Karnataka Bypoll Results: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಾಳೆ; ಯಾರಿಗೆ ಒಲಿಯಲಿದೆ ಗೆಲುವು?
ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಉಪಚುನಾವಣೆಯ ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಡಿದೆ. ಬೈ ಎಲೆಕ್ಷನ್‌ನಲ್ಲಿ ಯಾರಿಗೆ ಗೆಲುವು ಒಲಿಯಲಿದೆ ಎಂಬ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಮೂಡಿದೆ.
ಸಾಂದರ್ಭಿಕ ಚಿತ್ರ -
ಬಾಗಲಕೋಟೆ/ದಾವಣಗೆರೆ: ರಾಜ್ಯದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಸೋಮವಾರ (ಮೇ 4) ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ತೀರ್ಮಾನವಾಗಲಿದೆ. ಮತ ಎಣಿಕೆ ಕೇಂದ್ರಗಳ ಬಳಿ 144 ಸೆಕ್ಷನ್ ವಿಧಿಸಲಾಗಿದ್ದು, ಅಧಿಕೃತ ಅಭ್ಯರ್ಥಿಗಳು ಹಾಗೂ ಸಂಬಂಧಪಟ್ಟ ರಾಜಕೀಯ ಪಕ್ಷಗಳ ಏಜೆಂಟರನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶವಿಲ್ಲದಂತೆ ನಿರ್ಬಂಧ ವಿಧಿಸಲಾಗಿದೆ.
ಯಾರ ಪಾಲಾಗಲಿದೆ ಬಾಗಲಕೋಟೆ ಗದ್ದುಗೆ?
ಶಾಸಕರಾಗಿದ್ದ ಎಚ್.ವೈ. ಮೇಟಿ ಅವರ ನಿಧನದಿಂದಾಗಿ ಬಾಗಲಕೋಟೆ ಕ್ಷೇತ್ರ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರವು ತೆರವಾಗಿತ್ತು. ಏಪ್ರಿಲ್ 9ರಂದು ಉಭಯ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು.
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬೆಳಗ್ಗೆ 8ಕ್ಕೆ ಎಣಿಕೆ ಕಾರ್ಯ ಆರಂಭವಾಗಲಿದೆ. ಮತ ಎಣಿಕೆಗೆ 14 ಟೇಬಲ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. 23 ಸುತ್ತುಗಳಲ್ಲಿ ಎಣಿಕೆ ನಡೆಯಲಿದೆ. 80 ವರ್ಷ ಮೇಲ್ಪಟ್ಟ ಹಿರಿಯ ಮತದಾರರು, ಅಂಚೆ ಮತ ಪತ್ರಗಳ ಎಣಿಕೆಗೆ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಲಾಗಿದೆ.
ಕಾಂಗ್ರೆಸ್‌ನಿಂದ ಉಮೇಶ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ಸ್ಪರ್ಧಿಸಿದ್ದರು. ಉಳಿದಂತೆ ಏಳು ಅಭ್ಯರ್ಥಿಗಳು ಕಣದಲ್ಲಿದ್ದರು. ಉಪ ಚುನಾವಣೆಯಲ್ಲಿ ಶೇ. 68.62ರಷ್ಟು ಮತದಾನವಾಗಿದ್ದು, 2,59,797 ಮತದಾರರಲ್ಲಿ 1,78,273 ಮಂದಿ ಹಕ್ಕು ಚಲಾಯಿಸಿದ್ದರು.
ದಾವಣಗೆರೆ ದಕ್ಷಿಣದಲ್ಲಿ ಗೆಲುವು ಯಾರಿಗೆ?
ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯು ನಗರದ ಡಿಆರ್‌ಆರ್ ಕಾಲೇಜಿನಲ್ಲಿ ನಡೆಯಲಿದೆ. ಒಟ್ಟು 14 ಟೇಬಲ್‌ಗಳನ್ನು ಎಣಿಕೆ ಕಾರ್ಯಕ್ಕಾಗಿ ವ್ಯವಸ್ಥೆ ಮಾಡಿದ್ದು, 21 ಸುತ್ತುಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಸಿಬ್ಬಂದಿ, ಅಭ್ಯರ್ಥಿ ಹಾಗೂ ಏಜೆಂಟರಿಗೆ ಇದೇ ಮೊದಲ ಬಾರಿಗೆ 'ಕ್ಯೂಆರ್ ಕೋಡ್' ಆಧಾರಿತ ಗುರುತಿನ ಚೀಟಿಗಳನ್ನು ನೀಡಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೂ ಬಿಜೆಪಿ ಉಮೇದುವಾರ ಟಿ. ಶ್ರೀನಿವಾಸ ದಾಸಕರಿಯಪ್ಪ ಸೇರಿ 25 ಹುರಿಯಾಳುಗಳ ಕಣದಲ್ಲಿದ್ದಾರೆ. ಕ್ಷೇತ್ರದ ಒಟ್ಟು 2,31,072 ಮತದಾರರಲ್ಲಿ 1,58,131 ಮತದಾರರು ಹಕ್ಕು ಚಲಾವಣೆ ಮಾಡಿದ್ದು, ಶೇ 68.43ರಷ್ಟು ಮತದಾನವಾಗಿದೆ.
ಪಶ್ಚಿಮ ಬಂಗಾಳ ಚುನಾವಣೆ: ಟಿಎಂಸಿಗೆ ಅಧಿಕಾರ ಉಳಿಸಿಕೊಳ್ಳುವ ಚಿಂತೆ; ಬಿಜೆಪಿಗೆ ಐತಿಹಾಸಿಕ ಗೆಲುವಿನ ನಿರೀಕ್ಷೆ
ಎರಡೂ ಕ್ಷೇತ್ರಗಳಲ್ಲಿ ಉಭಯ ಪಕ್ಷಗಳ ಕೇಂದ್ರ ಹಾಗೂ ರಾಜ್ಯದ ಘಟಾನುಘಟಿ ನಾಯಕರು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ನಾಳಿನ ಫಲಿತಾಂಶದಲ್ಲಿ ಯಾರಿಗೆ ವಿಜಯಲಕ್ಷ್ಮೀ ಒಲಿಯಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.