ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapura Accident: ಕಾರು, ಎಲೆಕ್ಟ್ರಿಕ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ – ಬೆಂಗಳೂರು ರಸ್ತೆಯಲ್ಲಿ ಭೀಕರ ಅಪಘಾತ ನಡೆದಿದೆ. ಮದುವೆಯಾಗಿ ಕೆಲವೇ ತಿಂಗಳು ಕಳೆಯುವಷ್ಟರಲ್ಲಿ ನವದಂಪತಿ ಭೀಕರ ಅಪಘಾತಕ್ಕೆ ಬಲಿಯಾಗಿದ್ದು, ಎರಡು ಕುಟುಂಬಗಳಲ್ಲಿ ಶೋಕ ಮಡುಗಟ್ಟಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು, ಎಲೆಕ್ಟ್ರಿಕ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ಸಾವು

-

Prabhakara R
Prabhakara R Oct 26, 2026 3:36 PM

ಚಿಕ್ಕಬಳ್ಳಾಪುರ: ಇಕೋ ಕಾರು ಹಾಗೂ ಎಲೆಕ್ಟ್ರಿಕ್ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura Accident) ಜಿಲ್ಲೆಯ ಚಿಂತಾಮಣಿ – ಬೆಂಗಳೂರು ರಸ್ತೆಯಲ್ಲಿ ನಡೆದಿದೆ. ಮೃತರನ್ನು ಚಿಂತಾಮಣಿ ನಗರದ ಎಂ.ಜಿ. ರಸ್ತೆಯ ಶ್ರೀನಿವಾಸ್ ಜ್ಯುವೆಲ್ಸ್ ಬಳಿಯ ನಿವಾಸಿಗಳಾದ ಷನ್ಮುಖ (27) ಹಾಗೂ ಅವರ ಪತ್ನಿ ಮಿಥುಲ (24) ಎಂದು ಗುರುತಿಸಲಾಗಿದೆ.

ಕೆಲವೇ ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ, ಇದೀಗ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವುದು ಕುಟುಂಬಸ್ಥರಿಗೆ ಆಘಾತ ತಂದಿದೆ. ಚಿಂತಾಮಣಿ-ಬೆಂಗಳೂರು ರಸ್ತೆಯಲ್ಲಿ ನವದಂಪತಿ ಎಲೆಕ್ಟ್ರಿಕ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಇಕೋ ಕಾರು ನಡುವೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಹಾಗೂ ಬೈಕ್ ಎರಡೂ ತೀವ್ರವಾಗಿ ಜಖಂಗೊಂಡಿವೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಷನ್ಮುಖ ಹಾಗೂ ಮಿಥುಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇದೇ ಅಪಘಾತದಲ್ಲಿ ಇಕೋ ಕಾರಿನಲ್ಲಿದ್ದ ಸೂರಜ್, ಎಂ.ಎಲ್.ಕುಮಾರ್ ಹಾಗೂ ಅತುಲಾ ಎಂಬುವವರಿಗೂ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವರಾಜ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಒಂಟಿ ವೃದ್ಧೆಯ ಬರ್ಬರ ಹತ್ಯೆ

ಬೆಂಗಳೂರು: ಒಂಟಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬ್ಯಾಟರಾಯನಪುರದ ಹೊಸಗುಡ್ಡದಹಳ್ಳಿಯಲ್ಲಿ ನಡೆದಿದೆ. ವೆಂಕಟಲಕ್ಷ್ಮಮ್ಮ (70) ಕೊಲೆಯಾದ ವೃದ್ಧೆ. ಇವರು ಮನೆಯಲ್ಲಿ ಒಬ್ಬರೇ ವಾಸಮಾಡುತಿದ್ದರು. ಶನಿವಾರ (ಅ.24) ಸಂಜೆ ದುಷ್ಕರ್ಮಿಗಳು ವೃದ್ಧೆಯ ತಲೆ ಮೇಲೆ ಹಲ್ಲೆ ಮಾಡಿದ್ದರು. ಇದರಿಂದ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದರು. ಬಳಿಕ ಮನೆಯಲ್ಲಿದ್ದ ಬೀರು ಒಡೆದು ದುಷ್ಕರ್ಮಿಗಳು ಕಳ್ಳತನ ಮಾಡಿದ್ದಾರೆ. ವೃದ್ಧೆಯ ತಲೆ, ಕತ್ತಿನ ಭಾಗದಲ್ಲಿ ಗಾಯಗಳಾಗಿವೆ.

ಹತ್ಯೆಯಾದ ವೃದ್ಧೆ ನಾಲ್ಕು ಮನೆಗಳನ್ನು ಹೊಂದಿದ್ದರು. ಒಂದು ಮನೆಯಲ್ಲಿ ಅವರು ವಾಸವಾಗಿದ್ದರು. ಉಳಿದ ಎರಡು ಮನೆಗಳು ಖಾಲಿ ಇದ್ದವು. ಮತ್ತೊಂದು ಮನೆಯನ್ನು ಓರ್ವ ಯುವಕ ಬಾಡಿಗೆಗೆ ಪಡೆದು ಸೌಂಡ್ಸ್ ಸಿಸ್ಟಮ್‌ಗಳನ್ನು ಸ್ಟೋರ್ ಮಾಡಿದ್ದ. ಮನೆಯನ್ನೇ ಗೋಡನ್ ರೀತಿ ಬಳಸುತಿದ್ದ. ತಿಂಗಳಿಗೊಮ್ಮೆ ವೃದ್ಧೆಗೆ ಬಾಡಿಗೆ ಜೊತೆಗೆ ಮಾತ್ರೆ ತಂದು ಕೊಡುತ್ತಿದ್ದ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದು ಯುವಕ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಆತ ಪೊಲೀಸರಿಗೆ ಮಾಹಿತಿ ನೀಡಿ ದೂರು ನೀಡಿದ್ದಾನೆ.

ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.