ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Electoral Fraud: ರಾಜ್ಯದಲ್ಲಿ ಚುನಾವಣಾ ಅಕ್ರಮ; ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಬೆಂಬಲ

CM Siddaramaiah: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದಾರೆ. ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣಾ ಅಕ್ರಮ; ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬೆಂಬಲ!

Prabhakara R Prabhakara R Jul 24, 2025 8:49 PM

ಬೆಂಗಳೂರು: ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ (Electoral Fraud) ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿರುವುದಾಗಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆಯಾಗಿರುವುದು ಮತ್ತು ಹಳೆಯ ಮತದಾರರ ಹೆಸರುಗಳು ರದ್ದಾಗಿರುವುದರ ಬಗ್ಗೆ ನಮ್ಮ ಅನೇಕ ಕಾರ್ಯಕರ್ತರು ದೂರುಗಳನ್ನು ನೀಡಿದ್ದರು.

ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘’ಮತಗಳ್ಳತನ’’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ.

ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | CM Siddaramaiah: ಸುಳ್ಳು ಹೇಳುವ ಬಿಜೆಪಿಯವರು ಬಹಿರಂಗ ಚರ್ಚೆಗೆ ಬರುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮಹದಾಯಿ ಯೋಜನೆಗೆ ಅನುಮತಿ ನೀಡದೆ ಕನ್ನಡಿಗರಿಗೆ ದ್ರೋಹ ಬಗೆದ ಕೇಂದ್ರ: ಸಿಎಂ

CM Siddaramaiah (1)

ಬೆಂಗಳೂರು: ಮಹದಾಯಿ ಯೋಜನೆಗೆ (Mahadayi project) ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ (Central government) ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬುಧವಾರ ಹೇಳಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ, ಈ ಅನ್ಯಾಯದ ವಿರುದ್ಧ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್‍ ಅವರೇ ತಿಳಿಸಿರುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರ ಕರ್ನಾಟಕದ ಹಿತಾಸಕ್ತಿ ಮೇಲಿನ ಇನ್ನೊಂದು ಪ್ರಹಾರವಾಗಿದೆ ಎಂದು ಎಂದು ವಾಗ್ದಾಳಿ ನಡೆಸಿದ್ದಾರೆ.

2018ರಲ್ಲಿ ಮಹದಾಯಿ ಜಲವಿವಾದ ನ್ಯಾಯಮಂಡಳಿ 13.42 ಟಿಎಂಸಿ ನೀರನ್ನು ನಮ್ಮ ರಾಜ್ಯಕ್ಕೆ ನಿಗದಿಪಡಿಸಿ ಐತೀರ್ಪು ನೀಡಿದ್ದರೂ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ ಯೋಜನೆಯ ಅನುಷ್ಠಾನ ಸಾಧ್ಯವಾಗುತ್ತಿಲ್ಲ. ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ದಗೊಂಡಿದ್ದು, ಗೋವಾದ ಬಿಜೆಪಿ ಸರ್ಕಾರದ ಜೊತೆ ಶಾಮೀಲಾಗಿ ಕೇಂದ್ರ ಸರ್ಕಾರ ನಿರಂತರವಾಗಿ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಬಿಜೆಪಿ ನಾಯಕರಾಗಲಿ, ಕನ್ನಡಿಗರಿಂದಲೇ ಆರಿಸಿ ಹೋಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರಾಗಲಿ ಈ ಅನ್ಯಾಯದ ವಿರುದ್ಧ ದನಿ ಎತ್ತಲಾಗದಷ್ಟು ನಿರ್ವಿರ್ಯರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ ಕರ್ನಾಟಕದ ಜನತೆಯ ವಿರುದ್ಧ ಸೇಡು ತೀರಿಸಿಕೊಳ್ಳುವ ದುರುದ್ದೇಶದಿಂದಲೇ ಮಹದಾಯಿ ಯೋಜನೆಗೆ ಪರಿಸರ ಖಾತೆಯ ಅನುಮತಿಯನ್ನು ನಿರಾಕರಿಸಿರುವುದು ಸ್ಪಷ್ಟವಾಗಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: GST Protest Karnataka: ಜಿಎಸ್‌ಟಿ ತೆರಿಗೆ ಬಾಕಿ ಮನ್ನಾ ಘೋಷಣೆ ಮಾಡಿದ ಸಿಎಂ; ಪ್ರತಿಭಟನೆ ಹಿಂಪಡೆದ ವ್ಯಾಪಾರಿಗಳು

ತೆರಿಗೆ ಹಂಚಿಕೆ, ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಅನುದಾನ ಕಡಿತವೂ ಸೇರಿದಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ವಿಚಾರದಲ್ಲಿ ನಿರಂತರವಾಗಿ ಅನ್ಯಾಯ ಎಸಗುತ್ತಿದೆ. ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆ ವಿರುದ್ಧ ನಾಡಿನ ಸಮಸ್ತ ಕನ್ನಡಿಗರನ್ನು ಜೊತೆಯಲ್ಲಿ ಕಟ್ಟಿಕೊಂಡು ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.