H V Nagaraj: ಸಂಘಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಸಹಕಾರ ಕ್ಷೇತ್ರ ಬಲವರ್ಧನೆ: ಎಚ್.ವಿ.ನಾಗರಾಜ್
ನ.14ರಿಂದ 20ರವರೆಗೆ ಸಹಕಾರ ಸಪ್ತಾಹ ಆಚರಿಸುವ ಮೂಲಕ ಪಂಡಿತ್ ಜವಾಹರಲಾಲ್ ನೆಹರು ಅವರ ಸಹಕಾರ ಚಳವಳಿಯ ಆಶಯಗಳನ್ನು ಸ್ಮರಿಸಲಾಗುತ್ತದೆ. ಹಾಲು ಉತ್ಪಾದಕರ ಸಹಕಾರ ಸಂಘಗಳ ಬಲವರ್ಧನೆಯಲ್ಲಿ ಎಂ.ವಿ.ಕೃಷ್ಣಪ್ಪ ಅವರ ಕೊಡುಗೆ ಮಹತ್ವದ್ದಾಗಿದೆ. ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ ವೃತ್ತಿಪರ ಸೇವೆ, ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಹಾಗೂ ವಿಶ್ವಶಾಂತಿಯ ಆಶಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
-
ಚಿಕ್ಕಬಳ್ಳಾಪುರ: ಸಹಕಾರ ಕ್ಷೇತ್ರದ ಬಲವರ್ಧನೆಗೆ ಸಹಕಾರ ಸಂಘಗಳ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯವಾಗಿದ್ದು, ರೈತರು, ಮಹಿಳೆಯರು ಹಾಗೂ ಯುವಜನರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಮೂಲಕ ಸಹಕಾರ ಚಳವಳಿಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹಾಗೂ ಸಹಕಾರ ರತ್ನ ಪುರಸ್ಕೃತ ಎಚ್.ವಿ.ನಾಗರಾಜ್(H V Nagaraj) ಕರೆ ನೀಡಿದರು.
ನಗರದ ಹೊರವಲಯದಲ್ಲಿರುವ ಶಿರಡಿ ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ವತಿಯಿಂದ ಆಯೋಜಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನ.14ರಿಂದ 20ರವರೆಗೆ ಸಹಕಾರ ಸಪ್ತಾಹ ಆಚರಿಸುವ ಮೂಲಕ ಪಂಡಿತ್ ಜವಾಹರಲಾಲ್ ನೆಹರು ಅವರ ಸಹಕಾರ ಚಳವಳಿಯ ಆಶಯಗಳನ್ನು ಸ್ಮರಿಸಲಾಗುತ್ತದೆ. ಹಾಲು ಉತ್ಪಾದಕರ ಸಹಕಾರ ಸಂಘಗಳ ಬಲವರ್ಧನೆಯಲ್ಲಿ ಎಂ.ವಿ.ಕೃಷ್ಣಪ್ಪ ಅವರ ಕೊಡುಗೆ ಮಹತ್ವದ್ದಾಗಿದೆ. ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ ವೃತ್ತಿಪರ ಸೇವೆ, ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಹಾಗೂ ವಿಶ್ವಶಾಂತಿಯ ಆಶಯಗಳನ್ನು ಅಳವಡಿಸಿ ಕೊಳ್ಳಬೇಕು ಎಂದರು.
ರಾಜ್ಯ ಸರ್ಕಾರ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 8 ರೂ. ಹೆಚ್ಚಿಸಿರುವುದು ಐತಿಹಾಸಿಕ ನಿರ್ಧಾರವಾಗಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದ್ದು, ಸರ್ಕಾರದ ಕ್ರಮವನ್ನು ಸ್ವಾಗತಿಸು ತ್ತೇನೆ. ಹಾಲಿನ ಖರೀದಿ ದರ ಹೆಚ್ಚಳವನ್ನು ಪ್ರಶ್ನಿಸುವವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದಾಗ ಏಕೆ ಮೌನವಾಗಿರುತ್ತಾರೆ ಎಂದು ಪ್ರಶ್ನಿಸಿದರು.
ಜಿಲ್ಲೆಯ ರೈತರಿಗೆ ಸಾಲ ಸೌಲಭ್ಯ ಒದಗಿಸುವ ಡಿಸಿಸಿ ಬ್ಯಾಂಕ್ ಸದೃಢವಾಗಿರಬೇಕು. ರೇಷ್ಮೆ ಉದ್ಯಮ ಪ್ರಸ್ತುತ ನಷ್ಟದ ಹಾದಿಯಲ್ಲಿದ್ದು, ಹಾಲು ಉತ್ಪಾದನಾ ಕ್ಷೇತ್ರವೂ ಅದೇ ಸ್ಥಿತಿಗೆ ತಲುಪದಂತೆ ಎಚ್ಚರಿಕೆ ವಹಿಸಬೇಕು. ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ರೈತರಿಗೆ ಯಾವುದೇ ಅನ್ಯಾಯ ಮಾಡಬಾರದು. ಸಹಕಾರ ಕ್ಷೇತ್ರದ ಬಗ್ಗೆ ಜನರಲ್ಲಿ ಒಲವಿದ್ದರೂ ನಂಬಿಕೆ ಕಡಿಮೆ ಯಾಗುತ್ತಿರುವುದು ಆತಂಕಕಾರಿ ಸಂಗತಿ. ಜನರ ವಿಶ್ವಾಸವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸಹಕಾರ ಒಕ್ಕೂಟದ ನಿರ್ದೇಶಕ ಕೆ.ಪಿ.ಚನ್ನಬೈರೇಗೌಡ ಮಾತನಾಡಿ, ಸಹಕಾರ ಕ್ಷೇತ್ರವು ಲಕ್ಷಾಂತರ ಕುಟುಂಬಗಳ ಬದುಕಿಗೆ ಆಸರೆಯಾಗಿದೆ. ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸಿದರೆ ರೈತರು ಮತ್ತು ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಸಹಕಾರ ಮಹಾಮಂಡಳದ ಪ್ರಮುಖ ಉದ್ದೇಶ ಶಿಕ್ಷಣ, ತರಬೇತಿ ಹಾಗೂ ಸಹಕಾರ ಚಳವಳಿಯ ಪ್ರಚಾರವಾಗಿದೆ. ಈ ನಿಟ್ಟಿನಲ್ಲಿ ಆಯೋಜಿಸುವ ತರಬೇತಿ ಕಾರ್ಯಕ್ರಮಗಳಲ್ಲಿ ಸಂಘಗಳ ಪ್ರತಿನಿಧಿಗಳು ಸಕ್ರಿಯವಾಗಿ ಪಾಲ್ಗೊಂಡು ಜ್ಞಾನ ಮತ್ತು ಕೌಶಲ್ಯ ಹೆಚ್ಚಿಸಿಕೊಳ್ಳಬೇಕು ಎಂದರು.
ಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್ ಮಾತನಾಡಿ, ತಾಲೂಕಿನಲ್ಲಿ ಯಾವುದೇ ಸಹಕಾರ ಸಂಘ ನಷ್ಟದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಹೆಮ್ಮೆಯ ಸಂಗತಿ. ಸಂಘಗಳ ಆಡಳಿತದಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆಗೆ ಹೆಚ್ಚಿನ ಅವಕಾಶ ನೀಡಬೇಕು. ಹಾಲು ಸರಬರಾಜು ಮಾಡುವ ಸದಸ್ಯರಿಗೆ ನಿರ್ದೇಶಕರಾಗುವ ಅವಕಾಶ ಸೇರಿದಂತೆ ನಿಯಮಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು. ಬಡವರಿಗೂ ಸಹಕಾರ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಮೋಹನ್ ರೆಡ್ಡಿ ಮಾತನಾಡಿ, ಸಹಕಾರಿ ತತ್ವಗಳ ಉದ್ದೇಶವನ್ನು ಅರಿತು ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ಡಿಸಿಸಿ ಬ್ಯಾಂಕ್ನ ನೆರವು ಮಹತ್ವದ್ದಾಗಿದೆ. ಬ್ಯಾಂಕಿನಲ್ಲಿ ಖಾತೆ ತೆರೆದು ಠೇವಣಿ ಇರಿಸುವುದರ ಜತೆಗೆ ಹೆಚ್ಚಿನ ಆರ್ಥಿಕ ವ್ಯವಹಾರ ನಡೆಸುವ ಮೂಲಕ ಬ್ಯಾಂಕಿನ ಬಲವರ್ಧನೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಆರ್.ಅಮರ್ ಮಾತನಾಡಿ, ಸಹಕಾರ ಕ್ಷೇತ್ರಕ್ಕೆ ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಪ್ರತ್ಯೇಕ ಸಹಕಾರ ಸಚಿವಾಲಯ ಸ್ಥಾಪನೆ ಯಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ. ಯುವಕ-ಯುವತಿಯರಿಗೆ ಸಹಕಾರ ಕ್ಷೇತ್ರದಲ್ಲಿ ಹಲವು ಅವಕಾಶಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಎಪಿಎಂಸಿ ಮಾಜಿ ಅಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ ಮಾತನಾಡಿ, ರಾಜ್ಯದ ವಿವಿಧ ಭಾಗಗಳಲ್ಲಿ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಅವಕಾಶಗಳಿವೆ. ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವುದರಿಂದ ಹೈನುಗಾರಿಕೆಗೂ ಅನುಕೂಲವಾಗಲಿದೆ. 2009ರಲ್ಲಿ ಎಪಿಎಂಸಿ ಆವರಣದಲ್ಲಿ ನೆಟ್ಟ ಸಸಿಗಳು ಇಂದು ಹೊಂಗೆ ವನವಾಗಿ ಬೆಳೆದಿವೆ. ಪ್ರತಿಯೊಬ್ಬರೂ ವರ್ಷಕ್ಕೆ ಕನಿಷ್ಠ 50 ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ಕರೆ ನೀಡಿದರು.
ಸಹಕಾರ ರತ್ನ ಪುರಸ್ಕೃತ ಹಾಗೂ ಜಿಲ್ಲಾ ಸಹಕಾರ ಒಕ್ಕೂಟದ ಮಾಜಿ ನಿರ್ದೇಶಕಿ ಪ್ರೇಮಕುಮಾರಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚಾಗಬೇಕು. ಸ್ವಸಹಾಯ ಸಂಘಗಳಿಗೆ ಡಿಸಿಸಿ ಬ್ಯಾಂಕ್ ಸಾಲ ನೀಡಲು ಮುಂದಾಗಿರುವುದು ಸ್ವಾಗತಾರ್ಹ. ಆದರೆ, ದಿಬ್ಬೂರು ಮಹಿಳಾ ಸಂಘಗಳ ಹಣ ದುರುಪಯೋಗವಾಗಿದೆ ಎಂಬ ಆರೋಪದ ಬಗ್ಗೆಯೂ ಸೂಕ್ತ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಸಹಕಾರ ಸಂಘಗಳ ಸಾಧಕರಿಗೆ ಸನ್ಮಾನ ಮಾಡಿದರು.ಇದೇ ವೇಳೆ ಶಿರಡಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವೆಂಕಟರೋಣಪ್ಪ ಅವರನ್ನು ಸನ್ಮಾನಿಸ ಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಮುರಳಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಗಂಗರೇ ಕಾಲವೇ ಪ್ರಸಾದ್, ಎಂ.ಮುರಳಿ, ಕೆಂಪಣ್ಣ, ಲಕ್ಷ್ಮೀಪತಿ, ಶಿವಪ್ಪ, ಶಿವಕುಮಾರ್, ಬಿ.ವಿ.ಪ್ರದೀಪ್, ಎಂ.ಎನ್.ನಾಗೇಶ್, ವೇಣು ಸೇರಿದಂತೆ ಸಹಕಾರ ಕ್ಷೇತ್ರದ ಮುಖಂಡರು ಹಾಗೂ ವಿವಿಧ ಸಹಕಾರ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.