ರಾಮತೀರ್ಥ ಹೊಸಕೊಪ್ಪ ಮೀಸಲು ಅರಣ್ಯದಲ್ಲಿ ಚಿರತೆ ಸಾವು; ಗ್ರಾಮಸ್ಥರಲ್ಲಿ ಆತಂಕ
Hanagal News: ಹಾನಗಲ್ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮಕ್ಕೆ ಹೊಂದಿಕೊಂಡಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆ ಮೃತಪಟ್ಟಿರುವುದು ಕಂಡುಬಂದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಹಾನಗಲ್ ವಲಯ ಅರಣ್ಯಾಧಿಕಾರಿಗಳು ಹಾಗೂ ಜಿಲ್ಲಾ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
ಹಾನಗಲ್, ಆ.29: ಹಾನಗಲ್ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮಕ್ಕೆ ಹೊಂದಿಕೊಂಡಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆ ಮೃತಪಟ್ಟಿರುವುದು ಕಂಡುಬಂದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಚಿರತೆ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹಾನಗಲ್ (Hanagal News) ವಲಯ ಅರಣ್ಯಾಧಿಕಾರಿಗಳು ಹಾಗೂ ಜಿಲ್ಲಾ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪಶುವೈದ್ಯರು ಸ್ಥಳಕ್ಕೆ ಆಗಮಿಸಿ ಚಿರತೆಯ ಮೃತದೇಹದ ಪರೀಕ್ಷೆ ನಡೆಸಿದರು.
ಅರಣ್ಯ ಪ್ರದೇಶದಲ್ಲಿ ಚಿರತೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು. ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಸಂಚಾರ ಹೆಚ್ಚಿರುವುದರಿಂದ ರೈತರು ಹಾಗೂ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ರಸ್ತೆ ನಿರ್ಮಾಣಕ್ಕೆ ಆಗ್ರಹ
ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಸಮರ್ಪಕ ರಸ್ತೆ ಸಂಪರ್ಕ ಕಲ್ಪಿಸಬೇಕು. ಅರಣ್ಯ ಪ್ರದೇಶದಲ್ಲಿರುವ ಕಾಡುಪ್ರಾಣಿಗಳ ಸಂಚಾರದ ಬಗ್ಗೆ ಅರಣ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಅವುಗಳು ರೈತರ ಜಮೀನುಗಳತ್ತ ಬರುತ್ತಿವೆ. ಇದರಿಂದ ರೈತರು ಬೆಳೆ ಹಾಗೂ ಜಾನುವಾರುಗಳ ರಕ್ಷಣೆಗೆ ಆತಂಕಪಡುವಂತಾಗಿದೆ. ಕಾಡುಪ್ರಾಣಿಗಳು ಗ್ರಾಮಗಳತ್ತ ಬಾರದಂತೆ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಚಿರತೆ ಸಾವಿಗೆ ನಿಖರ ಕಾರಣವೇನು ಎಂಬುದು ಪಶುವೈದ್ಯಕೀಯ ಪರೀಕ್ಷೆಯ ವರದಿ ಬಳಿಕ ತಿಳಿದುಬರಬೇಕಿದೆ.