Bengaluru Stampede: ಕಾಲ್ತುಳಿತ ಪ್ರಕರಣ; ಆರ್‌ಸಿಬಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಸಂಪುಟ ನಿರ್ಧಾರ
karnataka cabinet meeting: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು. ಹೀಗಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಆರ್‌ಸಿಬಿ, ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೂಡ ಸಚಿವ ಸಂಪುಟ ತೀರ್ಮಾನಿಸಿದೆ.
ಜೂನ್ 4ರಂದು ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಲಾಗಿತ್ತು. ಕುನ್ಹಾ ಅವರ ವರದಿಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿದೆ. ಚರ್ಚೆಯ ನಂತರ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಲ್ಲಿಸಿಕೆಯಾದ ವರದಿಯನ್ನು ಅಂಗೀಕರಿಸಲಾಗಿದೆ. ವರದಿಯಲ್ಲಿ ಉಲ್ಲೇಖಿಸಿರುವ ಖಾಸಗಿ ಸಂಸ್ಥೆಗಳ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕಿರುವ ಕ್ರಮಗಳನ್ನು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಚಿವ ಸಂಪುಟ ನಿರ್ಧರಿಸಿತು.
ಆರ್.ಸಿ.ಬಿ, ಡಿ.ಎನ್.ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಕೆ.ಎಸ್.ಸಿ.ಎ ಅಧ್ಯಕ್ಷ ರಘುರಾಮ್ ಭಟ್, ಕೆಎಸ್‌ಸಿಎ ಮಾಜಿ ಅಧ್ಯಕ್ಷ, ಎ. ಶಂಕರ್, ಕೆಎಸ್‌ಸಿಎ ಮಾಜಿ ಖಜಾಂಚಿ ಜಯರಾಮ್ ಇ.ಎಸ್, ರಾಜೇಶ್ ಮೆನನ್, ಉಪಾಧ್ಯಕ್ಷರು, ಆರ್.ಸಿ.ಬಿ.ಎಸ್.ಪಿ ಎಲ್, ಡಾ: ವೆಂಕಟವರ್ಧನ್, ಎಂ.ಡಿ. ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ ವರ್ಕ್ಸ್ ಇವರುಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ: ವರದಿಯ ಅಧ್ಯಯನಕ್ಕೆ ಸಚಿವ ಸಂಪುಟ ತೀರ್ಮಾನ
ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಸುಮಾರು 40 ಮಂದಿ ಗಾಯಗೊಂಡಿದ್ದರು. ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿಯನ್ನು ರಾಜ್ಯ ಸರಕಾರ ಇತ್ತೀಚೆಗೆ ಬಹಿರಂಗಪಡಿಸಿತ್ತು. ಅದರಲ್ಲಿ, ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ಹೇಳಲಾಗಿತ್ತು.
ಕ್ರೀಡಾಂಗಣದಲ್ಲಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಅಭಿಮಾನಿಗಳನ್ವು ಆಹ್ವಾನಿಸಲಾಗಿತ್ತು. ಆದರೆ ಇದಕ್ಕೆ ತಂಡದ ಆಡಳಿತ ಮಂಡಳಿ ರಾಜ್ಯ ಸರ್ಕಾರದ ಅಥವಾ ಪೊಲೀಸ್ ಇಲಾಖೆಯ ಅನುಮತಿ ಪಡೆದಿರಲಿಲ್ಲ. ದಿಢೀರ್ ಕಾರ್ಯಕ್ರಮ ಘೋಷಣೆ ಮಾಡಿದ್ದರಿಂದ ಹಠಾತ್ತನೆ ಜಮಾಯಿಸಿದ ಜನಸಮೂಹದಿಂದ ನೂಕುನುಗ್ಗಲು ಉಂಟಾಯಿತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.
ಈ ಸುದ್ದಿಯನ್ನೂ ಓದಿ | CM Siddaramaiah: ಮಹದಾಯಿ ಯೋಜನೆಗೆ ಅನುಮತಿ ನೀಡದೆ ಕನ್ನಡಿಗರಿಗೆ ದ್ರೋಹ ಬಗೆದ ಕೇಂದ್ರ: ಸಿಎಂ ಸಿದ್ದರಾಮಯ್ಯ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಏಕಪಕ್ಷೀಯವಾಗಿ ಮತ್ತು ನಗರ ಪೊಲೀಸರ ಜೊತೆ ಸಮಾಲೋಚಿಸದೆ ಜನರನ್ನು ವಿಜಯೋತ್ಸವ ಮೆರವಣಿಗೆಗೆ ಆಹ್ವಾನಿಸಿತ್ತು. ಆರ್‌ಸಿಬಿ ಐಪಿಎಲ್ ಟ್ರೋಫಿ ಗೆದ್ದ ದಿನವಾದ ಜೂನ್ 3 ರಂದು ಆರ್‌ಸಿಬಿ ಆಡಳಿತ ಮಂಡಳಿಯು ಪೊಲೀಸರನ್ನು ಸಂಪರ್ಕಿಸಿದೆ ಮತ್ತು ಸಂಭಾವ್ಯ ವಿಜಯೋತ್ಸವ ಮೆರವಣಿಗೆಯ ಬಗ್ಗೆ ಪೊಲೀಸರಿಗೆ ತಿಳಿಸಿದೆ. ಇದು ಕೇವಲ ಸೂಚನೆಯ ಸ್ವರೂಪದ್ದಾಗಿತ್ತು. ಕಾನೂನಿನಡಿಯಲ್ಲಿ ಅಗತ್ಯವಿರುವಂತೆ ಅನುಮತಿಗಾಗಿ ವಿನಂತಿ ಪಡೆದಿರಲಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿತ್ತು.