ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Janivara Row: ನೀಟ್‌ ಪರೀಕ್ಷೆಯಲ್ಲಿ ಅಭ್ಯರ್ಥಿಯ ಜನಿವಾರ ತೆಗೆಸಿದ ಸಿಬ್ಬಂದಿ ಬಂಧನ

ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ (Janivara Row) ಸಿಬ್ಬಂದಿ ವಿರುದ್ಧ ಭಾನುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ ಎಂದು ಶರಣಪ್ಪ ಅವರು ಹೇಳಿದ್ದಾರೆ. ಬಂಧಿತ ಆರೋಪಿಗಳನ್ನು ಶರಣಗೌಡ ಮತ್ತು ಗಣೇಶ್ ಎಂದು ಗುರುತಿಸಲಾಗಿದೆ. ಅವರ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ

ನೀಟ್‌ ಪರೀಕ್ಷೆಯಲ್ಲಿ ಅಭ್ಯರ್ಥಿಯ ಜನಿವಾರ ತೆಗೆಸಿದ ಸಿಬ್ಬಂದಿ ಬಂಧನ

ಹರೀಶ್‌ ಕೇರ ಹರೀಶ್‌ ಕೇರ May 6, 2025 8:01 AM

ಕಲಬುರಗಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET exam) ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ (Janivara Row) ಒತ್ತಾಯಿಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಕಲಬುರಗಿಯ ನೀಟ್‌ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಎಸ್.ಡಿ. ಶರಣಪ್ಪ ಅವರು ತಿಳಿಸಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಸಿಬ್ಬಂದಿ ವಿರುದ್ಧ ಭಾನುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ ಎಂದು ಶರಣಪ್ಪ ಅವರು ಹೇಳಿದ್ದಾರೆ. ಬಂಧಿತ ಆರೋಪಿಗಳನ್ನು ಶರಣಗೌಡ ಮತ್ತು ಗಣೇಶ್ ಎಂದು ಗುರುತಿಸಲಾಗಿದೆ. ಅವರ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸರು ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ಕಾಯ್ದೆಯ ಸೆಕ್ಷನ್ 298 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಶರಣಪ್ಪ ಅವರು ತಿಳಿಸಿದ್ದಾರೆ.

ಬಂಧಿತ ಇಬ್ಬರು ಆರೋಪಿಗಳು ಖಾಸಗಿ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ. ಭಾನುವಾರ ನೀಟ್ ಪರೀಕ್ಷೆ ಬರೆಯಲು ನಗರದ ಸೆಂಟ್ ಮೇರಿ ಶಾಲೆಗೆ ಬಂದಿದ್ದ ಬಸವಕಲ್ಯಾಣದ ಶ್ರೀಪಾದ ಪಾಟೀಲ್ ಎಂಬ ವಿದ್ಯಾರ್ಥಿಯನ್ನು ತಪಾಸಣಾ ಸಿಬ್ಬಂದಿ ತಡೆದು, ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಸೂಚನೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಖಂಡಿಸಿ ಬ್ರಾಹ್ಮಣ ಸಮುದಾಯದ ಸದಸ್ಯರು ನಿನ್ನೆ ಪ್ರತಿಭಟನೆ ನಡೆಸಿದ್ದರು.

ಕಳೆದ ತಿಂಗಳು ನಡೆದ ಸಿಇಟಿ ಪರೀಕ್ಷೆಯಲ್ಲಿ ಬೀದರ್, ಶಿವಮೊಗ್ಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಜನಿವಾರವನ್ನು ಬಲವಂತದಿಂದ ತೆಗೆಸಲಾಗಿತ್ತು. ಇದನ್ನು ವಿರೋಧಿಸಿ ಬ್ರಾಹ್ಮಣ ಮಹಾಸಭಾ ಪ್ರತಿಭಟನೆ ನಡೆಸಿದ್ದಲ್ಲದೆ, ಕೋರ್ಟ್‌ಗೂ ಹೋಗಿತ್ತು. ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿದೆ.

ಇದನ್ನೂ ಓದಿ: Janivara Row: ನೀಟ್‌ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಇಬ್ಬರು ಸಿಬ್ಬಂದಿ ಮೇಲೆ ಎಫ್‌ಐಆರ್