Chikkaballapur Accident: ಚಿಕ್ಕಬಳ್ಳಾಪುರದ ಬಳಿ ಭೀಕರ ಅಪಘಾತ; ಬೊಲೆರೊಗೆ ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ!
ಬೆಂಗಳೂರು ಕಡೆಯಿಂದ ಚಿಕ್ಕಬಳ್ಳಾಪುರದತ್ತ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ರಸ್ತೆ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ನಂದಿ ಗಿರಿಧಾಮ ಪೊಲೀಸ್ ಠಾಣೆ ಎದುರು ಅಪಘಾತ ನಡೆದಿದೆ.
-
ಚಿಕ್ಕಬಳ್ಳಾಪುರ: ಕಾರು ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ (Chikkaballapur Accident) ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ನಂದಿ ಗಿರಿಧಾಮ ಪೊಲೀಸ್ ಠಾಣೆ ಎದುರು ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು ಕಡೆಯಿಂದ ಚಿಕ್ಕಬಳ್ಳಾಪುರದತ್ತ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಜಗದೀಶ್ ಹಾಗೂ ವೈಷ್ಣವ್ ಎಂಬುವವರ ಗುರುತು ಪತ್ತೆಯಾಗಿದೆ. ಇವರು ಬೆಂಗಳೂರಿನ ಯಲಹಂಕ ಮೂಲದವರು ಎಂದು ತಿಳಿದುಬಂದಿದೆ.
ಇನ್ನು ಅಪಘಾತದಲ್ಲಿ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಬೊಲೆರೊ ವಾಹನದಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.