Shidlaghatta News: ಕ್ರೀಡಾಸ್ಫೂರ್ತಿಯಿಂದ ಸ್ಪರ್ಧಿಸಿ: ತಹಶೀಲ್ದಾರ್ ಗಗನ್ ಸಿಂಧು
ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ದೃಢತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ. ಗೆಲುವು-ಸೋಲುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ವಿದ್ಯಾರ್ಥಿ ಗಳು ಬೆಳೆಸಿಕೊಳ್ಳಬೇಕು
-
ಶಿಡ್ಲಘಟ್ಟ: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸಲು ಕ್ರೀಡಾಕೂಟಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಸೋಲಿಗೆ ಹೆದರದೆ ಉತ್ತಮ ಪ್ರದರ್ಶನ ನೀಡುವ ಗುರಿಯೊಂದಿಗೆ ಸ್ಪರ್ಧಿಸಬೇಕು ಎಂದು ತಹಶೀಲ್ದಾರ್ ಗಗನ್ ಸಿಂಧು ಹೇಳಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ದೃಢತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತವೆ. ಗೆಲುವು-ಸೋಲುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಸಾಧನೆ ಮಾಡಿದವರು ಜೀವನದಲ್ಲಿಯೂ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುತ್ತಾರೆ ಎಂದು ತಿಳಿಸಿದರು.
ಇದನ್ನೂ ಓದಿ: Shidlaghatta News: ಆರು ತಿಂಗಳಾದರೂ ಕಾಮಗಾರಿ ಆರಂಭವಿಲ್ಲ, ನೆಹರೂ ಕ್ರೀಡಾಂಗಣಕ್ಕೆ ಮತ್ತೆ ನಿರ್ಲಕ್ಷ್ಯದ ಕಳಂಕ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾಲ್ಫಿನ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್ ಮೂರ್ತಿ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಹಾಗೂ ತಂಡದ ಮನೋಭಾವವನ್ನು ಬೆಳೆಸುವ ಶಕ್ತಿಯಾಗಿದೆ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ಕ್ರೀಡೆ ಕಲಿಸುತ್ತದೆ. ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಸಾಧನೆ ಮಾಡುವ ಗುರಿ ಹೊಂದಬೇಕು ಎಂದು ಕರೆ ನೀಡಿದರು.
ತಾಲೂಕು ಮಟ್ಟದ ಈ ಕ್ರೀಡಾಕೂಟ ಕೇವಲ ಪದಕ ಗೆಲ್ಲುವುದಕ್ಕಷ್ಟೇ ಸೀಮಿತವಾಗಬಾರದು. ಇಲ್ಲಿಂದ ಹೊರಹೊಮ್ಮುವ ಪ್ರತಿಭೆಗಳು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ತಾಲೂಕಿಗೆ ಕೀರ್ತಿ ತರಬೇಕು. ಸ್ಪರ್ಧೆಯಲ್ಲಿ ಭಾಗವಹಿಸಿರುವ ಎಲ್ಲ ವಿದ್ಯಾರ್ಥಿಗಳು ನಿಯಮಾನು ಸಾರ ಹಾಗೂ ಪ್ರಾಮಾಣಿಕವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಸೋಲಿನಿಂದ ನಿರಾಶರಾಗದೆ ಅದನ್ನು ಯಶಸ್ಸಿನ ಮೆಟ್ಟಿಲನ್ನಾಗಿ ಮಾಡಿಕೊಂಡು ಮುಂದೆ ಸಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕೌಸರ್, ಸಿರಿ ಸಿಂಚನ ಹಾಗೂ ಚೇತನ ನಿರೂಪಣೆ ನಡೆಸಿದರು. ವಿದ್ಯಾರ್ಥಿ ಗಳಿಂದ ಸಾಂಸ್ಕೃತಿಕ ನೃತ್ಯ ಪ್ರದರ್ಶನವೂ ನಡೆಯಿತು.
ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ವಾಲಿಬಾಲ್ ಆಟಗಾರ ಹಾಗೂ ಭಾರತೀಯ ಸೇನೆಯ ಹವಾಲ್ದಾರ್ ಆಸ್ಮತ್ ಉಲ್ಲಾ, ಆಂಗ್ಲ ಭಾಷಾ ಉಪನ್ಯಾಸಕ ಮಂಜುನಾಥ್ ರಾವ್, ಸಂಪತ್ ಕುಮಾರ್, ಮಂಜುನಾಥ್, ಪಿಎಸ್ಐ ವೇಣುಗೋಪಾಲ್ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿವಿಧ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಣ ನಿರ್ದೇಶಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
![]()
"ಕ್ರೀಡೆ ಜೀವನದ ಪಾಠ ಕಲಿಸುತ್ತದೆ" "ಸ್ಪರ್ಧೆಯಲ್ಲಿ ಭಾಗವಹಿಸಿರುವ ಎಲ್ಲ ವಿದ್ಯಾರ್ಥಿಗಳು ನಿಯಮಾನುಸಾರ ಹಾಗೂ ಪ್ರಾಮಾಣಿಕ ವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆ ಜೀವನದಲ್ಲಿ ಸವಾಲುಗಳನ್ನು ಎದುರಿಸುವ ಶಕ್ತಿ ಹಾಗೂ ತಂಡದೊಂದಿಗೆ ಕೆಲಸ ಮಾಡುವ ಮನೋಭಾವವನ್ನು ಬೆಳೆಸುತ್ತದೆ. ಸೋಲಿನಿಂದ ನಿರಾಶರಾಗದೆ ಅದನ್ನು ಯಶಸ್ಸಿನ ಮೆಟ್ಟಿಲನ್ನಾಗಿ ಮಾಡಿಕೊಂಡು ಮುಂದೆ ಸಾಗಬೇಕು."
– ಶ್ರೀನಿವಾಸ್ ಮೂರ್ತಿ, ಪ್ರಾಂಶುಪಾಲರು, ಡಾಲ್ಫಿನ್ ಪದವಿ ಪೂರ್ವ ಕಾಲೇಜು