ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಗ್ಯಾರಂಟಿಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದೆ ಕಾಂಗ್ರೆಸ್ ಸರ್ಕಾರ: ಸಿಎಂ ಸಿದ್ದರಾಮಯ್ಯ

CM Siddaramaiah: ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಅವರ ಮನೆದೇವರು. ರಾಜ್ಯದ ಜನರನ್ನು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ, ಹಾಗೂ ನನ್ನ ಮೇಲೆ ಅಪಪ್ರಚಾರ, ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ. ಆದರೂ ಮೂರೂ ಉಪಚುನಾವಣೆಗಳಲ್ಲಿ ನಾವು ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿಗಳನ್ನು ಜಾರಿ ಮಾಡಿ ನುಡಿದಂತೆ ನಡೆದಿದೆ ಕಾಂಗ್ರೆಸ್ ಸರ್ಕಾರ: ಸಿಎಂ

Profile Siddalinga Swamy Apr 16, 2025 10:49 PM

ಬೀದರ್: ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ (State Congress Government) ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಬೀದರ್ ಜಿಲ್ಲೆಯಲ್ಲಿ ಇಂದು ರೂ. 2025 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಹಾಗೂ ಬೀದರ್ ಹಾಗೂ ಬೆಂಗಳೂರು ನಾಗರಿಕ ವಿಮಾನ ಸೇವೆಯ ಪುನರಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. 2025ರ ಮೇ 20 ರಂದು ಸರ್ಕಾರಕ್ಕೆ ಎರಡು ವರ್ಷ ತುಂಬಲಿದ್ದು, ಸರ್ಕಾರದ ಎರಡು ವರ್ಷದ ಸಾಧನೆಯ ಕಾರ್ಯಕ್ರಮವನ್ನು ರಾಜ್ಯದ ಯಾವುದಾದರೂ ಜಿಲ್ಲೆಯಲ್ಲಿ ಆಚರಿಸಲಿದ್ದೇವೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯದ ಮುಕುಟ ಎಂದೇ ಕರೆಯಲ್ಪಡುವ ಬೀದರ್ ಜಿಲ್ಲೆಯಲ್ಲಿ ಇಂದು 2025 ಕೋಟಿ. ರೂ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಶಾಸಕ ರಹೀಂ ಖಾನ್ ಅವರು ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸಾಗರ್ ಖಂಡ್ರೆಯವರು ಭವಿಷ್ಯದಲ್ಲಿ ಉತ್ತಮ ಜನನಾಯಕನಾಗಿ ಹೊರಹೊಮ್ಮಲಿ ಎಂದು ಶುಭ ಹಾರೈಸಿದರು.

ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಗ್ಯಾರಂಟಿಗಳನ್ನು ಜಾರಿಮಾಡಲು ಸಾಧ್ಯವಿಲ್ಲ ಹಾಗೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಹಾಗೂ ಬಿಜೆಪಿಯವರು ಟೀಕೆ ಮಾಡಿದರು. ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆಯುತ್ತದೆ ಎಂಬುದನ್ನು ಜನರು ಅರಿತಿದ್ದಾರೆ. ಆದ್ದರಿಂದಲೇ ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಎಂದರು.

ದೇಶದಲ್ಲಿ ಬೆಲೆಯೇರಿಕೆಯಾಗಲು ಕೇಂದ್ರದ ಬಿಜೆಪಿ ಸರ್ಕಾರ ಕಾರಣ

ಪ್ರತಿಪಕ್ಷಗಳು ಗ್ಯಾರಂಟಿ ಯೋಜನೆ ಜಾರಿ ಮಾಡಿ ಅಭಿವೃದ್ಧಿ ಕೆಲಸಗಳಿಗೆ ತಿಲಾಂಜಲಿ ಇಟ್ಟಿದ್ದಾರೆ ಎಂದು ಆರೋಪಿಸುತ್ತಾರೆ. ಬಿಜೆಪಿಯ ಆರ್.ಅಶೋಕ್, ನಾರಾಯಣಸ್ವಾಮಿ ಹಾಗೂ ವಿಜಯೇಂದ್ರ ಅವರು ಬೀದರ್ ಬಂದು ನೋಡಲು ಆಹ್ವಾನ ನೀಡುತ್ತೇನೆ ಎಂದು ಸವಾಲು ಹಾಕಿದ ಮುಖ್ಯಮಂತ್ರಿಗಳು, ಸರ್ಕಾರ ದಿವಾಳಿಯಾಗಿದ್ದರೆ 2025 ಕೋಟಿಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಸಾಧ್ಯವಾಗುತ್ತಿತ್ತೆ ಎಂದರು. ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ, ಕಿಂಚಿತ್ತಾದರೂ ಜನಪರವಾದ ಕಾಳಜಿ ಇದ್ದರೆ ಸುಳ್ಳು ನಾಟಕವನ್ನು ಬಂದ್ ಮಾಡಬೇಕು. ದೇಶದಲ್ಲಿ ಬೆಲೆಯೇರಿಕೆಯಾಗಿದ್ದರೆ ಕೇಂದ್ರದ ಬಿಜೆಪಿ ಸರ್ಕಾರ ಕಾರಣ ಎಂದರು.

ಮನಮೋಹನ್ ಸಿಂಗ್ ಅವರ ಸರ್ಕಾರವಿದ್ದಾಗ ಪೆಟ್ರೋಲ್ ಬೆಲೆ 73 ರೂ. ಹಾಗೂ ಡೀಸೆಲ್ ಬೆಲೆ 46.59 ಪೈಸೆ ಇತ್ತು. ಇಂದು ಎಷ್ಟಾಗಿದೆ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಅಚ್ಚೆ ದಿನ್ ಬರುತ್ತದೆ ಎಂದು ನರೇಂದ್ರ ಮೋದಿ ಹೇಳಿದ್ದರು. ಅಚ್ಚೆ ದಿನ್ ಬಂದಿದೆಯೇ ಎಂದು ಪ್ರಶ್ನಿಸಿದರು.

ಕಳೆದ ವರ್ಷ 3 ಲಕ್ಷ 71ಸಾವಿರ ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದು, ಈ ವರ್ಷ 4 ಲಕ್ಷದ 9 ಸಾವಿರ ಕೋಟಿ ರೂ.ಗಳ ಬಜೆಟ್ ಮಂಡಿಸಲಾಗಿದೆ. ಆರ್ಥಿಕವಾಗಿ ಸದೃಢವಿದ್ದುದ್ದಕ್ಕೆ 38 ಸಾವಿರ ಕೋಟಿಗಳಿಗೆ ಬಜೆಟ್ ಗಾತ್ರ ಹೆಚ್ಚಿಸಲು ಸಾಧ್ಯವಾಯಿತು ಎಂದರು.

ಈ ಸುದ್ದಿಯನ್ನೂ ಓದಿ | CM Siddaramaiah: ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಎಂದು ಹೇಳಿ ಯುವ ಜನತೆಗೆ ಮೋದಿ ವಂಚನೆ: ಸಿಎಂ

ಸುಳ್ಳೇ ಬಿಜೆಪಿ ಮನೆದೇವರು

ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಅವರ ಮನೆದೇವರು. ರಾಜ್ಯದ ಜನರನ್ನು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ, ಹಾಗೂ ನನ್ನ ಮೇಲೆ ಅಪಪ್ರಚಾರ, ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ. ಆದರೂ ಮೂರೂ ಉಪಚುನಾವಣೆಗಳಲ್ಲಿ ನಾವು ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.