Sugarcane Farmers Protest: ಪ್ರಸ್ತುತ ಎಫ್ಆರ್‌ಪಿ ದರದಂತೆ ರೈತರಿಂದ ಕಬ್ಬು ಖರೀದಿಸುತ್ತೇವೆ: ಸಿಎಂಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸ್ಪಷ್ಟನೆ
CM Siddaramaiah meeting with Sugar factory owners: ಸಕ್ಕರೆ ಕಾರ್ಖಾನೆ ನಡೆಸುವುದು ಬಹಳ ಕ್ಲಿಷ್ಟಕರವಾಗಿದೆ. ಸಕ್ಕರೆ, ಎಥೆನಾಲ್, ವಿದ್ಯುತ್ ಉತ್ಪಾದನೆ ಮಾಡಿದರೂ ನಾವು ಸಂಕಷ್ಟದಲ್ಲಿದ್ದೇವೆ. ಹೀಗಾಗಿ ಪ್ರಸ್ತುತ ರೈತರಿಗೆ ಎಫ್ಆರ್‌ಪಿ ಪ್ರಕಾರ ದರ ನೀಡಲಾಗುವುದು. ಹೆಚ್ಚುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ ಎಂದು ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಸಭೆ ನಡೆಸಿದರು. -
ಬೆಂಗಳೂರು, ನ.7: ಕಬ್ಬು ಬೆಳೆಗಾರರ ಸಮಸ್ಯೆ (Sugarcane Farmers Protest) ಕುರಿತಾಗಿ ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಶುಕ್ರವಾರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರೈತರ ಬೇಡಿಕೆ ಈಡೇರಿಸುವುದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿವೆ ಮತ್ತು ಕಾರ್ಖಾನೆಗಳ ಜವಾಬ್ದಾರಿಯೂ ಇದೆ. ನಾವು ರೈತರ ಪರವಾಗಿ ನಿಲ್ಲುತ್ತೇವೆ. ರೈತರ ಸಮಸ್ಯೆ ಬಗೆಹರಿಸಲು ನೀವೂ ಸಿದ್ಧರಿರಬೇಕು ಎಂದು ಹೇಳಿದ್ದಾರೆ.
ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್‌ಪಿ ನಿಗದಿಪಡಿಸಿದೆ. ಅದರಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್‌ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್‌ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.
ಈ ಸುದ್ದಿಯನ್ನೂ ಓದಿ | Pralhad Joshi: ರಾಜ್ಯ ಸರ್ಕಾರ ಒಂದು ಕ್ಷಣವೂ ತಡಮಾಡದೆ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಲಿ: ಪ್ರಲ್ಹಾದ್ ಜೋಶಿ ಆಗ್ರಹ
ಪ್ರಸ್ತುತ ಎಫ್ಆರ್‌ಪಿ ದರದಂತೆ ಖರೀದಿ
ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ಮುರುಗೇಶ್ ನಿರಾಣಿ ಮಾತನಾಡಿ, ಎಲ್ಲಾ ಸರ್ಕಾರಗಳಲ್ಲೂ ಕಬ್ಬು ಬೆಳೆಗಾರರ ಸಮಸ್ಯೆ ಮುಂದುವರಿಯುತ್ತಾ ಬಂದಿದೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದವನ್ನು ರಾಜ್ಯ ಸರ್ಕಾರ ನವೀಕರಣ ಮಾಡಿರುವುದಿಲ್ಲ. ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆಯವರಿಂದ ಖರೀದಿಸುವ ವಿದ್ಯುತ್ ಪ್ರತಿ ಯುನಿಟ್‌ಗೆ ರೂ. 6 ಪಾವತಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಒಪ್ಪಂದ ಮಾಡಬೇಕಿದೆ. ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್‌ಗೆ 60 ಪೈಸೆ ತೆರಿಗೆ ನಿಗದಿಪಡಿಸಿರುವುದನ್ನು ಕೈಬಿಡಬೇಕು. ಸಕ್ಕರೆ ಕಾರ್ಖಾನೆಗಳ ನಡುವಿನ ಅಂತರ ಕನಿಷ್ಠ 25 ಕಿ.ಮೀ. ನಿಗದಿಪಡಿಸಬೇಕು. ಏವಿಯೇಷನ್ ಇಂಧನಕ್ಕೆ ಎಥನಾಲ್ ಮಿಶ್ರಣ ಅನುಮತಿಯನ್ನು ಆದಷ್ಟು ಬೇಗನೆ ನೀಡುವಂತೆ ಪ್ರಧಾನಿ ಅವರಿಗೆ ಮನವಿ ಮಾಡಬೇಕು. ಪ್ರತಿ ಟನ್‌ಗೆ ಎಫ್‌ಆರ್‌ಪಿ 3,500 ರೂ. ನೀಡಲು ಸಾಧ್ಯವಿಲ್ಲ, ಪ್ರಸ್ತುತ ರೈತರಿಗೆ ಎಫ್ಆರ್‌ಪಿ ಪ್ರಕಾರ ದರ ನೀಡಲಾಗುವುದು. ಹೆಚ್ಚುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ ಎಂದರು.
ಎಥನಾಲ್ ಎಂಎಸ್ಪಿ ಹೆಚ್ಚಳ ಕುರಿತು ಕೇಂದ್ರಕ್ಕೆ ಮನವಿ ಮಾಡಿದರೂ ಇದುವರೆಗೆ ಹೆಚ್ಚಳ ಮಾಡಿಲ್ಲ. ಇದರಿಂದ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ. ಇದೇ ರೀತಿ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿರುವುದರಿಂದ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕವಾಗಿ ನಷ್ಟ ಉಂಟಾಗಿದೆ. ಇಡೀ ದೇಶಕ್ಕೆ ಕೇವಲ 10 ಲಕ್ಷ ಮೆ. ಟನ್ ಮಾತ್ರ ರಫ್ತಿಗೆ ಅನುಮತಿ ನೀಡಲಾಗಿದೆ. ಕಳೆದ ಆರು ವರ್ಷಗಳಿಂದ ಸಕ್ಕರೆ ದರವನ್ನು ಸಹ ಪರಿಷ್ಕರಿಸಿಲ್ಲ. ಆದರೆ ಕಬ್ಬಿನ ದರ ಪ್ರತಿ ವರ್ಷ ಹೆಚ್ಚುತ್ತಾ ಹೋಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಸಕ್ಕರೆ ಕಾರ್ಖಾನೆಗಳಿಗೆ ಈಗ ಎಫ್ಆರ್ಪಿ ಪ್ರಕಾರ ರೈತರಿಗೆ ಪಾವತಿ ಮಾಡಲು ಕಷ್ಟ ಪಡಬೇಕಾದ ಪರಿಸ್ಥಿತಿಯಿದೆ. ಆದರೆ ಈ ದರ ಕಾನೂನಾತ್ಮಕವಾಗಿ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಪಾವತಿಸುತ್ತಿವೆ ಎಂದು ಸಕ್ಕರೆ ಕಾರ್ಖಾನೆ ಮಾಲೀಕರ ಸಂಘದ ಅಧ್ಯಕ್ಷರು ತಿಳಿಸಿದರು.
ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಬೇಕು
ಕೇಂದ್ರ ಸರ್ಕಾರ FRP ದರಕ್ಕೆ ಪೂರಕವಾಗಿ MSP ದರ ಏರಿಸುತ್ತಿಲ್ಲ. 2019 ರಿಂದ ಕೇಂದ್ರ MSP ದರ ಏರಿಸಿಲ್ಲ. ಎಥೆನಾಲ್ ದರವನ್ನೂ ಏರಿಸಿಲ್ಲ. ನಮ್ಮ ಈ ಸಮಸ್ಯೆ ಬಗ್ಗೆಯೂ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಬೇಕು ಎಂದು ಕಾರ್ಖಾನೆ ಮಾಲೀಕರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು MSP ದರ ಹೆಚ್ಚಿಸುವಂತೆ ಬಹಳ ಹಿಂದೆಯೇ ಕೇಂದ್ರಕ್ಕೆ, ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರ MSP ಹೆಚ್ಚಿಸಿಲ್ಲ. ರಾಜ್ಯ ಪ್ರತಿನಿಧಿಸುವ ಕೇಂದ್ರ ಮಂತ್ರಿಗಳೂ ಕಬ್ಬು ಬೆಳೆಗಾರರಿಗೆ MSP ದರ ಹೆಚ್ಚಿಸುವುದಕ್ಕೆ ಸಹಕರಿಸಲಿಲ್ಲ, ಪ್ರಧಾನಿ ಅವರ ಜತೆ ಮಾತಾಡುತ್ತಿಲ್ಲ. ಏನು ಮಾಡೋದು? ಎಂದು ಹೇಳಿದ್ದಾರೆ.
ಸಕ್ಕರೆ ಕಾರ್ಖಾನೆ ನಡೆಸುವುದು ಕಷ್ಟವಾಗಿದೆ
ಸಕ್ಕರೆ ಕಾರ್ಖಾನೆ ನಡೆಸುವುದು ಬಹಳ ಕ್ಲಿಷ್ಟಕರವಾಗಿದೆ. ಸಕ್ಕರೆ, ಎಥೆನಾಲ್, ವಿದ್ಯುತ್ ಉತ್ಪಾದನೆ ಮಾಡಿದರೂ ನಾವು ಸಂಕಷ್ಟದಲ್ಲಿದ್ದೇವೆ. ಜೊತೆಗೆ ರೈತರಿಂದ ಕೆಟ್ಟ ಬೈಗುಳ ತಿನ್ನುತ್ತಿದ್ದೇವೆ. ನಾವು ಉದ್ಯೋಗ ಸೃಷ್ಟಿಸಿ ಗ್ರಾಮೀಣ ಆರ್ಥಿಕತೆಗೆ ಅಪಾರ ಕೊಡುಗೆ ನೀಡುತ್ತಿದ್ದೇವೆ. ಆದರೂ ಕೇಂದ್ರದ ನೀತಿಗಳಿಂದಲೂ ನಮಗೆ ನಷ್ಟ ಆಗುತ್ತಿದೆ. ರೈತರಿಂದಲೂ ಒತ್ತಡ ಇದೆ. ಹೀಗಾದಾಗ ನಾವು ಕಾರ್ಖಾನೆ ನಡೆಸುವುದೇ ಕಷ್ಟ ಆಗ್ತದೆ. ಬೇಕಿದ್ದರೆ ಸರ್ಕಾರವೇ ನಮ್ಮ ಕಾರ್ಖಾನೆಗಳನ್ನು ನಡೆಸಲಿ ಎಂದು ಕಾರ್ಖಾನೆ ಮಾಲೀಕರು ತಮ್ಮ ಸಂಕಷ್ಟ ಹೇಳಿಕೊಂಡರು.
ಈ ಸುದ್ದಿಯನ್ನೂ ಓದಿ | Sugarcane Farmers Protest: ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಸಕ್ಕರೆ ಕಾರ್ಖಾನೆ ನಡೆಸುವುದು ನೀವು ಹೇಳುವಷ್ಟೇ ಕಷ್ಟ ಆಗಿದ್ದರೆ ಒಂದು ಕಾರ್ಖಾನೆ ಇದ್ದವರು ಎರಡು, ಮೂರು ಕಾರ್ಖಾನೆ ಮಾಲೀಕರಾಗಿದ್ದು ಹೇಗೆ ಎನ್ನುವ ರೈತರ ಪ್ರಶ್ನೆಗೆ ಏನು ಉತ್ತರ ಹೇಳ್ತೀರಿ ಎಂದು ಪ್ರಶ್ನಿಸಿದರು.