ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ನ.12ರಂದು ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಬರಪೀಡಿತ ಪ್ರದೇಶಗಳೆಂದು ಘೋಷಣೆಯಾಗಿರುವ ಅವಳಿ ಜಿಲ್ಲೆಗಳಿಗೆ ಆಂಧ್ರಪ್ರದೇಶದ ಗಡಿ ಭಾಗಕ್ಕೆ ಬಂದಿರುವ ಕೃಷ್ಣಾ ನದಿ ನೀರನ್ನು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೆ.ಸಿ. ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸಬೇಕು. ರೈತರ ಸಾಲ ಮನ್ನಾ ಮಾಡಿ ಅವರನ್ನು ಸಾಲಮುಕ್ತರನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿದರು.

ನ.12ರಂದು ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

-

Profile
Ashok Nayak Nov 7, 2026 12:12 AM

ಚಿಕ್ಕಬಳ್ಳಾಪುರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಕೃಷ್ಣಾ ನದಿ(Krishna River) ನೀರನ್ನು ಜಿಲ್ಲೆಗಳಿಗೆ ಹರಿಸುವುದು, ಕೆ.ಸಿ. ವ್ಯಾಲಿ(K C Valley) ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ (ಕರ್ನಾಟಕ ಪ್ರದೇಶ) ವತಿಯಿಂದ ನ.12ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಾಗೂ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಕಾರ್ಯಕಾರಿಣಿ ಸದಸ್ಯ ರಾಮಾಂಜಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಶಾಶ್ವತ ನೀರಾವರಿ ಯೋಜನೆ ರೂಪಿಸುವಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.

ಬರಪೀಡಿತ ಪ್ರದೇಶಗಳೆಂದು ಘೋಷಣೆಯಾಗಿರುವ ಅವಳಿ ಜಿಲ್ಲೆಗಳಿಗೆ ಆಂಧ್ರಪ್ರದೇಶದ ಗಡಿ ಭಾಗಕ್ಕೆ ಬಂದಿರುವ ಕೃಷ್ಣಾ ನದಿ ನೀರನ್ನು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೆ.ಸಿ. ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸಬೇಕು. ರೈತರ ಸಾಲ ಮನ್ನಾ ಮಾಡಿ ಅವರನ್ನು ಸಾಲಮುಕ್ತರನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:Chinthamani News: ಧರ್ಮ, ಜಾತಿ ಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಪಾಲ್ಗೊಳ್ಳುವುದು ಮಾದರಿ: ವೇಣುಗೋಪಾಲ್

ಕೃಷಿ ವೆಚ್ಚ ಹೆಚ್ಚಾಗುತ್ತಿರುವುದರ ಜತೆಗೆ ಎಪಿಎಂಸಿ ಮಾರುಕಟ್ಟೆಗಳಲ್ಲಿ ದಲ್ಲಾಳಿಗಳ ಹಾವಳಿ ಯಿಂದ ರೈತರಿಗೆ ಅನ್ಯಾಯವಾಗುತ್ತಿದೆ. ದಲ್ಲಾಳಿಗಳ ಹಾವಳಿ ನಿಯಂತ್ರಿಸಿ ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ದೊರಕಿಸಬೇಕು. ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಸ್ಥಳೀಯ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಸಂಘದ ಯುವ ಮುಖಂಡ ಮುರಳಿ ಮಾತನಾಡಿ, ಬರಪೀಡಿತ ಪ್ರದೇಶಗಳ ರೈತರಿಗೆ ಈ ಹಿಂದೆ ಘೋಷಿಸಿದ್ದ 2,500 ರೂ. ಪರಿಹಾರವನ್ನೇ ಸರ್ಕಾರ ಸಮರ್ಪಕವಾಗಿ ವಿತರಿಸಿಲ್ಲ. ಇದೀಗ 5,000 ರೂ. ಪರಿಹಾರ ಘೋಷಿಸಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು. ಮೊದಲು ಹಿಂದಿನ ಭರವಸೆ ಯಂತೆ ಪರಿಹಾರ ವಿತರಿಸಬೇಕು. ರೈತರ ಪರವಾಗಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇದೇ ಧೋರಣೆ ಮುಂದುವರಿದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸುವುದು, ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಯುವುದು, ಹಾಲು ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನ.12ರಂದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ವೆಂಕಟರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್, ರೈತ ಮುಖಂಡರಾದ ಗೋವಿಂದ್ ರೆಡ್ಡಿ, ಅಶ್ವತ್ಥಪ್ಪ, ಮುನಿಶಾಮಿ ರೆಡ್ಡಿ ಹಾಗೂ ಮುನಿಕೃಷ್ಣಪ್ಪ ಉಪಸ್ಥಿತರಿದ್ದರು.