Kalaburagi News: ಹಲ್ಲಿ ಬಿದ್ದ ನೀರು ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
Kalaburagi News: ಕಲಬುರಗಿಯ ಗುಲ್ಬರ್ಗ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗೆ ಹಲ್ಲಿ ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಗುಲ್ಬರ್ಗ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕರ ವಸತಿ ನಿಲಯ. -
ಕಲಬುರಗಿ, ಜೂ.15: ಇಲ್ಲಿನ ಗುಲ್ಬರ್ಗ ವಿಶ್ವವಿದ್ಯಾಲಯದ (Kalaburagi News) ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ಹಲ್ಲಿ ಬಿದ್ದ ನೀರು ಸೇವಿಸಿದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ವಸತಿ ನಿಲಯದ ನೀರಿನ ಟ್ಯಾಂಕ್‌ನಲ್ಲಿ ಹಲ್ಲಿ ಸತ್ತು ಬಿದ್ದಿದ್ದರೂ ಅದನ್ನು ಗಮನಿಸದೆ ಅದೇ ನೀರನ್ನು ಕುಡಿಯಲು ಹಾಗೂ ಅಡುಗೆಗೆ ಬಳಸಲಾಗಿದೆ ಎನ್ನಲಾಗಿದೆ.
ನೀರು ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿಗಳು ಅನುಮಾನಗೊಂಡು ಟ್ಯಾಂಕ್ ಪರಿಶೀಲಿಸಿದಾಗ ಹಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಹಲ್ಲಿ ಬಿದ್ದ ನೀರನ್ನು ಸೇವಿಸಿದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸುಸ್ತು ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದೆ. ಇವರಲ್ಲಿ ನಾಲ್ವರು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆ ಅವರನ್ನು ತಕ್ಷಣವೇ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೆ ವೈದ್ಯರು ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಔಷಧೋಪಚಾರ ನೀಡಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 13.14 ಕೋಟಿ ರೂ ಮೌಲ್ಯದ ಗಾಂಜಾ ವಶ; ಆರು ಜನರ ಬಂಧನ
ಘಟನೆ ಕುರಿತು ವಿದ್ಯಾರ್ಥಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಸತಿ ನಿಲಯದಲ್ಲಿ ಕುಡಿಯುವ ನೀರಿನ ಗುಣಮಟ್ಟ ಹಾಗೂ ಸ್ವಚ್ಛತೆ ಕುರಿತು ಸಮಗ್ರ ಪರಿಶೀಲನೆ ನಡೆಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಅಧಿಕಾರಿಗಳು ಘಟನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.