇಡ ಎಂದು ಸಿವಿಲ್ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದೇನೆ. ತನಿಖೆ ಪಾರದರ್ಶಕವಾಗಿ ಆಗಲಿ ಎಂದು ಆಗ್ರಹಿಸಿದ್ದರು. ಸಿದ್ದರಾಮಯ್ಯ ಪುತ್ರ ಯತೀಂದ್ರ ಸಹ ಈ ಕುರಿತು ಮಾತನಾಡಿ, ಸ್ಟಿಂಗ್ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಕಂಪನ; ಬೆಂಗಳೂರು ಸಿಸಿಬಿ ಪೊಲೀಸರ ಎದುರು ಕಾಂಗ್ರೆಸ್ ಮಹಿಳಾ ನಾಯಕಿ ಶರಣು
ಪ್ರಕರಣದಲ್ಲಿ ಯಾರೇ ಇದ್ದರೂ ಅರೆಸ್ಟ್ ಮಾಡಲು ತಂದೆ ಹೇಳಿದ್ದಾರೆ. ನಮ್ಮ ಸರ್ಕಾರದ ತನಿಖೆ ಮೇಲೆ ನಂಬಿಕೆ ಇದೆ. ತನಿಖೆ ಸರಿಯಾಗಿ ನಡೆಯುತ್ತಿದೆ.ಸಿದ್ದರಾಮಯ್ಯರಿಗೆ ಬ್ಲ್ಯಾಕ್‌ಮೇಲ್ ಮಾಡುವ ಯತ್ನ ನಡೆದಿದೆ. ಸಿದ್ದರಾಮಯ್ಯ ಹೆಸರು ಕೆಡಿಸಲು ಸ್ಟಿಂಗ್ ವಿಚಾರ ಮುನ್ನಲೆಗೆ ತಂದಿದ್ದಾರೆ. ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಿ ಅವರ ಲೆಗಸಿ ಹಾಳು ಮಾಡಿ ಬ್ಲ್ಯಾಕ್‌ಮೇಲ್ ಮಾಡುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದರು.