Chikkaballapur News: ಗುಣಮಟ್ಟದ ಶಿಕ್ಷಣದ ಮೂಲಕ ವಿದ್ಯಾರ್ಥಿಗಳನ್ನು ದೇಶದ ಅಮೂಲ್ಯ ಆಸ್ತಿಯನ್ನಾಗಿ ರೂಪಿಸಿ
ವೈದ್ಯರು, ಎಂಜಿನಿಯರ್‌ಗಳು ಸೇರಿದಂತೆ ವಿವಿಧ ಕ್ಷೇತ್ರಗಳ ತಜ್ಞರನ್ನು ರೂಪಿಸುವಲ್ಲಿ ಶಿಕ್ಷಣ ವ್ಯವಸ್ಥೆಯ ಕೊಡುಗೆ ಅಪಾರ. ಪ್ರತಿಭಾವಂತ ಮಾನವ ಸಂಪನ್ಮೂಲದ ನಿರ್ಮಾಣದ ಹಿಂದೆ ಶಿಕ್ಷಕರ ಪರಿಶ್ರಮ, ಬದ್ಧತೆ ಮತ್ತು ಮಾರ್ಗದರ್ಶನವಿದೆ. ಭಾರತ ಜ್ಞಾನ, ತಂತ್ರಜ್ಞಾನ ಹಾಗೂ ಶಾಂತಿಯ ಸಂದೇಶವನ್ನು ವಿಶ್ವಕ್ಕೆ ನೀಡಿದ್ದು, ದೇಶವನ್ನು ಮತ್ತಷ್ಟು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು
-
ಚಿಕ್ಕಬಳ್ಳಾಪುರ: ದೇಶದ ಅಭಿವೃದ್ಧಿಗೆ ಅಗತ್ಯವಾದ ಸದೃಢ ಮಾನವ ಸಂಪನ್ಮೂಲವನ್ನು ರೂಪಿಸುವಲ್ಲಿ ಶಿಕ್ಷಕರು ಮೂಲಶಿಲ್ಪಿಗಳಾಗಿದ್ದು, ಮಕ್ಕಳ ಆಲೋಚನಾ ಮಟ್ಟವನ್ನು ಅರ್ಥ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಕನ್ನಡ ಭವನದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಇದನ್ನೂ ಓದಿ:Chikkaballapur News: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹10 ಕೋಟಿ ಬರ ಪರಿಹಾರ ಅನುದಾನ ನೀಡಿ: ಕೃಷಿಕ ಸಮಾಜ ಒತ್ತಾಯ
ಭಾರತದ ಮಾಜಿ ರಾಷ್ಟ್ರಪತಿ, ದಾರ್ಶನಿಕ ಹಾಗೂ ಚಿಂತಕ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಭಾರತದ ಮೊದಲ ಮಹಿಳಾ ಶಿಕ್ಷಕಿಯರಲ್ಲಿ ಪ್ರಮುಖರಾದ ಸಾವಿತ್ರಿಬಾಯಿ ಫುಲೆ ಅವರನ್ನೂ ಸ್ಮರಿಸಬೇಕು ಎಂದರು.
ವೈದ್ಯರು, ಎಂಜಿನಿಯರ್‌ಗಳು ಸೇರಿದಂತೆ ವಿವಿಧ ಕ್ಷೇತ್ರಗಳ ತಜ್ಞರನ್ನು ರೂಪಿಸುವಲ್ಲಿ ಶಿಕ್ಷಣ ವ್ಯವಸ್ಥೆಯ ಕೊಡುಗೆ ಅಪಾರ. ಪ್ರತಿಭಾವಂತ ಮಾನವ ಸಂಪನ್ಮೂಲದ ನಿರ್ಮಾಣದ ಹಿಂದೆ ಶಿಕ್ಷಕರ ಪರಿಶ್ರಮ, ಬದ್ಧತೆ ಮತ್ತು ಮಾರ್ಗದರ್ಶನವಿದೆ. ಭಾರತ ಜ್ಞಾನ, ತಂತ್ರಜ್ಞಾನ ಹಾಗೂ ಶಾಂತಿಯ ಸಂದೇಶವನ್ನು ವಿಶ್ವಕ್ಕೆ ನೀಡಿದ್ದು, ದೇಶವನ್ನು ಮತ್ತಷ್ಟು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು ಎಂದರು.
ವಿದ್ಯಾರ್ಥಿಗಳನ್ನು ಕೇವಲ ಪಠ್ಯಾಧಾರಿತ ಕಲಿಕೆಗೆ ಸೀಮಿತಗೊಳಿಸದೆ, ಕ್ರಿಯಾಶೀಲ ಹಾಗೂ ಪ್ರಾಯೋಗಿಕ ಚಿಂತನೆಗೆ ಪ್ರೇರೇಪಿಸಬೇಕು. ಶಿಕ್ಷಣದ ಮೂಲಕ ಅವರನ್ನು ದೇಶದ ಅಮೂಲ್ಯ ಆಸ್ತಿಯನ್ನಾಗಿ ರೂಪಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್ ಮಾತನಾಡಿ, ಶಿಕ್ಷಕರು ಜ್ಞಾನ ನೀಡುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳು, ಸಾಮಾಜಿಕ ಜವಾಬ್ದಾರಿ, ವೈಜ್ಞಾನಿಕ ಮನೋಭಾವ ಹಾಗೂ ಸೃಜನಶೀಲತೆಯನ್ನು ಬೆಳೆಸುತ್ತಾರೆ ಎಂದರು.
ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ 18 ಶಿಕ್ಷಕರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈ. ನವೀನ್ ಭಟ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ತಹಸೀಲ್ದಾರ್ ರಶ್ಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವಿ. ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯ ಸೇರಿದಂತೆ ಅಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.