ಸರ್ಕಾರಿ ಗೌರವದೊಂದಿಗೆ ಚಳ್ಳಕೆರೆಯಲ್ಲಿ ಇಂದು ಸಚಿವ ಸುಧಾಕರ್ ಅಂತ್ಯಕ್ರಿಯೆ
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (62) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಂದು ಅವರ ಹುಟ್ಟುರಾದ ಚಿತ್ರದುರ್ಗದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಮೃತರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ಸೂಚನೆ ನೀಡಿದೆ.
ಸಂಗ್ರಹ ಚಿತ್ರ -
ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (62) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಂದು ಅವರ ಹುಟ್ಟುರಾದ ಚಿತ್ರದುರ್ಗದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಮೃತರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ಸೂಚನೆ ನೀಡಿದೆ. ಸುಧಾಕರ್ ನಿಧನಕ್ಕೆ ಸಂತಾಪ ಸೂಚಿಸಿ ಚಿತ್ರದುರ್ಗಕ್ಕೆ ಇಂದು ಸರ್ಕಾರ ರಜೆ ಘೋಷಣೆ ಮಾಡಿದೆ.
ಭಾನುವಾರ ಮುಂಜಾನೆ ನಿಧನ ಹೊಂದಿದ ಸಚಿವ ಡಿ.ಸುಧಾಕರ್ ಅವರ ಪಾರ್ಥಿವ ಶರೀರವನ್ನು ಚಳ್ಳಕೆರೆಯ ಅವರ ನಿವಾಸ, ‘ಗೊಮ್ಮಟ ನಿಲಯ’ಕ್ಕೆ ತರಲಾಗಿದ್ದು, ಸೋಮವಾರ ಮಧ್ಯಾಹ್ನ 4 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ. ಸೋಮವಾರ ಬೆಳಗ್ಗೆ ಸಚಿವರ ಸ್ವಂತ ಮನೆ ಗೊಮ್ಮಟ ನಿಲಯದಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ. ಬಳಿಕ, ಚಳ್ಳಕೆರೆ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಿ.ಸುಧಾಕರ್ ಮೈದಾನಕ್ಕೆ ಮೃತದೇಹ ಕೊಂಡೊಯ್ದು, ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ನಂತರ ಮಧ್ಯಾಹ್ನ 4 ಗಂಟೆಗೆ ಚಿತ್ರದುರ್ಗ ರಸ್ತೆಯ ವಿಠ್ಠಲ ನಗರದಲ್ಲಿರುವ ಶಾಂತಕುಮಾರ್ ಮೆಮೋರಿಯಲ್ ಶೆಟಲ್ ಕೋರ್ಟ್ ಆವರಣಕ್ಕೆ ಮೃತದೇಹವನ್ನು ಕೊಂಡೊಯ್ಯಲಾಗುವುದು. ಬಳಿಕ, ಸಕಲ ಸರ್ಕಾರಿ ಗೌರವಗಳೊಂದಿಗೆ, ಜೈನ ಧರ್ಮದ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಶಾಸಕರು, ಮಂತ್ರಿಗಳು, ಮುಖಂಡರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸುಧಾಕರ್ ಅವರು ಮೂಲತಃ ಚಳ್ಳಕರೆಯವರು. 2008ರಿಂದ ಹಿರಿಯೂರು ಶಾಸಕರಾಗಿದ್ದರು. ಎರಡನೇ ಬಾರಿಗೆ ಮಂತ್ರಿಯಾಗಿದ್ದ ಅವರು ಅತ್ಯಂತ ಜನಪ್ರಿಯ ವ್ಯಕ್ತಿ. ಸಮಾಜ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿಯೂ ಸಾಕಷ್ಟು ಕೊಡುಗೆ ನೀಡಿರುವ ಅವರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದರು. ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಸುಧಾಕರ್ ಅವರ ಚಿಕ್ಕಪ್ಪ ಜಯಣ್ಣ ಕೂಡ ಶಾಸಕರಾಗಿದ್ದವರು. ರಾಜಕೀಯ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿಕೊಂಡಿದ್ದರು. ಚಳ್ಳಕೆರೆ ಎಸ್.ಟಿ ಮೀಸಲು ಕ್ಷೇತ್ರವಾಗಿದ್ದರಿಂದ ಹಿರಿಯೂರಿನಿಂದ ಸ್ಪರ್ಧಿಸಿ ಗೆದ್ದಿದ್ದರು, ರೈತರ ಹಾಗೂ ಬಡವರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದು, ಬಡವರ ಬಂಧು ಎಂದೇ ಖ್ಯಾತರಾಗಿದ್ದರು.