LPG Cylinder Shortage: ಮುಂದಿನ ವಾರದೊಳಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸುಗಮ: ಸಚಿವ ಕೆ.ಎಚ್.ಮುನಿಯಪ್ಪ
ರಾಜ್ಯದಲ್ಲಿ ಅತ್ಯವಶ್ಯಕ ಸೇವೆಗಳಾದ ಆಸ್ಪತ್ರೆಗಳು, ಶಾಲೆ, ಹಾಸ್ಟೆಲ್‌ಗಳು ಹಾಗೂ ಇನ್ನಿತರ ಬಳಕೆದಾರರಿಗೆ ಯಾವುದೇ ರೀತಿಯ ಸರಬರಾಜು ಸಮಸ್ಯೆ ಇಲ್ಲ. ಅವರಿಗೆ ಅಗತ್ಯವಿರುವಷ್ಟು ಸಿಲಿಂಡರ್ ಒದಗಿಸಲಾಗುತ್ತಿದೆ. ಮುಂದಿನ ಒಂದು ವಾರದೊಳಗೆ ಹೋಟೆಲ್‌ಗಳಿಗೆ ಸಹ ಅಡಿಗೆ ಅನಿಲ ಪೂರೈಕೆ ಸುಗಮವಾಗಿ ಮಾಡಲಾಗುತ್ತದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಸಚಿವ ಕೆ.ಎಚ್.ಮುನಿಯಪ್ಪ ಸುದ್ದಿಗೋಷ್ಠಿ. -
ಬೆಂಗಳೂರು: ರಾಜ್ಯದಲ್ಲಿ ಸಿಲಿಂಡರ್‌ಗಳ (LPG Cylinder Shortage) ಯಾವುದೇ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಆದರೆ ಕೆಲವೆಡೆ ಜನರು ಆತಂಕಗೊಂಡು ಅಗತ್ಯಕ್ಕಿಂತ ಹೆಚ್ಚು ಸಿಲಿಂಡರ್ ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (KH Muniyappa) ತಿಳಿಸಿದ್ದಾರೆ.
ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಸರಬರಾಜು ಕುರಿತು ಸ್ಪಷ್ಟನೆ ನೀಡಿರುವ ಅವರು, ಪ್ರಸ್ತುತ ರಾಜ್ಯದಲ್ಲಿ ಪ್ರತಿದಿನ ಸುಮಾರು 850 ಮೆಟ್ರಿಕ್ ಟನ್ ಎಲ್‌ಪಿಜಿ ಗ್ಯಾಸ್ ಪೂರೈಕೆ ಆಗುತ್ತಿದ್ದು, ಬಳಕೆಯ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಗ್ರಾಹಕರು ಮಿತವ್ಯಯವಾಗಿ ಅನಿಲವನ್ನು ಬಳಸುವಂತೆ ಮನವಿ ಮಾಡಲಾಗಿದೆ. ಮುಂದಿನ ಒಂದು ವಾರದೊಳಗೆ ಹೋಟೆಲ್‌ಗಳಿಗೆ ಸಹ ಅಡಿಗೆ ಅನಿಲ ಪೂರೈಕೆ ಸುಗಮವಾಗಿ ಮಾಡಲಾಗುತ್ತದೆ.
ರಾಜ್ಯದಲ್ಲಿ ಎಲ್‌ಪಿಜಿ ವಿತರಣೆ ಪ್ರತಿ ರಾಜ್ಯದ ಬಳಕೆ (Consumption) ಆಧಾರದ ಮೇಲೆ ಕೇಂದ್ರ ಸರ್ಕಾರದಿಂದ ನಿರ್ಧರಿಸಲಾಗುತ್ತದೆ. ಸಿಲಿಂಡರ್ ಸರಬರಾಜು ಕ್ರಮಬದ್ಧವಾಗಿ ನಡೆಯುತ್ತಿದ್ದು, ಇದರಲ್ಲಿ ಯಾವುದೇ ರೀತಿಯ ರಾಜಕೀಯ ವಿಷಯ ಇಲ್ಲ. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಹಾಗೂ ಸಂಬಂಧಿತ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿದ್ದಲ್ಲಿ ರಾಜ್ಯದ ಅಗತ್ಯವನ್ನು ತಿಳಿಸಿ ಪತ್ರಗಳ ಮೂಲಕ ಗಮನಕ್ಕೆ ತರುತ್ತಿದ್ದಾರೆ.
ಅತ್ಯವಶ್ಯಕ ಸೇವೆಗಳಾದ ಆಸ್ಪತ್ರೆಗಳು, ಶಾಲೆ, ಹಾಸ್ಟೆಲ್ ಹಾಗೂ ಇನ್ನಿತರ ಬಳಕೆದಾರರಿಗೆ ಯಾವುದೇ ರೀತಿಯ ಸರಬರಾಜು ಸಮಸ್ಯೆ ಇಲ್ಲ. ಅವರಿಗೆ ಅಗತ್ಯವಿರುವಷ್ಟು ಸಿಲಿಂಡರ್ ಒದಗಿಸಲಾಗುತ್ತಿದೆ. ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ 25–30 ದಿನಗಳಿಗೆ ಒಂದು ಸಿಲಿಂಡರ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 45 ದಿನಗಳಿಗೆ ಒಂದು ಸಿಲಿಂಡರ್ ಬಳಕೆಯಾಗುತ್ತದೆ. ಇದಕ್ಕೆ ಅನುಗುಣವಾಗಿ ಸರಬರಾಜು ನಡೆಯುತ್ತಿದೆ.
ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ; ಸಬ್ಸಿಡಿ ಪಡೆಯಲು ಇ-ಕೆವೈಸಿ ಕಡ್ಡಾಯ?
ಜನರು ಪ್ಯಾನಿಕ್ ಆಗಬಾರದು, ಅಗತ್ಯಕ್ಕಿಂತ ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು ಹಾಗೂ ಸ್ಟಾಕ್ ಇಟ್ಟುಕೊಳ್ಳಬಾರದು. ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದರೆ ತಕ್ಷಣ ಸಂಬಂಧಿತ ಕಂಪನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.