Chikkaballapur News: ಜಿಲ್ಲಾಧಿಕಾರಿ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರ ದಿಡೀರ್ ಪ್ರತಿಭಟನೆ; ತಪ್ಪಿತಸ್ಥರ ಬಂಧನಕ್ಕೆ ಆಗ್ರಹ
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಅವಮಾನಿಸಿದ್ದು, ಜನಪ್ರತಿನಿಧಿಗೆ ಸಲ್ಲಬೇಕಾದ ಗೌರವ ನೀಡದೆ ದುರ್ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು. ಘಟನೆಗೆ ಕಾರಣರಾದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು
-
ಚಿಕ್ಕಬಳ್ಳಾಪುರ: ಜಿಲ್ಲಾಡಳಿತದ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ (MLA Pradeep Eshwar)ಅವರಿಗೆ ಉದ್ದೇಶ ಪೂರ್ವಕವಾಗಿ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿ ಜಿ. ಪ್ರಭು ಅವರ ನಿವಾಸದ ಎದುರು ದಿಢೀರ್ ಪ್ರತಿಭಟನೆ ನಡೆಸಿದರು.
ನಗರದ ವಾಪಸಂದ್ರದಲ್ಲಿರುವ ಜಿಲ್ಲಾಧಿಕಾರಿಗಳ ನಿವಾಸದ ಎದುರು ಶನಿವಾರ ಸಂಜೆ ಸುಮಾರು 4.30ಕ್ಕೆ ಜಮಾಯಿಸಿದ ಯುವ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಮಚಂದ್ರಪ್ಪ, ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಅವಮಾನಿಸಿದ್ದು, ಜನಪ್ರತಿನಿಧಿಗೆ ಸಲ್ಲಬೇಕಾದ ಗೌರವ ನೀಡದೆ ದುರ್ವರ್ತನೆ ತೋರಿದ್ದಾರೆ ಎಂದು ಆರೋಪಿಸಿದರು. ಘಟನೆಗೆ ಕಾರಣರಾದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಮಂಡಿಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್ ಮಾತನಾಡಿ, "ಸರ್ಕಾರಿ ಕಾರ್ಯಕ್ರಮದಲ್ಲೇ ಶಾಸಕರಿಗೆ ರಕ್ಷಣೆ ಇಲ್ಲದಿದ್ದರೆ ಸಾಮಾನ್ಯ ಜನರ ಪರಿಸ್ಥಿತಿ ಏನಾಗಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ಶಾಸಕರನ್ನು ಅವಮಾನಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡಾಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದಿಲ್ಲ" ಎಂದು ಹೇಳಿದರು.
ದಸಂಸ ಮುಖಂಡ ವೆಂಕಟ್ ಮಾತನಾಡಿ, "ಚಿಕ್ಕಬಳ್ಳಾಪುರ ಕ್ಷೇತ್ರದ ಜನಪ್ರಿಯ ಶಾಸಕ ಪ್ರದೀಪ್ ಈಶ್ವರ್ ಅವರು ಕ್ಷೇತ್ರದಲ್ಲಿ ಶಾಂತಿ ಮತ್ತು ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಅವರ ಜನಪ್ರಿಯತೆ ಯಿಂದ ಆತಂಕಗೊಂಡ ಕೆಲ ರಾಜಕೀಯ ಶಕ್ತಿಗಳು ದುರುದ್ದೇಶದಿಂದ ಈ ರೀತಿಯ ಗಲಾಟೆ ಸೃಷ್ಟಿಸಲು ಮುಂದಾಗಿವೆ" ಎಂದು ಆರೋಪಿಸಿದರು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಬಂಧಿಸಿ ಜನರಲ್ಲಿ ವಿಶ್ವಾಸ ಮೂಡಿಸ ಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಘಟನೆ ಕುರಿತು ಮಾಹಿತಿ ಪಡೆದಿರುವುದಾಗಿ ತಿಳಿಸಿ, "ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾಧಿಕಾರಿಗಳ ನಿವಾಸದ ಎದುರು ಪ್ರತಿಭಟನೆ ನಡೆಸುವುದು ಸೂಕ್ತವಲ್ಲ" ಎಂದು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿಕೊಟ್ಟರು. ಬಳಿಕ ಪ್ರತಿಭಟನೆಯನ್ನು ಹಿಂತೆಗೆದು ಕೊಳ್ಳಲಾಯಿತು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ರೆಡ್ಡಿ, ಮಂಡಿಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್, ಹಿರಿಯ ಮುಖಂಡರಾದ ರಾಮಚಂದ್ರಪ್ಪ, ನಾಯನಹಳ್ಳಿ ನಾರಾಯಣಸ್ವಾಮಿ, ಮಂಗಳ ಪ್ರಕಾಶ್, ನಾರಾಯಣಮ್ಮ, ಚೇತನ್ ಕುಮಾರ್, ನಾಗೇಶ್ ರೆಡ್ಡಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.