ಕ್ಷೇತ್ರದ ಆರೋಗ್ಯ, ಶಿಕ್ಷಣ, ರಸ್ತೆ ಸುರಕ್ಷತೆ, ಆಡಳಿತ, ಬರ ಪರಿಹಾರ ಸೇರಿ ಅಭಿವೃದ್ಧಿ ಅಜೆಂಡಾ ಮುಂದಿಟ್ಟ ಶಾಸಕ; ಉಸ್ತುವಾರಿ ಸಚಿವರಿಂದ ಬೇಡಿಕೆ ಈಡೇರಿಕೆಯ ಭರವಸೆ
ನಗರ ಹೊರವಲಯದ ಜಿಲ್ಲಾಡಳಿತ ಭವನದ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಸಭೆ ಯಲ್ಲಿ ಮಾತನಾಡಿದ ಅವರು, ಹಿಂದಿನ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಕೇಂದ್ರ ಸ್ಥಾಪನೆಗೆ ಸಿದ್ಧತೆ ನಡೆಸಲಾಗಿದ್ದು, ಹೊಸ ಕಟ್ಟಡವೂ ಅಂತಿಮ ಹಂತದಲ್ಲಿದೆ. ಹೀಗಾಗಿ ಯಾವುದೇ ವಿಳಂಬ ಮಾಡದೆ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೇವೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
-
ಚಿಕ್ಕಬಳ್ಳಾಪುರ: ನೂತನ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಎಸ್. ಸುರೇಶ್(Byrati S Suresh) ಅಧ್ಯಕ್ಷತೆಯಲ್ಲಿ ನಡೆದ ಮೊದಲ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ಕೆಡಿಪಿ) ಸಭೆಯಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಪ್ರಬಲವಾಗಿ ಪ್ರಸ್ತಾಪಿಸುವ ಮೂಲಕ ಸಭೆಯ ಕೇಂದ್ರಬಿಂದುವಾದರು.
ಆರೋಗ್ಯ, ಶಿಕ್ಷಣ, ರಸ್ತೆ ಸುರಕ್ಷತೆ, ಆಡಳಿತಾತ್ಮಕ ಮೂಲಸೌಕರ್ಯ ಹಾಗೂ ಬರ ಪರಿಹಾರ ಸೇರಿ ದಂತೆ ಜನಜೀವನಕ್ಕೆ ನೇರವಾಗಿ ಸಂಬಂಧಿಸಿದ ಹಲವು ಬೇಡಿಕೆಗಳನ್ನು ಮುಂದಿಟ್ಟು ಸರ್ಕಾರದ ತಕ್ಷಣದ ಗಮನ ಸೆಳೆದರು.
ನಗರ ಹೊರವಲಯದ ಜಿಲ್ಲಾಡಳಿತ ಭವನದ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್(Dr M C Sudhakar) ಅವರ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಕೇಂದ್ರ ಸ್ಥಾಪನೆಗೆ ಸಿದ್ಧತೆ ನಡೆಸಲಾಗಿದ್ದು, ಹೊಸ ಕಟ್ಟಡವೂ ಅಂತಿಮ ಹಂತದಲ್ಲಿದೆ. ಹೀಗಾಗಿ ಯಾವುದೇ ವಿಳಂಬ ಮಾಡದೆ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೇವೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಇದನ್ನೂ ಓದಿ: MLA Pradeep Eshwar: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಪ್ರಕರಣ ದಾಖಲಿಸಿ; ಇಲ್ಲದಿದ್ದರೆ ಉಗ್ರ ಪ್ರತಿಭಟನೆ: ಮಂಜುನಾಥರೆಡ್ಡಿ
ಮಂಚೇನಹಳ್ಳಿ ತಾಲೂಕು ಕೇಂದ್ರದಲ್ಲಿ ನಿರ್ಮಾಣ ಹಂತದಲ್ಲಿರುವ ಬಸ್ ನಿಲ್ದಾಣ ಹಾಗೂ ತಾಲೂಕು ಆಡಳಿತ ಸೌಧ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಗುತ್ತಿಗೆದಾರರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿ ಕಾಮಗಾರಿಯ ವೇಗ ಹೆಚ್ಚಿಸುವುದರ ಜೊತೆಗೆ ಅಗತ್ಯ ಹೆಚ್ಚುವರಿ ಅನು ದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ಬಸ್ ನಿಲ್ದಾಣಕ್ಕೆ ಕಾಲಜ್ಞಾನಿ ಶ್ರೀ ಕೈವಾರ ಯೋಗಿ ನಾರಾಯಣ ಯತೀಂದ್ರ (ತಾತಯ್ಯ) ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಬೈರತಿ ಎಸ್. ಸುರೇಶ್, ಜಿಲ್ಲೆಯಿಂದ ಅಧಿಕೃತ ಶಿಫಾರಸು ಕಳುಹಿಸಿ ದರೆ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ಖಾಯಂ ಸಿಬ್ಬಂದಿ ಕೊರತೆ ಯಿಂದ ಗ್ರಾಮೀಣ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ವೈದ್ಯರ ಕೊರತೆ ಯಿಂದ ಮಗುವೊಂದು ಪ್ರಾಣ ಕಳೆದುಕೊಂಡ ಘಟನೆ ಉಲ್ಲೇಖಿಸಿದ ಶಾಸಕ, ಗ್ರಾಮೀಣ ಆರೋಗ್ಯ ಸೇವೆ ಬಲಪಡಿಸುವಂತೆ ಆಗ್ರಹಿಸಿದರು.
ಈ ವೇಳೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕುಮಾರ್, ಜಿಲ್ಲೆಯ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಯಂ ವೈದ್ಯರು ಹಾಗೂ ಸಿಬ್ಬಂದಿಯ ಕೊರತೆ ಇರುವುದನ್ನು ಸಭೆಯ ಗಮನಕ್ಕೆ ತಂದರು. ಖಾಯಂ ನೇಮಕಾತಿ ಆಗುವವರೆಗೆ ಲಭ್ಯವಿರುವ ಸಿಬ್ಬಂದಿಯಿಂದಲೇ ಸೇವೆ ಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ ಜಿಲ್ಲಾ ಡಳಿತವನ್ನು ಅಭಿನಂದಿಸಿದ ಶಾಸಕ, ಇದೇ ಮಾದರಿಯಲ್ಲಿ ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಗಳನ್ನೂ ಪೂರ್ವಸಿದ್ಧತೆಯಿಂದ ಮುಖ್ಯ ಪರೀಕ್ಷೆಯವರೆಗೆ ವ್ಯವಸ್ಥಿತವಾಗಿ ನಡೆಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉತ್ತಮ ವಾತಾವರಣ ಕಲ್ಪಿಸಬೇಕು ಎಂದು ಸಲಹೆ ನೀಡಿದರು.
ನಂದಿ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆಯನ್ನು ಶೀಘ್ರ ಆರಂಭಿಸು ಸಂಬಂಧ ಈಗಾಗಲೇ ಸಚಿವ ಸಂಪುಟದ ಅನುಮೋಧನೆ ದೊರೆತಿದೆ.ಕೂಡಲೇ ಇಲ್ಲಿ ಆಸ್ಪತ್ರೆ ಪ್ರಾರಂಭಸಬೇಕು ಎಂದು ಮನವಿ ಮಾಡಿದರು.
ನಂದಿ ಮೆಡಿಕಲ್ ಕಾಲೇಜು ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಸುರಕ್ಷಿತ ಸಂಚಾರಕ್ಕಾಗಿ ಸ್ಕೈವಾಕ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ತಾಲೂಕು ಕಚೇರಿ ಆವರಣದಲ್ಲಿರುವ ಜಿಲ್ಲಾ ಉಪವಿಗಾಧಿಕಾರಿಗಳ ಕಚೇರಿ ಅತ್ಯಂತ ಇಕ್ಕಟ್ಟಾ ಗಿದ್ದು, ಹೊಸ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ಹಾಗೂ ಅಗತ್ಯ ಅನುದಾನ ಒದಗಿಸಬೇಕು ಎಂದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಬರ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರ ಗಮನ ಸೆಳೆದರು.
ಕೆಡಿಪಿ ಸಭೆಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಮಂಡಿಸಿದ ಬಹುತೇಕ ಎಲ್ಲ ಬೇಡಿಕೆಗಳಿಗೆ ನೂತನ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಎಸ್. ಸುರೇಶ್ ಸಕಾರಾತ್ಮಕ ಸ್ಪಂದನೆ ವ್ಯಕ್ತಪಡಿಸಿ, ಸಂಬಂಧಿತ ಇಲಾಖೆಗಳ ಮೂಲಕ ಹಂತ ಹಂತವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಭಿವೃದ್ಧಿ ವಿಷಯಗಳ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಸಮಗ್ರವಾಗಿ ಮಂಡಿಸಿದ ಬೇಡಿಕೆಗಳು ಸಭೆಯಲ್ಲಿ ವಿಶೇಷ ಗಮನ ಸೆಳೆದವು.