ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರಿನ ಬೆನ್ನಲ್ಲೇ ಮಂಗಳೂರಿನಲ್ಲೂ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

IndiGo flight: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಬೆನ್ನಲ್ಲೇ, ಇದೀಗ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಅಂತಹದ್ದೇ ಆತಂಕಕಾರಿ ಘಟನೆ ಸಂಭವಿಸಿದೆ. ಈ ವಿಮಾನದಲ್ಲಿ ಒಟ್ಟು 229 ಪ್ರಯಾಣಿಕರು ಹಾಗೂ 7 ಮಂದಿ ವಿಮಾನ ಸಿಬ್ಬಂದಿ ಪ್ರಯಾಣಿಸುತ್ತಿದ್ದರು.

ಬೆಂಗಳೂರಿನ ಬೆನ್ನಲ್ಲೇ ಮಂಗಳೂರಿನಲ್ಲೂ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 17, 2026 8:33 AM

ಮಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಬೆನ್ನಲ್ಲೇ, ಇದೀಗ ಮಂಗಳೂರು (IndiGo flight) ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಅಂತಹದ್ದೇ ಆತಂಕಕಾರಿ ಘಟನೆ ಸಂಭವಿಸಿದೆ. ವಿಮಾನ ಟೇಕಾಫ್ ಆಗುವ ಕೊನೆಯ ಕ್ಷಣದಲ್ಲಿ ತಾಂತ್ರಿಕ ದೋಷ ಪತ್ತೆಯಾಗಿದ್ದು, ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ವಿಮಾನದಲ್ಲಿದ್ದ 236 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೋಮವಾರ (ನ. 16) ಸಂಜೆ ಸುಮಾರು 6.10ರ ವೇಳೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ (IndiGo) ವಿಮಾನವು ರನ್‌ವೇಯಲ್ಲಿ ಟೇಕಾಫ್‌ಗೆ ಸಿದ್ಧತೆ ನಡೆಸುತ್ತಿತ್ತು. ಈ ವೇಳೆ ವಿಮಾನದ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಪೈಲಟ್ ಗಮನಕ್ಕೆ ಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೈಲಟ್, ಕೊನೆಯ ಕ್ಷಣದಲ್ಲಿ ತುರ್ತು ಬ್ರೇಕ್ ಹಾಕುವ ಮೂಲಕ ವಿಮಾನವನ್ನು ರನ್‌ವೇನಲ್ಲೇ ಸುರಕ್ಷಿತವಾಗಿ ನಿಲ್ಲಿಸಿ ಮರಳಿ 'ಬೇ' ಗೆ ಕರೆತಂದಿದ್ದಾರೆ.

ಈ ವಿಮಾನದಲ್ಲಿ ಒಟ್ಟು 229 ಪ್ರಯಾಣಿಕರು ಹಾಗೂ 7 ಮಂದಿ ವಿಮಾನ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಪೈಲಟ್ ತೆಗೆದುಕೊಂಡ ಕ್ಷಿಪ್ರ ನಿರ್ಧಾರದಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ. ಘಟನೆಯ ಬಳಿಕ ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ನಂತರ ಇಂಡಿಗೋ ಸಂಸ್ಥೆಯು ಪ್ರಯಾಣಿಕರಿಗೆ ಬೆಂಗಳೂರಿಗೆ ತೆರಳಲು ಪರ್ಯಾಯ ವಿಮಾನದ ವ್ಯವಸ್ಥೆ ಕಲ್ಪಿಸಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಸೋಮವಾರ ಬೆಳಿಗ್ಗೆಯಷ್ಟೇ ಬೆಂಗಳೂರಿನಿಂದ ಮಧುರೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲೂ (6E 6526) ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡು, ಪೈಲಟ್ ತುರ್ತು ಬ್ರೇಕ್ ಹಾಕಿ 92 ಪ್ರಯಾಣಿಕರನ್ನು ರಕ್ಷಿಸಿದ್ದರು. ಒಂದೇ ದಿನ ರಾಜ್ಯದ ಎರಡು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ದೋಷ ವರದಿಯಾಗಿರುವುದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.