ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BJP Jan akrosh yatra: ಕಾಂಗ್ರೆಸ್ ಸರಕಾರ ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

BJP Jan akrosh yatra: ಜನಾಕ್ರೋಶ ಯಾತ್ರೆ ಭಾಗವಾಗಿ ದಾವಣಗೆರೆಯಲ್ಲಿ ಏರ್ಪಡಿಸಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಮಾತನಾಡಿದ್ದಾರೆ. ಸಿದ್ದರಾಮಯ್ಯನವರು ಕೇವಲ ಮುಸಲ್ಮಾನರ ಮುಖ್ಯಮಂತ್ರಿಯಂತೆ ವರ್ತಿಸುತ್ತಿದ್ದಾರೆ. ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅದಕ್ಕಾಗಿ ಜನಾಕ್ರೋಶ ಯಾತ್ರೆ ಮಾಡುತ್ತಿರುವುದಾಗಿ ವಿಜಯೇಂದ್ರ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸರಕಾರ ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

Profile Prabhakara R Apr 21, 2025 10:17 PM

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಜನಾಕ್ರೋಶ ಯಾತ್ರೆ ಸಂಬಂಧ ಇಲ್ಲಿ ಏರ್ಪಡಿಸಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಈ ಸರಕಾರ ಬಂದ ಮೇಲೆ ಬೆಲೆ ಏರಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ರೈತರಿಗೆ ತೊಂದರೆ ಕೊಡುತ್ತಿದ್ದಾರೆ. ಬೆಲೆ ಏರಿಕೆ ಪರಿಣಾಮವಾಗಿ ಬಡಜನರು ತತ್ತರಿಸಿ ಹೋಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ; ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.

ಅಭಿವೃದ್ಧಿ ಆಗುತ್ತಿಲ್ಲ; ಒಂದು ತೊಟ್ಟು ವಿಷ ಕೊಡಿ; ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ಶಾಸಕರು ಹೇಳುತ್ತಿಲ್ಲ. ಆಡಳಿತ ಪಕ್ಷದ ಹಿರಿಯ ಶಾಸಕ ರಾಜು ಕಾಗೆಯವರು ಹೇಳುತ್ತಿದ್ದಾರೆ. ಬಿ.ಆರ್.ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆರ್.ವಿ.ದೇಶಪಾಂಡೆ ಅವರಂಥ ಹಿರಿಯ ಶಾಸಕರೂ ಅಭಿವೃದ್ಧಿಗೆ ಹಣ ಕೊಡಲು ಸಾಧ್ಯ ಆಗುತ್ತಿಲ್ಲ. ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುತ್ತಿಲ್ಲ ಎಂದು ಹೇಳಿದ್ದಾಗಿ ಗಮನ ಸೆಳೆದರು.

ಸಿದ್ದರಾಮಯ್ಯನವರು ಕೇವಲ ಮುಸಲ್ಮಾನರ ಮುಖ್ಯಮಂತ್ರಿಯಂತೆ ವರ್ತಿಸುತ್ತಿದ್ದಾರೆ. ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅದಕ್ಕಾಗಿ ಜನಾಕ್ರೋಶ ಯಾತ್ರೆ ಮಾಡುತ್ತಿರುವುದಾಗಿ ವಿವರಿಸಿದರು. ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಸಮುದಾಯಗಳನ್ನು ಮರೆತು ಕೇವಲ ಅಲ್ಪಸಂಖ್ಯಾತರ ಹಿಂದೆ ಹೊರಟಿದ್ದಾರೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಸಾವಿರಾರು ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಇದು ಖಂಡನೀಯ ಎಂದು ತಿಳಿಸಿದರು.

BJP Jan Akrosh Yatra (2)

50ಕ್ಕೂ ಜನೋಪಯೋಗಿ ವಸ್ತುಗಳ ಬೆಲೆ ಏರಿಸಿದ್ದಾರೆ. ಪೆಟ್ರೋಲ್ ಬೆಲೆ 3.50 ರೂ. ಏರಿಸಿದ್ದರೆ ತೆರಿಗೆ ಮೂಲಕ ಡೀಸೆಲ್ ಬೆಲೆ 5.50 ರೂ. ಹೆಚ್ಚಿಸಿದ್ದಾರೆ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ಹಾಲಿನ ಬೆಲೆ 9 ರೂ. ಜಾಸ್ತಿ ಮಾಡಿದ್ದಾರೆ. ಬೆಲೆ ಏರಿಕೆಯಿಂದ ಜನರು ಪರದಾಡುವಂತಾಗಿದೆ. ರೈತರೂ ತೊಂದರೆಗೆ ಸಿಲುಕಿದ್ದಾರೆ ಎಂದು ವಿವರಿಸಿದರು. ಈ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಂದ ಕಾರ್ಯಕರ್ತರು ಮತ್ತು ಮುಖಂಡರ ಪ್ರೀತಿ ವಿಶ್ವಾಸಕ್ಕೆ ಋಣಿ ಆಗಿರುವುದಾಗಿ ಇದೇವೇಳೆ ತಿಳಿಸಿದರು.

ಈ ಸುದ್ದಿಯನ್ನೂ ಓದಿ | DK Shivakumar: ಸರ್ಕಾರ ಮತ್ತು ಜನರ ನಡುವೆ ಅರ್ಚಕರು ನೀವು; ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ್ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಮಾಡಾಳ್ ವಿರುಪಾಕ್ಷಪ್ಪ, ಮಾಜಿ ಮುಖ್ಯ ಸಚೇತಕ ಎ.ಎಚ್. ಶಿವಯೋಗಿಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯ ವೈ.ಎ. ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಜಿಲ್ಲಾಧ್ಯಕ್ಷ ಎನ್. ರಾಜಶೇಖರ, ಮಾಜಿ ಶಾಸಕ ವೈ. ಸಂಪಂಗಿ, ರಾಜೇಶ್ ಕುಮಾರ್, ಮುಖಂಡ ಮಾಡಾಳ್ ಮಲಿಕಾರ್ಜುನ್, ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ರೈತ ವಿರೋಧಿ, ಬಡವರ ವಿರೋಧಿ ಸರಕಾರ- ವಿಜಯೇಂದ್ರ

BJP (1)

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆಯ ಗ್ಯಾರಂಟಿಯನ್ನು ಜನರಿಗೆ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, 50ಕ್ಕೂ ಹೆಚ್ಚು ದಿನಬಳಕೆಯ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿದ ಸರಕಾರ ಸಿದ್ದರಾಮಯ್ಯನವರದು ಎಂದು ಟೀಕಿಸಿದರು.

ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮತ್ತು ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ರೂಪಾಯಿಗಳನ್ನು ಸಿದ್ದರಾಮಯ್ಯನವರ ಸರಕಾರ ದುರ್ಬಳಕೆ ಮಾಡಿದೆ ಎಂದು ಆರೋಪಿಸಿದರು. ಕರ್ನಾಟಕ ರಾಜ್ಯದಲ್ಲಿ ಇರುವುದು ಜನಪರ ಸರಕಾರ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಬಡವರ, ರೈತರ, ಜನಸಾಮಾನ್ಯರ ಪರವಾದ ಸರಕಾರ ಅಲ್ಲ. ಈ ಸರಕಾರ ರೈತ ವಿರೋಧಿ ಹಾಗೂ ಬಡವರ ವಿರೋಧಿ ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕರಿಂದ ಸರಕಾರ ಉರುಳಿಸುವ ಕಾರ್ಯ

ಕಾಂಗ್ರೆಸ್ ಮುಖಂಡರು ಕಿತ್ತಾಡಿದರೆ ಬಿಜೆಪಿಯವರು, ಅಮಿತ್ ಶಾ ಅವರು ಈ ಸರಕಾರವನ್ನು ಉರುಳಿಸಿಬಿಡುತ್ತಾರೆ ಎಂದು ಮಲ್ಲಿಕಾರ್ಜುನ ಖರ್ಗೆಯವರು ಕಿವಿಮಾತು ಹೇಳಿದ್ದಾರೆ ಎಂದು ತಿಳಿಸಿದ ಅವರು, ಖರ್ಗೆಯವರೇ, ನಿಮ್ಮ ಕಾಂಗ್ರೆಸ್ ಪಕ್ಷದ ಶಾಸಕರೇ ಸರಕಾರ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಸಿದ್ದರಾಮಯ್ಯನವರು ಕಳೆದೆರಡು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡುತ್ತಿಲ್ಲ ಎಂದು ಬಿ.ವೈ. ವಿಜಯೇಂದ್ರ ಅವರು ಗಮನ ಸೆಳೆದರು.

ಸಿದ್ದರಾಮಯ್ಯನವರು ಕಳೆದ 20 ತಿಂಗಳಿಂದ ಅಭಿವೃದ್ಧಿ ಕಾರ್ಯಕ್ಕೆ ಹಣ ನೀಡಿಲ್ಲ; ಗ್ಯಾರಂಟಿಗೆ ಹಣ ಹೊಂದಿಸಲು ಕಷ್ಟವಾಗಿದೆ ಎಂದು ಕಾಂಗ್ರೆಸ್ಸಿನ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಅದೇ ಪಕ್ಷದ ಹಿರಿಯ ಶಾಸಕ ರಾಜು ಕಾಗೆಯವರು ಅಭಿವೃದ್ಧಿ ಕಾರ್ಯಕ್ಕೆ ಹಣ ಇಲ್ಲದೆ, ಆತ್ಮಹತ್ಯೆ ಮಾಡಿಕೊಳ್ಳುವಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದಿರುವುದಾಗಿ ವಿವರಿಸಿದರು.

ಕರ್ನಾಟಕ ರಾಜ್ಯದಲ್ಲಿ ಇರುವುದು ಜನಪ್ರಿಯ ಸರಕಾರವಲ್ಲ; ಇದು ಜಾಹೀರಾತಿನ ಸರಕಾರ ಎಂದು ಟೀಕಿಸಿದರು. ಇಂಥ ಜನವಿರೋಧಿ ಸರಕಾರದ ನಿಜ ಬಣ್ಣ ಬಯಲು ಮಾಡಿ, ಜನಜಾಗೃತಿ ಮೂಡಿಸಲು ಬಿಜೆಪಿ ಜನಾಕ್ರೋಶ ಯಾತ್ರೆ ಮಾಡುತ್ತಿದೆ ಎಂದು ವಿವರಿಸಿದರು.

ಹಿಂದೆ ಯಡಿಯೂರಪ್ಪ ಅವರು ಬಿಜೆಪಿ ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕವು ಅಭಿವೃದ್ಧಿ ವಿಷಯದಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿತ್ತು. ಅದೇ ಕರ್ನಾಟಕವು ಈಗ ಇಡೀ ದೇಶದಲ್ಲಿ ಮೊದಲ ಸ್ಥಾನಕ್ಕೆ ಬಂದಿದೆ. ಅದು ಅಭಿವೃದ್ಧಿ ವಿಚಾರಕ್ಕೆ ಅಲ್ಲ; ಭ್ರಷ್ಟಾಚಾರದಲ್ಲಿ ಎಂದು ವ್ಯಂಗ್ಯವಾಗಿ ನುಡಿದರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಇದನ್ನು ಹೇಳಿದ್ದಾಗಿ ವಿವರಿಸಿದರು.

ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಬಿ.ಸಿ. ಪಾಟೀಲ್, ಮುಖಂಡ ಭರತ್ ಬೊಮ್ಮಾಯಿ, ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್, ಮಾಜಿ ಶಾಸಕ ಶಿವರಾಜ್ ಸಜ್ಜನ್, ವಿರುಪಾಕ್ಷಪ್ಪ ಬಳ್ಳಾರಿ, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.